×
Ad

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ನಾಪತ್ತೆ: ವಿಶ್ವಾಸ್ ಅಮೀನ್ ಟೀಕೆ

Update: 2020-07-30 18:39 IST

ಉಡುಪಿ, ಜು.30: ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಜಿಲ್ಲೆಯ ಬಗ್ಗೆ ತೀವ್ರ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಕೋವಿಡ್ -19 ಲಾಕ್ಡೌನ್ ಬಳಿಕ ಸತತ 4 ತಿಂಗಳ ಅವಧಿಯಲ್ಲಿ ಕೇವಲ 2 ಬಾರಿ ಮಾತ್ರ ಜಿಲ್ಲೆಗೆ ಆಗಮಿಸಿದ್ದಾರೆ ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್ ಟೀಕಿಸಿದ್ದಾರೆ.

ಜಿಲ್ಲೆಯಲ್ಲಿ ಚುನಾಯಿತ ಶಾಸಕರಿದ್ದರೂ ಕೂಡ ಹೊರ ಜಿಲ್ಲೆಯವರಿಗೆ ಉಸ್ತುವಾರಿ ಸಚಿವರನ್ನಾಗಿ ಮಾಡಿದ್ದು ಸರಕಾರದ ಮೊದಲ ತಪ್ಪು. ಕೊರೋನದ ಸಂಕಷ್ಠ ಸಮಯದಲ್ಲಿ ಜಿಲ್ಲೆಯ ಜನರೊಂದಿಗೆ ನಿಲ್ಲಬೇಕಾದ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಜನತೆಯನ್ನು ಅನಾಥರನ್ನಾಗಿಸಿದ್ದಾರೆ ಎಂದು ಅವರು ದೂರಿದ್ದಾರೆ.

ಉಸ್ತುವಾರಿ ಸಚಿವರು ಜಿಲ್ಲೆಯ ಯಾವುದೇ ಸಮಸ್ಯೆಗಳನ್ನು ಕೂಡ ಗಂಭೀರವಾಗಿ ತೆಗೆದುಕೊಂಡಿಲ್ಲ. ಜಿಲ್ಲೆಯ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸನ್ನು ಸಂಪೂರ್ಣ ಮರೆತಿದ್ದು ಯಾವುದೇ ಸರ್ವಪಕ್ಷ ಸಭೆ ನಡೆಸದೆ ಎಲ್ಲಾ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರವನ್ನು ತೆಗೆದುಕೊಂಡಿರುವುದು ಸರಿಯಲ್ಲ. ಇನ್ನಾದರೂ ಉಸ್ತುವಾರಿ ಸಚಿವರು ಎಚ್ಚೆತ್ತು ಜಿಲ್ಲೆಯ ಸಮಸ್ಯೆಗಳ ಬಗ್ಗೆ ಗಮನ ಹರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಹೇಳಿಕೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News