ಶಿಕ್ಷಕರು-ಉಪನ್ಯಾಸಕರಿಗೆ ವಿಶೇಷ ಆರ್ಥಿಕ ನೆರವು ನೀಡಲು ಕುಮಾರಸ್ವಾಮಿ ಒತ್ತಾಯ

Update: 2020-08-08 18:08 GMT

ಬೆಂಗಳೂರು, ಆ. 8: `ಕೊರೋನ ಸೋಂಕಿನ ಸಂಕಷ್ಟ ಕಾಲದಲ್ಲಿ ವೇತನವಿಲ್ಲದೆ ಕಂಗೆಟ್ಟಿರುವ ರಾಜ್ಯದ ಸುಮಾರು ಎರಡೂವರೆ ಲಕ್ಷ ಖಾಸಗಿ ಶಾಲಾ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ನೆರವಿಗೆ ಸರಕಾರ ತಕ್ಷಣವೇ ಮುಂದಾಗಬೇಕು' ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಶನಿವಾರ ಸರಣಿ ಟ್ವೀಟ್ ಮಾಡಿರುವ ಅವರು, `ರಾಜ್ಯದಾದ್ಯಂತ 20 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲೆಗಳ ಶಿಕ್ಷಕರಿಗೆ ಎಪ್ರಿಲ್ ತಿಂಗಳಿನಿಂದ ವೇತನ ಸಿಗದೇ ದೈನಂದಿನ ಜೀವನ ಸಾಗಿಸಲು ಪರದಾಡುತ್ತಿದ್ದಾರೆ. ಅತಿಥಿ ಉಪನ್ಯಾಸಕರ ನೋವು ಇದಕ್ಕಿಂತ ಭಿನ್ನವಾಗಿಲ್ಲ. ಸರಕಾರ ಈ ಬಗ್ಗೆ ಖಾಸಗಿ ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಅತಂತ್ರಕ್ಕೆ ಸಿಲುಕಿರುವ ಶಿಕ್ಷಕರ ನೆರವಿಗೆ ತಕ್ಷಣ ಧಾವಿಸಬೇಕು' ಎಂದು ಒತ್ತಾಯಿಸಿದ್ದಾರೆ.

`ಕೆಲ ಖಾಸಗಿ ಶಾಲೆಗಳಲ್ಲಿ ಶೇಕಡ ಐವತ್ತಕ್ಕಿಂತಲೂ ಕಡಿಮೆ ವೇತನ ನೀಡುತ್ತಿದ್ದರೂ ಸಕಾಲಕ್ಕೆ ಪಾವತಿಸುತ್ತಿಲ್ಲ. ಬೇರೆ ಉದ್ಯೋಗ ಗೊತ್ತಿಲ್ಲದ ಲಕ್ಷಾಂತರ ಖಾಸಗಿ ಶಿಕ್ಷಕ ಸಮುದಾಯ ಮನೆ ಬಾಡಿಗೆ ಕಟ್ಟಲೂ ಆಗದೆ ಭವಿಷ್ಯದ ಬಗ್ಗೆ ಚಿಂತಾಕ್ರಾಂತರಾಗಿದ್ದಾರೆ. ಇಂತಹ ಶಿಕ್ಷಕರಿಗೆ ಸರಕಾರ ವಿಶೇಷ ಆರ್ಥಿಕ ನೆರವು ಮತ್ತು ಸಾಲ ಸೌಲಭ್ಯ ಒದಗಿಸಬೇಕು' ಎಂದು ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

`ವಿದ್ಯಾರ್ಥಿಗಳು ಶುಲ್ಕ ಕಟ್ಟುತ್ತಿಲ್ಲ ಎಂಬ ಕಾರಣ ಹೇಳಿ ಶಿಕ್ಷಕರನ್ನು ಕೆಲಸದಿಂದ ತೆಗೆಯಲು ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಮುಂದಾಗುತ್ತಿರುವುದನ್ನು ತಪ್ಪಿಸಲು ರಾಜ್ಯ ಸರಕಾರ ತಡಮಾಡದೆ ತಕ್ಷಣ ಮಧ್ಯಪ್ರವೇಶಿಸಿ ಸಂಕಷ್ಟಕ್ಕೆ ಸಿಲುಕಿರುವ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ನೆರವಿಗೆ ಧಾವಿಸಬೇಕು' ಎಂದು ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News