ತೀವ್ರ ಮಳೆ, ಪ್ರವಾಹ ಪರಿಸ್ಥಿತಿ: ಕೊಡಗು ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಸಮಾಲೋಚನೆ

Update: 2020-08-08 17:14 GMT

ಬೆಂಗಳೂರು, ಆ. 8: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತೀವ್ರ ಮಳೆ ಹಾಗೂ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪನವರು ದೂರವಾಣಿಯಲ್ಲಿ ಸಮಾಲೋಚನೆ ನಡೆಸಿದ್ದು, ತುರ್ತು ಪರಿಸ್ಥಿತಿ ನಿರ್ವಹಣೆ ಸಂಬಂಧ ಸಲಹೆ-ಸೂಚನೆಗಳನ್ನು ನೀಡಿದ್ದಾರೆ.

ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು, ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಪರಿಣಾಮ ಭೂ ಕುಸಿತದ ಹಿನ್ನೆಲೆ ಜಿಲ್ಲಾಧಿಕಾರಿ ಜೊತೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದು, ವಾಸ್ತವ ಪರಿಸ್ಥಿತಿ ಮಾಹಿತಿ ಪಡೆದಿದ್ದಾರೆ. ಅಲ್ಲದೆ, ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನ ನೀಡಿದ್ದಾರೆಂದು ಗೊತ್ತಾಗಿದೆ.

ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಸರಕಾರದ ಎಲ್ಲ ನೆರವು ನೀಡಲು ಕ್ರಮ ವಹಿಸಬೇಕು. ಜನರಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ಸೂಕ್ತ ಮುನ್ನಚ್ಚರಿಕೆ ಕ್ರಮ ವಹಿಸಿ ಎಂದು ಸೂಚನೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಕೊಡಗು ಜಿಲ್ಲೆಯಲ್ಲೆ ಮೊಕ್ಕಂ ಹೂಡಿದ್ದು, ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News