ರಾಜ್ಯದಲ್ಲಿ ಪ್ರವಾಹ ಭೀತಿ: ಸಂತ್ರಸ್ತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಸಿದ್ದರಾಮಯ್ಯ ಆಗ್ರಹ

Update: 2020-08-06 07:15 GMT

ಬೆಂಗಳೂರು, ಆ.6: ಕಳೆದರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ, ಏರುತ್ತಿರುವ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರಕಾರ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರಕಾರ ಅಸ್ತಿತ್ವದಲ್ಲಿದೆಯೇ ಎಂದು ರಾಜ್ಯ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೈದಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮಾತ್ರವಲ್ಲ, ಉತ್ತರ ಕರ್ನಾಟಕದಲ್ಲಿಯೂ ಮಳೆಯಿಂದಾಗಿ ಜನ ಪ್ರವಾಹದ ಭೀತಿಯಲ್ಲಿದ್ದಾರೆ. ರಾಜ್ಯ ಸರಕಾರ ತಕ್ಷಣ ಕಾರ್ಯಪ್ರವೃತ್ತವಾಗಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಅವರಿಗೆ ಊಟ-ವಸತಿ ವ್ಯವಸ್ಥೆ ಕಲ್ಪಿಸಿ ಅವರಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಆಸ್ಪತ್ರೆಯಲ್ಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಕ್ಷಣ ಹಿರಿಯ ಸಹದ್ಯೋಗಿಗಳಿಗೆ ಜವಾಬ್ದಾರಿ ಹಂಚಿ ಅತಿವೃಷ್ಟಿಯ ಸಮಸ್ಯೆಗಳಿಗೆ ಪರಿಹಾರವನ್ನು ಕಲ್ಪಿಸಲು ವ್ಯವಸ್ಥೆ ಮಾಡಬೇಕು. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಸ್ಥಳಕ್ಕೆ ಕಳಿಸಿ ಪ್ರತ್ಯಕ್ಷದರ್ಶಿ ವರದಿಯನ್ನು ತರಿಸಿಕೊಳ್ಳಬೇಕು ಎಂದು ಆಗ್ರಹಿಸಿದರು

ರಾಜ್ಯದ ಕಂದಾಯ ಸಚಿವರೂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆಂದು ಹೇಳಲಾಗುತ್ತಿದೆ. ಪ್ರವಾಹ ನಿಯಂತ್ರಣ ಮತ್ತು ಪರಿಹಾರ ಕಾರ್ಯದಲ್ಲಿ ಕಂದಾಯ ಇಲಾಖೆಯ ಜವಾಬ್ದಾರಿ ಹೆಚ್ಚಿರುವುದರಿಂದ ಪೂರಕ ವ್ಯವಸ್ಥೆ ಮಾಡುವ ಬಗ್ಗೆ ಮುಖ್ಯಮಂತ್ರಿ ಗಮನಹರಿಸಬೇಕು ಎಂದು ಒತ್ತಾಯಿಸಿರುವ ಸಿದ್ದರಾಮಯ್ಯ, ಕಳೆದ ವರ್ಷದ ಆಗಸ್ಟ್-ಅಕ್ಟೋಬರ್ ತಿಂಗಳ ಪ್ರವಾಹದಿಂದ ಜನತೆ ಇನ್ನೂ ಚೇತರಿಸಿಕೊಂಡಿಲ್ಲ. ಹಳೆಯ ಹಾನಿಯ ಪರಿಹಾರ ಕಾರ್ಯವೇ ಇನ್ನೂ ಪೂರ್ಣಗೊಂಡಿಲ್ಲ. ನಿರಂತರವಾಗಿ ಈ ಬಗ್ಗೆ ನಾವು ಎಚ್ಚರಿಸುತ್ತಿದ್ದರೂ ಸರಕಾರ ಸ್ಪಂದಿಸಿಲ್ಲ. ರಾಜ್ಯ ಸರಕಾರದ ಈ ನಿರ್ಲಕ್ಷಕ್ಕೆ ಅಮಾಯಕ ಜನ ಬಲಿಯಾಗುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News