ವೈದ್ಯಕೀಯ ಸಲಕರಣೆ ಖರೀದಿ ಅವ್ಯವಹಾರ ಆರೋಪ: ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ಸೂಚನೆ

Update: 2020-08-01 16:22 GMT

ಬೆಂಗಳೂರು, ಆ.1: ಕೊರೋನ ನಿರ್ವಹಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರಕಾರ ಪಿಪಿಇ ಕಿಟ್, ವೆಂಟಿಲೇಟರ್ ಮತ್ತು ಔಷಧಿ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎನ್ನಲಾದ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.

ಸಾಮಾಜಿಕ ಕಾರ್ಯಕರ್ತ ಮಹಮ್ಮದ್ ಆರೀಫ್ ಜಮೀಲ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಅರ್ಜಿದಾರರ ಪರ ವಾದಿಸಿದ ರೆಹಮತ್ ಉಲ್ಲಾ ಕೊತ್ವಾಲ್ ಅವರು, ಕೋವಿಡ್-19 ನಿಯಂತ್ರಿಸಲು ಕರ್ನಾಟಕ ಡ್ರಗ್ಸ್, ಲಾಜಿಸ್ಟಿಕ್ಸ್ ಆ್ಯಂಡ್ ವೇರ್ ಹೌಸ್ ಸೊಸೈಟಿ ಮತ್ತು ಇತರೆ ಸರಕಾರಿ ಪ್ರಾಧಿಕಾರಗಳು ಮಾಸ್ಕ್, ಪಿಪಿಇ ಕಿಟ್, ವೆಂಟಿಲೇಟರ್ ಮತ್ತು ಔಷಧಿಯನ್ನು ಖರೀದಿ ಮಾಡಿವೆ. ಆದರೆ, ನಿಗದಿತ ದರಕ್ಕಿಂತ ಹೆಚ್ಚಿನ ಹಣಕ್ಕೆ ಖರೀದಿ ಮಾಡಿವೆ. ಈ ಹಗರಣದ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು. 

ಈ ಬೃಹತ್ ಅವ್ಯವಹಾರದಲ್ಲಿ 3 ಸಾವಿರ ಕೋಟಿ ರೂ.ಗಳಿಗೂ ಅಧಿಕ ಮೊತ್ತ ದುರ್ಬಳಕೆಯಾಗಿದೆ. ಅಧಿಕಾರಿಗಳು ಹಾಗೂ ಪ್ರಭಾವಿಗಳು ಶಾಮೀಲಾಗಿ ಸರಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ. ವೈದ್ಯಕೀಯ ಉಪಕರಣಗಳು ಮತ್ತು ಔಷಧಿ ಖರೀದಿ ಕುರಿತ ವರದಿಯನ್ನು ತರಿಸಿಕೊಂಡು ಪರಿಶೀಲಿಸಿಬೇಕು ಮತ್ತು ಹಗರಣದ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು ಎಂದು ಪೀಠಕ್ಕೆ ತಿಳಿಸಿದರು.

ವಕೀಲರ ವಾದ ಆಲಿಸಿದ ನ್ಯಾಯಪೀಠವು ರಾಜ್ಯ ಸರಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ, ವಿಚಾರಣೆಯನ್ನು ಮುಂದೂಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News