ಬಿಎಸ್‌ವೈಗೆ ಕೊರೋನ: ಆಡಳಿತದ ಹೊಣೆ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಹೆಗಲಿಗೆ

Update: 2020-08-03 15:45 GMT
ಟಿ.ಎಂ.ವಿಜಯಭಾಸ್ಕರ್

ಬೆಂಗಳೂರು, ಆ. 3: ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿರುವುದರಿಂದ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಆಡಳಿತದ ಹೊಣೆಗಾರಿಕೆಯನ್ನು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವಗೆ ವಹಿಸಲಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪನವರು ಇನ್ನೂ ನಾಲ್ಕೈದು ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದುಕೊಳ್ಳಲಿದ್ದು, ಅನಂತರ ಆಸ್ಪತ್ರೆಯಿಂದ ಬಿಡುಗಡೆಗೊಳ್ಳುವ ಸಾಧ್ಯತೆಗಳಿವೆ. ಆ ಬಳಿಕವೂ ಅವರು ಒಂದು ವಾರಕ್ಕೂ ಹೆಚ್ಚು ಕಾಲ ಹೋಂ ಕ್ವಾರಂಟೈನ್‍ನಲ್ಲಿ ಇರಬೇಕಾದ ಅನಿವಾರ್ಯತೆ ಇದೆ. ಸುಮಾರು ಎರಡು ವಾರ ಕಾಲ ಯಡಿಯೂರಪ್ಪನವರು ಆಡಳಿತದ ಜವಾಬ್ದಾರಿಯಿಂದ ದೂರವಿರುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಆಡಳಿತದ ಪ್ರಮುಖ ಹೊಣೆಗಾರಿಕೆಯನ್ನು ವಿಜಯಭಾಸ್ಕರ್ ಅವರಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆಸುತ್ತಿದ್ದ ಕೋವಿಡ್-19 ಕಾರ್ಯಪಡೆ ಸಭೆಗಳು, ಕೊರೋನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳುವುದು ಸೇರಿದಂತೆ ಇನ್ನಿತರ ಪ್ರಮುಖ ನಿರ್ಧಾರಗಳನ್ನು ಮುಖ್ಯ ಕಾರ್ಯದರ್ಶಿಗಳೇ ಕೈಗೊಳ್ಳಲಿದ್ದಾರೆ. ಈ ವೇಳೆ ಮುಖ್ಯ ಕಾರ್ಯದರ್ಶಿಗಳೊಂದಿಗೆ ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ. ಕಾರಜೊಳ, ಡಾ.ಅಶ್ವತ್ಥ ನಾರಾಯಣ, ಲಕ್ಷ್ಮಣ ಸವದಿ, ಸಚಿವರಾದ ಜೆ.ಸಿ.ಮಾಧುಸ್ವಾಮಿ, ಆರ್.ಅಶೋಕ್, ಬಸವರಾಜ ಬೊಮ್ಮಾಯಿ ಇರಲಿದ್ದಾರೆಂದು ಹೇಳಲಾಗುತ್ತಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೋನ ಸೋಂಕು ನಿಯಂತ್ರಣ ಸಂಬಂಧ ಕೋವಿಡ್-19 ಕಾರ್ಯಪಡೆ ಸಭೆ ನಡೆಸುವುದು, ತಜ್ಞ ವೈದ್ಯರೊಂದಿಗೆ ಸಮಾಲೋಚನೆ ಹಾಗೂ ಅಗತ್ಯ ಸಲಹೆ-ಸೂಚನೆಗಳನ್ನು ನೀಡಬೇಕಿರುತ್ತದೆ. ಜೊತೆಗೆ ಕೆಲ ಆಡಳಿತಾತ್ಮಕ ತೀರ್ಮಾನಗಳನ್ನು ಕೈಗೊಳ್ಳಬೇಕಿರುವುದರಿಂದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರಿಗೆ ಈ ಹೊಣೆ ನೀಡಲಾಗಿದೆ ಎಂದು ಗೊತ್ತಾಗಿದೆ.

ಇದೇ ಸಂದರ್ಭದಲ್ಲಿ ಬುಧವಾರ(ಆ.5) ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುತ್ತಿದ್ದು, ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳ ಸೂಕ್ಷ್ಮ ಮತ್ತು ಅತೀಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸುವ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹಾಗೂ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರೊಂದಿಗೆ ವಿಜಯ ಭಾಸ್ಕರ್ ಸಮಾಲೋಚನೆ ನಡೆಸಿದ್ದಾರೆಂದು ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News