ಕಾಂಗ್ರೆಸ್ ಜೊತೆ ಕೈ ಜೋಡಿಸಲು ಯಾವುದೇ ಸಂಘಟನೆಯ ಬೆಂಬಲ ಕೇಳಿಲ್ಲ: ಸಿದ್ದರಾಮಯ್ಯ

Update: 2020-07-30 18:13 GMT

ಮೈಸೂರು: ಭೂ ಸುಧಾರಣಾ ಕಾಯ್ದೆಗೆ ಸುಘ್ರೀವಾಜ್ಞೆ ಮೂಲಕ ತಿದ್ದುಪಡಿ ತಂದಿರುವ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಎಂದು ವಿರೋಧ ಪಕ್ಷದ ನಾಯಕನಾಗಿ ಹೇಳಿದ್ದೇನೆ ಹೊರತು ಕಾಂಗ್ರೆಸ್ ಪಕ್ಷದ ಜೊತೆ ಕೈಜೋಡಿಸಿ ಎಂದು ಯಾವುದೇ ಸಂಘಟನೆಗಳ ಬೆಂಬಲ ಕೇಳಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ಕಾಂಗ್ರೆಸ್ ಹೋರಾಟಕ್ಕೆ ರೈತ ಸಂಘ ಕೈಜೋಡಿಸುವುದಿಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾನು ದಲಿತ ಸಂಘಟನೆ, ರೈತ ಸಂಘಟನೆ ಮತ್ತು ಇತರೆ ಸಂಘಟನೆಗಳ ಜೊತೆ ಸಭೆ ನಡೆಸಿ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ಹೋರಾಟ ಮಾಡಿ ಎಂದು ಹೇಳಿದ್ದೇನೆ. ವಿರೋಧ ಪಕ್ಷದ ನಾಯಕನಾಗಿ ನಾನು ಮಾಡಬೇಕಿರುವ ಕೆಲಸವನ್ನು ಮಾಡಿದ್ದೇನೆ. ಅದನ್ನು ಸ್ವೀಕರಿಸುವುದು ಬಿಡುವುದು ಅವರಿಗೆ ಬಿಟ್ಟಿದ್ದು, ಕಾಂಗ್ರೆಸ್ ಜೊತೆ ಸೇರಿಕೊಂಡು ಹೋರಾಟ ಮಾಡಿ ಎಂದು ಹೇಳಿಲ್ಲ, ಇಂತಹ ಜನ ವಿರೋಧಿ ನೀತಿಯ ವಿರುದ್ಧ ಎಲ್ಲರೂ ಹೋರಾಟ ಮಾಡಬೇಕು ಎಂದು ಹೇಳಿದ್ದೇನೆ ಎಂದರು.

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ನಾನು ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಭೆ ನಡೆಸಿ ವಿರೋಧಿಸಿದ್ದೇವೆ. ಕಾಂಗ್ರೆಸ್ ಪಕ್ಷದ ಯಾರೂ ಈ ಕಾಯ್ದೆಯನ್ನು ಒಪ್ಪಿಕೊಂಡಿಲ್ಲ. ನಾವೆಲ್ಲರೂ ಒಗ್ಗಟ್ಟಿನಿಂದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿದ್ದೇವೆ. ಈ ಕಾಯ್ದೆಯಿಂದ ರೈತರು ಮತ್ತು ಬಡವರಿಗೆ ಸಾಕಷ್ಟು ತೊಂದರೆಯಾಗಲಿದೆ. ಈ ಸಂಬಂಧ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಲು ನಾವು ತಯಾರಿ ನಡೆಸುತ್ತಿರುವುದಾಗಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News