ಬೆಂಕಿ ಬಿದ್ದ ಮೇಲೆ ಬಾವಿ ತೋಡಲು ಹೊರಟಿದೆ: ಸರಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ

Update: 2020-08-09 14:43 GMT

ಬೆಂಗಳೂರು, ಆ. 9: `ಕಳೆದ ವರ್ಷದ ಅತಿವೃಷ್ಟಿಯ ಹಾನಿಗೆ ಪರಿಹಾರ ಕಲ್ಪಿಸಲು ವಿಫಲವಾಗಿರುವ ಕಾರಣದಿಂದಾಗಿಯೇ ಈ ಬಾರಿಯ ಅತಿವೃಷ್ಟಿಗೆ ರಾಜ್ಯ ಸರಕಾರ ಕಣ್ಣು-ಕಾಲು ಬಿಡುತ್ತಿದೆ. ಕಳೆದ ತಿಂಗಳೆ ಪತ್ರ ಬರೆದು ಎಚ್ಚರಿಸಿದ್ದೆ, ಎಂದಿನಂತೆ ಸರಕಾರದಿಂದ ಉತ್ತರ ಇಲ್ಲ. ಈಗ ಬೆಂಕಿ ಬಿದ್ದ ಮೇಲೆ ಬಾವಿ ತೋಡಲು ಹೊರಟಿದೆ' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, `ಕಳೆದ ವರ್ಷದ ಪ್ರವಾಹದಿಂದ ಹಾನಿಗೊಳಗಾದ ರಸ್ತೆ, ಸೇತುವೆ, ಸರಕಾರಿ ಕಟ್ಟಡಗಳೆಷ್ಟು? ಅವುಗಳಲ್ಲಿ ಎಷ್ಟು ಪೂರ್ಣವಾಗಿ ದುರಸ್ತಿಗೊಂಡಿವೆ? ಖರ್ಚಾಗಿರುವ ಹಣ ಎಷ್ಟು? ಬಾಕಿ ಉಳಿದಿರುವ ಕಾಮಗಾರಿಗಳೆಷ್ಟು? ಈಗಲಾದರೂ ಈ ವಿವರ ನೀಡುವಿರಾ ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವರು ಆಗಿರುವ ಗೋವಿಂದ ಕಾರಜೊಳ ಅವರೇ?' ಎಂದು ಪ್ರಶ್ನಿಸಿದ್ದಾರೆ.

'ಕಳೆದ ವರ್ಷದ ಪ್ರವಾಹದಿಂದ ಹಾನಿಗೊಳಗಾದ ಮನೆಗಳಿಗೆ ನೀಡಿದ ಪರಿಹಾರ ಎಷ್ಟು? ಕಟ್ಟಿದ ಹೊಸ ಮನೆಗಳೆಷ್ಟು? ಪ್ರತಿಬಾರಿ ನೆರೆ ನೀರಿನಲ್ಲಿ ಮುಳುಗುವ ಮನೆಗಳೆಷ್ಟು? ಎಷ್ಟು ಕುಟುಂಬಗಳು ಶೆಡ್‍ನಲ್ಲಿವೇ? ಎಷ್ಟು ಕುಟುಂಬಗಳು ಬಾಡಿಗೆ ಮನೆಯಲ್ಲಿವೆ? ಈ ಮಾಹಿತಿ ನೀಡುವಿರಾ ವಸತಿ ಸಚಿವ ವಿ.ಸೋಮಣ್ಣ ಅವರೇ?' ಎಂದು ಸಿದ್ದರಾಮಯ್ಯ ಇಂದಿಲ್ಲಿ ಖಾರವಾಗಿ ಪ್ರಶ್ನೆ ಮಾಡಿದ್ದಾರೆ.

'ಕಳೆದ ವರ್ಷದ ಪ್ರವಾಹದಿಂದ ಹಾನಿಗೀಡಾದ ಸರಕಾರಿ ಶಾಲಾ ಕಟ್ಟಡಗಳೆಷ್ಟು? ಎಷ್ಟು ಕಟ್ಟಡಗಳನ್ನು ದುರಸ್ತಿಪಡಿಸಲಾಗಿದೆ ಮತ್ತು ಪುನರ್ ನಿರ್ಮಾಣ ಮಾಡಲಾಗಿದೆ? ದುರಸ್ತಿಗೆ ಬಾಕಿ ಉಳಿದಿರುವ ಕಟ್ಟಡಗಳು ಎಷ್ಟು? ಇದಕ್ಕಾಗಿ ಖರ್ಚಾದ ಹಣ ಎಷ್ಟು? ಈಗಲಾದರೂ ವಿವರ ನೀಡಬಹುದೇ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರೇ?' ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

'ಕಳೆದ ವರ್ಷದ ಪ್ರವಾಹದಿಂದ ಹಾನಿಗೊಳಗಾದ ಅಂಗನವಾಡಿ ಕಟ್ಟಡಗಳೆಷ್ಟು? ಅವುಗಳಲ್ಲಿ ದುರಸ್ತಿವಾಗಿರುವ ಕಟ್ಟಡಗಳೆಷ್ಟು? ಪುನರ್ ನಿರ್ಮಾಣವಾಗಿದ್ದೆಷ್ಟು? ಇವುಗಳ ದುರಸ್ತಿ-ಪುನರ್ ನಿರ್ಮಾಣಕ್ಕೆ ಖರ್ಚಾದ ಹಣ ಎಷ್ಟು? ದಯವಿಟ್ಟ ವಿವರ ನೀಡುವಿರಾ? ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರೇ?' ಎಂದು ಕೇಳಿರುವ ಸಿದ್ದರಾಮಯ್ಯ, ಪ್ರವಾಹ ಪರಿಸ್ಥಿತಿ ನಿರ್ವಹಿಸುವಲ್ಲಿ ಸರಕಾರ ವಿಫಲವಾಗಿದೆ ಎಂದು ದೂರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News