ಆರೋಗ್ಯ ಸಚಿವ ಶ್ರೀರಾಮುಲುಗೆ ಕೊರೋನ ಸೋಂಕು ದೃಢ

Update: 2020-08-09 14:46 GMT

ಬೆಂಗಳೂರು, ಆ. 9: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯನವರ ಬೆನ್ನಲ್ಲೆ ಇದೀಗ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರಿಗೂ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಇಲ್ಲಿನ ಶಿವಾಜಿನಗರದಲ್ಲಿರುವ ಸರಕಾರಿ ಸ್ವಾಮ್ಯದ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, `ಶೀಘ್ರದಲ್ಲೆ ಗುಣಮುಖನಾಗಿ ಬರುವ ವಿಶ್ವಾಸವಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟದ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಇತ್ತೀಚೆಗೆ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಸೂಕ್ತ ಮುನ್ನಚ್ಚರಿಕೆ ವಹಿಸಬೇಕು' ಎಂದು ಕೋರಿದ್ದಾರೆ.

`ಕೊರೋನ ಸೋಂಕು ಕಾಣಿಸಿಕೊಂಡ ಸಮಯದಿಂದಲೂ ರಾಜ್ಯದ ಮೂವತ್ತು ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆ ಸಮಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ' ಎಂದು ಸಚಿವ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.

`ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ನನಗೆ ಕೊರೋನ ವೈರಸ್ ಸೋಂಕು ಪಾಸಿಟಿವ್ ಬಂದಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ರಾಜ್ಯ ಸರಕಾರದ ಎಲ್ಲ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿ ಕೊರೋನ ಸೋಂಕಿನ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ' ಎಂದು ಶ್ರೀರಾಮುಲು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

ಸರಕಾರಿ ಆಸ್ಪತ್ರೆಗೆ ದಾಖಲು: ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದರಿಂದ ಸಿಎಂ ಯಡಿಯೂರಪ್ಪ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯನವರು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದಕ್ಕೆ ಸಾರ್ವಜನಿಕ ವಲಯದ ಆಕ್ಷೇಪ ವ್ಯಕ್ತವಾಗಿತ್ತು. ಉಭಯ ನಾಯಕರು `ಸರಕಾರಿ ಆಸ್ಪತ್ರೆ ದಾಖಲಾಗಬೇಕಿತ್ತು. ಆ ಮೂಲಕ ಸರಕಾರಿ ಆಸ್ಪತ್ರೆಗಳ ಚಿಕಿತ್ಸೆಯ ವಾಸ್ತವ ಅರಿಯಬೇಕಾಗಿತ್ತು' ಎಂಬ ಆಗ್ರಹ ಕೇಳಿಬಂದಿತ್ತು.

ಆ ಹಿನ್ನೆಲೆಯಲ್ಲಿಯೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಸರಕಾರಿ ಸ್ವಾಮ್ಯದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ದಾಖಲಾಗಿದ್ದು, ಸಚಿವರು-ಶಾಸಕರು ಹಾಗೂ ಜನಪ್ರತಿನಿಧಿಗಳಿಗೆ ಮಾದರಿಯಾಗಿದ್ದಾರೆಂದು ಸಾರ್ವಜನಿಕ ವಲಯದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News