ಪರೀಕ್ಷೆ ಇಲ್ಲದೆ ಪಾಸ್ ಮಾಡಲು ಕೋರಿ ಪದವಿ ವಿದ್ಯಾರ್ಥಿಗಳಿಂದ ಅರ್ಜಿ: ಯುಜಿಸಿಗೆ ಹೈಕೋರ್ಟ್ ನಿಂದ ನೋಟಿಸ್ ಜಾರಿ

Update: 2020-08-09 17:15 GMT

ಬೆಂಗಳೂರು, ಆ.9: ಅಂತಿಮ ವರ್ಷದ ಪದವಿ ಪರೀಕ್ಷೆಗಳನ್ನು ನಡೆಸದೆ ಪಾಸ್ ಮಾಡಲು ನಿರ್ದೇಶಿಸಲು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಯುಜಿಸಿಗೆ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತು ಬೆಂಗಳೂರು ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿ ವೇದಾಂತ್ ಹಾಗೂ ಇತರ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ನೋಟಿಸ್ ಜಾರಿಗೊಳಿಸಿತು.   

ಅರ್ಜಿದಾರರ ಪರ ವಾದಿಸಿದ ವಕೀಲರು, ಅಂತಿಮ ವರ್ಷದ ಪದವಿ ಪರೀಕ್ಷೆಗಳನ್ನು ನಡೆಸಲು ಕೇಂದ್ರ ಗೃಹ ಸಚಿವಾಲಯ ಈಗಾಗಲೇ ಯುಜಿಸಿಗೆ ಅನುಮತಿ ನೀಡಿ ಆದೇಶಿಸಿದೆ. ಆದರೆ, ತಮ್ಮ ಹಿಂದಿನ ತರಗತಿಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆಯೇ ಪಾಸು ಮಾಡಿದ್ದಾರೆ. ನಮಗೂ ಪರೀಕ್ಷೆ ನಡೆಸದೆಯೇ ಪಾಸು ಮಾಡಬೇಕು. ಹಾಗೇನಾದರೂ ಪರೀಕ್ಷೆ ನಡೆಸಿದರೆ ಸಂವಿಧಾನದ ವಿಧಿ 14ರ ಸಮಾನತೆಯ ನಿಯಮವನ್ನು ಉಲ್ಲಂಘಿದಂತಾಗುತ್ತದೆ. ಹೀಗಾಗಿ, ಪರೀಕ್ಷೆ ನಡೆಸದೆ ಪಾಸ್ ಮಾಡಲು ಯುಜಿಸಿಗೆ ನಿರ್ದೇಶಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.

ವಕೀಲರ ವಾದ ಆಲಿಸಿದ ನ್ಯಾಯಪೀಠವು ಯುಜಿಸಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಮುಂದೂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News