ಹೆಚ್ಚು ಫಲಾನುಭವಿಗಳಿಗೆ ಯೋಜನೆಗಳು ದೊರಕುವಂತೆ ಕ್ರಮಕೈಗೊಳ್ಳಿ: ಗೋವಿಂದ ಕಾರಜೋಳ ಸೂಚನೆ

Update: 2020-08-06 16:38 GMT

ಬೆಂಗಳೂರು, ಆ.6: ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಯೋಜನೆಗಳು, ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿ, ಹೆಚ್ಚು ಫಲಾನುಭವಿಗಳಿಗೆ ಯೋಜನೆಗಳು ತಲುಪುವಂತೆ ಕ್ರಮಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚಿಸಿದರು.

ಗುರುವಾರ ನಗರದಲ್ಲಿ ನಡೆದ ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯೋಜನೆಗಳು ಹೆಚ್ಚು ಫಲಾನುಭವಿಗಳಿಗೆ ತಲುಪಿಸಲು ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಫಲಾನುಭವಿಗಳು ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಸ್ವಾವಲಂಬಿಗಳಾಗಬೇಕು.  ಇಲಾಖೆಯ ಕಾರ್ಯಕ್ರಮಗಳನ್ನು ತ್ವರಿತವಾಗಿ ಅನುಷ್ಟಾನಗೊಳಿಸಿ, ನಿಗಧಿತ ಅವಧಿಯೊಳಗೆ ಪ್ರತಿಶತ ಪೂರ್ಣಗೊಳಿಸಬೇಕು. ಪಿಡಿ ಖಾತೆಯಲ್ಲಿರುವ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಸದ್ಬಳಕೆಯಾಗಬೇಕು. ವಿದ್ಯಾರ್ಥಿವೇತನ ಯೋಜನೆಗೆ ಫಲಾನುಭವಿಗಳ ಆಧಾರ್ ಸಂಪರ್ಕ ಒದಗಿಸಬೇಕು. ನಿಗದಿತ ಅವಧಿಯೊಳಗೆ ಶುಲ್ಕ ಮರುಪಾವತಿಸಬೇಕು ಎಂದು ಅವರು ಹೇಳಿದರು.

ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಸ್ತಾವನೆಗಳನ್ನು ತ್ವರಿತವಾಗಿ ಕೇಂದ್ರ ಸರಕಾರಕ್ಕೆ ಸಲ್ಲಿಸಬೇಕು. ಅಂತರ್ ಜಾತಿ ವಿವಾಹ ಯೋಜನೆಯಡಿ ಫಲಾನುಭವಿಗಳಿಗೆ ಪ್ರೋತ್ಸಾಹ ಧನವನ್ನು ನಿಗದಿತ ಅವಧಿಯೊಳಗೆ ನೀಡಬೇಕು. ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು ಎಂದು ಗೋವಿಂದ ಕಾರಜೋಳ ಸೂಚಿಸಿದರು.

ಸಭೆಯಲ್ಲಿ ಎಸ್‍ಸಿಪಿ ಮತ್ತು ಟಿಎಸ್ಪಿ ಯೋಜನೆಯ ಸಲಹೆಗಾರ ಇ.ವೆಂಕಟಯ್ಯ, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ರವಿಕುಮಾರ್ ಸುರಪುರ್, ಅಪರ ನಿರ್ದೇಶಕ ನಾಗೇಶ್, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಸಂಗಪ್ಪ, ಎಸ್‍ಸಿಪಿ ಮತ್ತು ಟಿಎಸ್‍ಪಿ ಕೋಶದ ನಿರ್ದೇಶಕಿ ಊರ್ಮಿಳಾ, ಡಿಸಿಎಂ ಅವರ ಆಪ್ತ ಕಾರ್ಯದರ್ಶಿ ವಿ. ಶ್ರೀನಿವಾಸ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News