ಕೋವಿಡ್-19 ಸುರಕ್ಷಾ ಕ್ರಮದೊಂದಿಗೆ ಸ್ವಾತಂತ್ರ ದಿನಾಚರಣೆ : ಜಿಲ್ಲಾಧಿಕಾರಿ ಜಿ.ಜಗದೀಶ್

Update: 2020-08-05 12:34 GMT

 ಉಡುಪಿ, ಆ.5: ಸರಕಾರದ ಮಾರ್ಗಸೂಚಿಯಂತೆ ಕೋವಿಡ್-19 ನಿಯಂತ್ರಣದ ಸುರಕ್ಷಾ ಕ್ರಮಗಳನ್ನು ಅನುಸರಿಸಿ ಅಜ್ಜರಕಾಡಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆ.15ರಂದು ಈ ಬಾರಿಯ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ.

ಬುಧವಾರ ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸ್ವಾತಂತ್ರ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮಕ್ಕೆ ಆಗಮಿಸುವವರನ್ನು ಕ್ರೀಡಾಂಗಣದ ಪ್ರವೇಶದ್ವಾರದಲ್ಲಿ ಥರ್ಮಲ್ ಸ್ಕ್ಯಾನರ್ ಮೂಲಕ ಪರಿಶೀಲಿಸಲು ಹಾಗೂ ಸ್ಯಾನಿಟೈಸರ್ ವ್ಯವಸ್ಥೆಗೆ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸು ವಂತೆ ಸೂಚಿಸಿದ ಜಿಲ್ಲಾಧಿಕಾರಿ, ಕಾರ್ಯಕ್ರಮದಲ್ಲಿ ಪ್ರೇಕ್ಷಕರಿಗೆ ಸುರಕ್ಷತಾ ಅಂತರದಲ್ಲಿ ಆಸನ ವ್ಯವಸ್ಥೆ ಮತ್ತು ವೇದಿಕೆ ಮೇಲೆ ಸಹ ಸುರಕ್ಷತಾ ಅಂತರದಲ್ಲಿ ಗಣ್ಯರಿಗೆ ಆಸನ ವ್ಯವಸ್ಥೆ ಮಾಡುವಂತೆ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿ ಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಡಿಸಿ ತಿಳಿಸಿದರು.

ನೇರಪ್ರಸಾರ: ಕಾರ್ಯಕ್ರಮವನ್ನು ವೆಬ್‌ಕಾಸ್ಟಿಂಗ್ ಮೂಲಕ ನೇರ ಪ್ರಸಾರ ಮಾಡುವುದು ಸೇರಿದಂತೆ, ಫೇಸ್‌ಬುಕ್ ಲೈವ್ ಹಾಗೂ ಆನ್‌ಲೈನ್ ಮೂಲಕ ಸಾರ್ವಜನಿಕರಿಗೆ ನೇರವಾಗಿ ತಲುಪುವಂತೆ ಎನ್‌ಐಸಿ ಮೂಲಕ ಅಗತ್ಯ ಕ್ರಮ ಕೈಗೊಂಡು, ಇವುಗಳ ಲಿಂಕ್ ವಿವರಗಳನ್ನು ಸಾಕಷ್ಟು ಮುಂಚಿತವಾಗಿ ಸಾರ್ವಜನಿಕರಿಗೆ ನೀಡುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಕಾರ್ಯಕ್ರಮದಲ್ಲಿ ಕೋವಿಡ್-19 ವಿರುದ್ದ ಹೋರಾಟದಲ್ಲಿ ಗಮನಾರ್ಹ ಸಾಧನೆ ತೋರಿದ ಕೋವಿಡ್ ವಾರಿಯರ್ಸ್‌ಗಳನ್ನು ಸನ್ಮಾನಿಸಿ, ಗೌರವಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಕೋವಿಡ್‌ನಿಂದ ಗುಣಮುಖರಾದ ಆಯ್ದ ಕೆಲವು ಮಂದಿಗೆ ಸ್ವಾತಂತ್ರೋತ್ಸವ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನ ನೀಡುವಂತೆ ಅವರು ಸಂಬಂಧಿತ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಸ್ವಾತಂತ್ರೋತ್ಸವ ಪ್ರಯುಕ್ತ ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸುವಂತೆ, ಪೊಲೀಸ್, ಹೋಂ ಗಾರ್ಡ್, ಕರಾವಳಿ ಕಾವಲು ಪಡೆ, ಅರಣ್ಯ ಇಲಾಖೆಯಿಂದ ಪಥ ಸಂಚಲನ ನಡೆಸುವಂತೆ ತಿಳಿಸಿದರು. ಕೋವಿಡ್-19 ಸುರಕ್ಷಾ ನಿಯಮಗಳ ಉಲ್ಲಂಘನೆಯಾಗದಂತೆ ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಅವರು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರಚಂದ್ರ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News