ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊರೋನ ಸೋಂಕು ದೃಢ

Update: 2020-08-04 16:32 GMT

ಬೆಂಗಳೂರು, ಆ.4: ಜ್ವರದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೂ ಕೊರೋನ ಸೋಂಕು ತಗಲಿದ್ದು, ನಗರದ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ. ಅಲ್ಲದೆ, ಅವರ ಸಂಪರ್ಕಕ್ಕೆ ಬಂದಿದ್ದವರನ್ನು ಕ್ವಾರಂಟೈನ್ ಮಾಡಲಾಗಿದೆ.

ಸೋಮವಾರ ಬೆಳಗ್ಗೆಯಿಂದಲೆ ಜ್ವರದಿಂದ ಬಳಲುತ್ತಿದ್ದ ಸಿದ್ದರಾಮಯ್ಯರನ್ನು ಅಂದು ರಾತ್ರಿಯೆ ಆಸ್ಪತ್ರೆಗೆ ದಾಖಲಿಸಿ, ಕೊರೋನ ಆಂಟಿಜೆನ್ ಪರೀಕ್ಷೆ ಮಾಡಿಸಿದಾಗ ಕೊರೋನ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಅವರ ಪುತ್ರ ಹಾಗೂ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜು.30ರಂದು ಮೈಸೂರಿನ ಪ್ರೆಸ್ ಕ್ಲಬ್‍ನಲ್ಲಿ ಆಯೋಜಿಸಲಾಗಿದ್ದ ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಿದ್ದರಾಮಯ್ಯ, ಜು.31ರಂದು ಮಂಡ್ಯ ಜಿಲ್ಲೆಯ ಪ್ರವಾಸ ಕೈಗೊಂಡು, ಸುದ್ದಿಗೋಷ್ಠಿಯನ್ನು ನಡೆಸಿದ್ದರು. ಅಲ್ಲದೆ, ರಾಜ್ಯ ಸರಕಾರದ ವೈಫಲ್ಯಗಳು ಹಾಗೂ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಆ.1ರಂದು ಮೈಸೂರಿನಲ್ಲಿರುವ ತಮ್ಮ ನಿವಾಸದಲ್ಲಿ ಕುಟುಂಬ ಸದಸ್ಯರ ಜೊತೆ ವಾಸ್ತವ್ಯ ಹೂಡಿದ್ದರು. ಆ.2ರಂದು ಮೈಸೂರಿನಿಂದ ಬೆಂಗಳೂರಿಗೆ ಆಗಮಿಸಿದ ಸಿದ್ದರಾಮಯ್ಯ ಯಾವುದೇ ಸಭೆಗಳಲ್ಲಿ ಪಾಲ್ಗೊಳ್ಳದೆ ತಮ್ಮ ಸರಕಾರಿ ನಿವಾಸದಲ್ಲಿ ಉಳಿದುಕೊಂಡಿದ್ದರು. ಬೆಳಗ್ಗೆಯಿಂದಲೆ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಆನಂತರ ಕೋವಿಡ್ ಪರೀಕ್ಷೆಗೊಳಪಟ್ಟು, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾದರು.

ಮಣಿಪಾಲ್ ಆಸ್ಪತ್ರೆಯಲ್ಲಿ ಈಗಾಗಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊರೋನ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿದ್ದರಾಮಯ್ಯರಿಗೂ ತಜ್ಞ ವೈದ್ಯರ ತಂಡವು ನಿಗಾವಣೆಯಲ್ಲಿಟ್ಟು ಆರೈಕೆ ಮಾಡುತ್ತಿದೆ. ಸಿದ್ದರಾಮಯ್ಯನವರಿಗೆ ಸೋಂಕು ತಗುಲಿರುವುದು ದೃಢಪಡುತ್ತಿದ್ದಂತೆ ಅವರ ಸರಕಾರಿ ನಿವಾಸ ಹಾಗೂ ಮೈಸೂರಿನಲ್ಲಿರುವ ನಿವಾಸವನ್ನು ಸ್ಯಾನಿಟೈಸ್ ಮಾಡಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಆಸ್ಪತ್ರೆಗೆ ಭೇಟಿ ನೀಡಿ ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯನವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡದ ಜೊತೆ ಸಮಾಲೋಚನೆ ನಡೆಸಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೋನ ಸೋಂಕು ತಗಲಿರುವ ವಿಷಯ ಕೇಳಿ ಮನಸ್ಸಿಗೆ ಘಾಸಿಯಾಯಿತು. ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಸಾರ್ವಜನಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಜನಪ್ರತಿನಿಧಿಗಳು ಅತಿಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಚಾಚೂತಪ್ಪದೆ ಪಾಲಿಸುವಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಕೊರೋನ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸುರಕ್ಷಿತ ಅಂತರ ಕಾಯ್ದುಕೊಂಡು, ಶಿಸ್ತುಬದ್ಧ ಜೀವನ ಅಳವಡಿಸಿಕೊಳ್ಳುವ ಮೂಲಕ ಅಮೂಲ್ಯವಾದ ಜೀವ ಮತ್ತು ಜೀವನವನ್ನು ರಕ್ಷಿಸಿಕೊಳ್ಳಬೇಕು ಎಂದು ಅವರು ವಿನಮ್ರವಾಗಿ ಮನವಿ ಮಾಡಿದ್ದಾರೆ.

ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಸಚಿವರಾದ ರಮೇಶ್ ಜಾರಕಿಹೊಳಿ, ಬಿ.ಎ.ಬಸವರಾಜ, ಬಿ.ಸಿ.ಪಾಟೀಲ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಈಶ್ವರ್ ಖಂಡ್ರೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಬಿ.ಪುಷ್ಪಾ ಅಮರನಾಥ್ ಸೇರಿದಂತೆ ಇನ್ನಿತರ ಗಣ್ಯರು ಸಿದ್ದರಾಮಯ್ಯ ಅವರ ಆರೋಗ್ಯಕ್ಕಾಗಿ ಹಾರೈಸಿದ್ದಾರೆ.

ನನ್ನ ಕೊರೋನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೋನ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೊರೋನ ಸೋಂಕಿನಿಂದ ಶೀಘ್ರದಲ್ಲಿ ಗುಣಮುಖರಾಗಲಿ, ಉತ್ತಮ ಆರೋಗ್ಯದೊಂದಿಗೆ ಮತ್ತೆ ಎಂದಿನಂತೆ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಆತ್ಮೀಯರಾದ ಸಿದ್ದರಾಮಯ್ಯ ಅವರಿಗೆ ಕೊರೋನ ಸೋಂಕು ತಗುಲಿರುವುದು ಕೇಳಿ ಮನಸ್ಸಿಗೆ ಬಹಳ ನೋವುಂಟಾಯಿತು. ಆದಷ್ಟು ಬೇಗ ಅವರು ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಟ್ವೀಟ್ ಮಾಡಿದ್ದಾರೆ.

ವಿಪಕ್ಷ ನಾಯಕರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೋವಿಡ್ ಪಾಸಿಟಿವ್ ಬಂದಿರುವುದು ತಿಳಿದು ಬಂದಿದೆ. ರಾಜ್ಯ ಕಂಡ ಆದರ್ಶ ರಾಜಕಾರಣಿ ಅವರು. ಅವರಿಗೆ ಪಾಸಿಟಿವ್ ಬಂದಿರುವುದು ನನಗೆ ನೋವಾಗಿದೆ. ಆದಷ್ಟು ಬೇಗನೆ ಅವರು ಚೇತರಿಸಿಕೊಂಡು ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಮಣಿಪಾಲ ಆಸ್ಪತ್ರೆಯ ವೈದ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಅವರ ಆರೋಗ್ಯದಲ್ಲಿ ಸ್ಥಿರವಾಗಿದೆ. ರಾಜ್ಯದ ಜನ ಆತಂಕ ಪಡುವ ಅಗತ್ಯವಿಲ್ಲ. ಸಿಎಂ ಬಿಎಸ್‍ವೈ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಬೇಗ ಚೇತರಿಸಿಕೊಂಡು ಮತ್ತೆ ಎಂದಿನಂತೆ ಕರ್ತವ್ಯಕ್ಕೆ ಮರಳಲಿ ಎಂದು ಅವರು ಹಾರೈಸಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಆರಂಭದಲ್ಲಿ ಜ್ವರ, ಮೈ-ಕೈ ನೋವು ಕಾಣಿಸಿಕೊಂಡಿತ್ತು. ಮಣಿಪಾಲ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಿದ್ದರಾಮಯ್ಯ ಅವರಿಗೆ ಎರಡು ಬಾರಿ ಹೃದಯ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಸ್ಟಂಟ್ ಅಳವಡಿಸಲಾಗಿದೆ. ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಕೊರೋನ ಸೋಂಕು ದೃಢಪಟ್ಟಿರುವುದು ಅತ್ಯಂತ ಬೇಸರದ ಸಂಗತಿ. ಅವರು ಆದಷ್ಟು ಬೇಗ ಗುಣಮುಖರಾಗಿ ಜನಸೇವೆಗೆ ಮರಳಲಿ ಎಂದು ಪ್ರಾರ್ಥಿಸುತ್ತೇನೆ'

-ಸಲೀಂ ಅಹ್ಮದ್, ಕೆಪಿಸಿಸಿ ಕಾರ್ಯಾಧ್ಯಕ್ಷ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News