ಚಿಕ್ಕಮಗಳೂರಿನಲ್ಲಿ ಭಾರೀ ಗಾಳಿಮಳೆ: ಜನಜೀವನ ಅಸ್ತವ್ಯಸ್ತ

Update: 2020-08-04 04:57 GMT

ಚಿಕ್ಕಮಗಳೂರು, ಆ.4: ಕಾಫಿನಾಡಿನಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಮಲೆನಾಡು ಭಾಗದ ಮೂಡಿಗೆರೆ, ಕೊಪ್ಪ ಶೃಂಗೇರಿ, ನರಸಿಂಹರಾಜಪುರ ತಾಲೂಕು ವ್ಯಾಪ್ತಿಯಲ್ಲಿ ಗಾಳಿ ಸಹಿತ ಮಳೆ ಸುರಿಯುತ್ತಿದ್ದು, ಹಲವೆಡೆ ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ.

ಸೋಮವಾರ ಬೆಳಗ್ಗೆಯಿಂದ ಆರಂಭಗೊಂಡಿರುವ ಮಳೆ ಇನ್ನೂ ಮುಂದುವರಿದಿದೆ. ಈ ವೇಳೆ ಬೀಸುತ್ತಿರುವ ಭಾರೀ ಗಾಳಿಯಿಂದ ಹಲವೆಡೆ ಮರಗಳು ರಸ್ತೆಗುರುಳಿವೆ. ಇನ್ನೂ ಕೆಲವೆಡೆ ವಿದ್ಯುತ್ ಕಂಬಗಳ ಮೇಲೆ ಮರಗಳು ಉರುಳಿದ್ದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹಲವು ಗ್ರಾಮಗಳು ಕತ್ತಲೆಯಲ್ಲಿವೆ.

ಕಳಸ, ಕುದುರೆಮುಖ, ಸಂಸೆ ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದೆ. ಇದರಿಂದ ಮಲೆನಾಡಿನ ತುಂಗಾ, ಭದ್ರಾ, ಹೇಮಾವತಿ ನದಿಗಳು ಸೇರಿದಂತೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಹೊರನಾಡು- ಕಳಸ ಸಂಪರ್ಕದ ಭದ್ರಾ ನದಿಯ ಹೆಬ್ಬಾಳೆ ಸೇತುವೆ ಸಂಜೆಯೊಳಗೆ ಮುಳುಗಡೆಯಾಗುವ ಸಾಧ್ಯತೆ ಇದೆ.

ಇನ್ನು ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲೂ ನಿರಂತರ ಮಳೆಯಾಗುತ್ತಿದ್ದು, ಅಲ್ಲಲ್ಲಿ ಮಣ್ಣು ಕುಸಿತ, ಮರಗಳು ರಸ್ತೆಗೆ ಉರುಳುತ್ತಿರುವುದು ವರದಿಯಾಗಿದೆ. ಚಿಕ್ಕಮಗಳೂರು, ಕಡೂರು, ತರೀಕೆರೆ ಭಾಗದಲ್ಲೂ ಸಾಧಾರಣ ಮಳೆಯಾಗುತ್ತಿದ್ದು, ಮಲನೆನಾಡಿನಲ್ಲಿನ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News