ರಾಮ ಮಂದಿರ ಭೂಮಿಪೂಜೆ ಹಿನ್ನೆಲೆ : ಉಡುಪಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ

Update: 2020-08-04 13:05 GMT

ಉಡುಪಿ, ಆ.4: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನಾಳೆ ನಡೆಯುವ ಭೂಮಿ ಪೂಜೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಆ. 4ರ ರಾತ್ರಿ 8 ಗಂಟೆಯಿಂದ ಆ.6ರ ಬೆಳಗ್ಗೆ 6 ಗಂಟೆಯವರೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಸಿಆರ್‌ಪಿಸಿ ಕಲಂ 144ರ ಅನ್ವಯ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆ ಜಾರಿ ಇರುವ ಅವಧಿಯಲ್ಲಿ ಶಸ್ತ್ರಗಳು, ದೊಣ್ಣೆ, ಕತ್ತಿ, ಈಟಿ, ಗದೆ, ಬಂದೂಕು, ಚಾಕು, ಕೋಲು, ಲಾಠಿಗಳನ್ನು ಅಥವಾ ದೈಹಿಕ ಹಿಂಸೆ ಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ. ಪಟಾಕಿ, ಸ್ಪೋಟಕಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ.

ಯಾವುದೇ ರೀತಿಯ ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ರ್ಯಾಲಿ, ಸಾರ್ವಜನಿಕ ರಾಜಕೀಯ, ಸಭೆ-ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಿದೆ. ವ್ಯಕ್ತಿಗಳ ಅಥವಾ ಶವಗಳ, ಆಕೃತಿಗಳ ಪ್ರದರ್ಶನ ಮಾಡುವುದನ್ನು ನಿಷೇಧಿಸಿದೆ. ಸಾರ್ವಜನಿಕ ಸ್ಥಳದಲ್ಲಿ ಎಲ್‌ಇಡಿ ಬಳಸಿ ಪ್ರದರ್ಶನ ನಡೆಸುವುದನ್ನು, ಸಾರ್ವಜನಿಕ ಸ್ಥಳದಲ್ಲಿ ಸಿಹಿ ಹಂಚಿ, ಸಂಭ್ರಮಾಚರಣೆ ಮಾಡುವುದನ್ನು ನಿಷೇಧಿಸಲಾಗಿದೆ.

ಉಡುಪಿ ಜಿಲ್ಲಾ ವ್ಯಾಪ್ತಿಯ ಪಟಾಕಿ ಮಾರಾಟ ಮಾಡುವ ಪರವಾನಿಗೆ ದಾರರು ಅಂಗಡಿಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. ಪಟಾಕಿ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News