ಸಿಎಂ ಬಿಎಸ್‌ವೈಗೆ ಕೋವಿಡ್: ಸಂಪುಟ ವಿಸ್ತರಣೆ ಮುಂದೂಡಿಕೆ

Update: 2020-08-03 17:33 GMT

ಬೆಂಗಳೂರು, ಆ. 3: ಸ್ವಾತಂತ್ರ್ಯೋತ್ಸವ ದಿನಾಚರಣೆಗೂ ಮೊದಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲು ತೀರ್ಮಾನಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕೊರೋನ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಸಂಪುಟ ವಿಸ್ತರಣೆ ಮುಂದೂಡಲ್ಪಟ್ಟಿದೆ.

ಇತ್ತೀಚೆಗಷ್ಟೇ ವಿಧಾನ ಪರಿಷತ್ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದ ಎಂಟಿಬಿ ನಾಗರಾಜ್, ಆರ್.ಶಂಕರ್, ಎಚ್.ವಿಶ್ವನಾಥ್ ಸೇರಿದಂತೆ ನಾಲ್ಕೈದು ಮಂದಿ ನೂತನವಾಗಿ ಸಂಪುಟ ಸೇರ್ಪಡೆಯಾಗಲಿದ್ದಾರೆಂದು ಹೇಳಲಾಗಿತ್ತು. ಆದರೆ, ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ. ಸಚಿವ ಸ್ಥಾನಕ್ಕಾಗಿ ದೊಡ್ಡ ಮಟ್ಟದಲ್ಲಿ ಲಾಬಿ ನಡೆಸುತ್ತಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ಉಮೇಶ್ ಕತ್ತಿ, ಸಿ.ಪಿ.ಯೋಗೇಶ್ವರ್, ಬಸನಗೌಡ ಪಾಟೀಲ್ ಯತ್ನಾಳ್ ಅವರ ಆಸೆಗೆ ತಣ್ಣೀರೆರೆಚಿದಂತಾಗಿದೆ.

ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪನವರ ಗುಣಮುಖರಾಗಿ ತಮ್ಮ ದೈನಂದಿನ ಕೆಲಸಕ್ಕೆ ಮರಳಿದ ಬಳಿಕ ದಿಲ್ಲಿಗೆ ತೆರಳಿ ಸಂಪುಟ ವಿಸ್ತರಣೆ ಸಂಬಂಧ ವರಿಷ್ಟರ ಸಮ್ಮತಿ ಬಳಿಕ ಸಚಿವ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಮಾಡಲಿದ್ದಾರೆ. ಹೀಗಾಗಿ ಸದ್ಯಕ್ಕೆ ಸಂಪುಟ ವಿಸ್ತರಣೆ ಮುಂದಕ್ಕೆ ಹೋಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News