ಅತಿವೃಷ್ಟಿ ಸಮೀಕ್ಷೆಗೆ ಈ ಬಾರಿಯಾದರೂ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಬೇಕು: ಸಿದ್ದರಾಮಯ್ಯ ಆಗ್ರಹ

Update: 2020-08-10 11:51 GMT

ಬೆಂಗಳೂರು, ಆ. 10: ರಾಜ್ಯದಲ್ಲಿನ ಭಾರೀ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದಿಂದ ಹೆಚ್ಚಿನ ಪರಿಹಾರ ಕೋರಲು ಸರ್ವಪಕ್ಷಗಳ ನಿಯೋಗವನ್ನು ಹೊಸದಿಲ್ಲಿಗೆ ಕೊಂಡೊಯ್ಯಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸಲಹೆ ಮಾಡಿದ್ದಾರೆ.

ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, `ಈವರೆಗಿನ ಅನುಭವದ ಪ್ರಕಾರ ರಾಜ್ಯದ ಹಿತಾಸಕ್ತಿ ರಕ್ಷಣೆಯ ಪರ ಗಟ್ಟಿಯಾಗಿ ನಿಂತು ಪ್ರಧಾನಿ ಮೋದಿ ಅವರ ಜೊತೆ ಮಾತನಾಡಿ ಹೆಚ್ಚು ಪರಿಹಾರ ಪಡೆಯುವ ಶಕ್ತಿ ಮುಖ್ಯಮಂತ್ರಿ ಯಡಿಯೂರಪ್ಪ ಅಥವಾ ಅವರ ಮಂತ್ರಿ ಮಂಡಲದ ಸಚಿವರಿಗೆ ಇಲ್ಲ. ಹೀಗಾಗಿ ಸರ್ವಪಕ್ಷಗಳ ನಿಯೋಗ ಕೊಂಡೊಯ್ಯವುದು ಅಗತ್ಯ' ಎಂದು ಪ್ರತಿಪಾದಿಸಿದ್ದಾರೆ.

`ಪ್ರಧಾನಿ ಮೋದಿ ಅವರ ಜೊತೆಗಿನ ರಾಜ್ಯದ ಸಚಿವರವ ಸಭೆ ಕಾಟಾಚಾರದ ಕಸರತ್ತು ಆಗಬಾರದು. ಮುಖ್ಯಮಂತ್ರಿ ಯಡಿಯೂರಪ್ಪನವರು ತಕ್ಷಣ ಅಧಿಕಾರಿಗಳ ತಂಡವನ್ನು ಅತಿವೃಷ್ಟಿ ಪೀಡಿತ ಪ್ರದೇಶಕ್ಕೆ ಕಳಿಸಿ ನಷ್ಟದ ಅಧ್ಯಯನ ಮಾಡಿಸಿ ಪ್ರಧಾನಿ ಮೋದಿ ಅವರಿಗೆ ಕಳಿಸಿಕೊಟ್ಟು ನ್ಯಾಯಯುತ ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು' ಎಂದು ಸಿದ್ದರಾಮಯ್ಯ ಸೂಚಿಸಿದ್ದಾರೆ.

`ರಾಜ್ಯದ ಅತಿವೃಷ್ಟಿ ಪರಿಸ್ಥಿತಿಯ ಸಮೀಕ್ಷೆಗೆ ಈ ಬಾರಿಯಾದರೂ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಬೇಕು ಮತ್ತು ಪರಿಸ್ಥಿತಿಯ ಅಧ್ಯಯನಕ್ಕೆ ಕೇಂದ್ರ ತಂಡವನ್ನು ತಕ್ಷಣ ಕಳುಹಿಸಬೇಕು. ಇಂದಿನ ಸಭೆಯಲ್ಲಿ ರಾಜ್ಯದ ಸಚಿವರು ಪ್ರಧಾನಿಯವರಲ್ಲಿ ಈ ಒತ್ತಾಯ ಮಾಡಬೇಕು. 15ನೇ ಹಣಕಾಸು ಆಯೋಗ ರಾಜ್ಯಕ್ಕೆ 5,495ಕೋಟಿ ರೂ.ವಿಶೇಷ ಅನುದಾನದ ಶಿಫಾರಸು ಮಾಡಿತ್ತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಡ್ಡಗಾಲು ಹಾಕಿ ಆ ಅನುದಾನ ರಾಜ್ಯಕ್ಕೆ ಸಿಗದಂತೆ ಮಾಡಿದ್ದಾರೆ. ಈ ಅನ್ಯಾಯವನ್ನು ರಾಜ್ಯದ ಸಚಿವರು ಇಂದಿನ ಸಭೆಯಲ್ಲಿ ಪ್ರಧಾನಿ ಗಮನಕ್ಕೆ ತರಬೇಕು' ಎಂದು ಕೋರಿದರು.

`ಪಿಎಂ ಕಿಸಾನ್ ಯೋಜನೆಗೆ ರಾಜ್ಯ ಸರಕಾರ ಗುರುತಿಸಿರುವ ರೈತ ಫಲಾನುಭವಿಗಳ ಸಂಖ್ಯೆ ಕೇವಲ 52 ಲಕ್ಷ ಮಾತ್ರ. ರಾಜ್ಯ ಸರಕಾರದ ಅಧಿಕೃತ ಮಾಹಿತಿ ಪ್ರಕಾರವೇ ರಾಜ್ಯದಲ್ಲಿರುವ ಒಟ್ಟು ರೈತ ಕುಟುಂಬಗಳ ಸಂಖ್ಯೆ 82 ಲಕ್ಷ. ಈ ಮಾಹಿತಿಯನ್ನು ಬಚ್ಚಿಟ್ಟು ರಾಜ್ಯ ಸರಕಾರ ರೈತರಿಗೆ ಮೋಸ ಮಾಡಿದೆ' ಎಂದು ಸಿದ್ದರಾಮಯ್ಯ, ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

`ಪ್ರಧಾನಿ ನರೇಂದ್ರ ಮೋದಿ ರವಿವಾರ ಘೋಷಿಸಿರುವ ಒಂದು ಲಕ್ಷ ಕೋಟಿ ರೂಪಾಯಿ ಕೃಷಿ ಪ್ಯಾಕೇಜ್, ಕಳೆದ ಮೇ ತಿಂಗಳಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದ ಕೋವಿಡ್ ಪರಿಹಾರ ಯೋಜನೆಯ ಭಾಗವಾಗಿದೆ. ಅದನ್ನೇ ಹೊಸ ಪ್ಯಾಕೇಜ್ ಎಂದು ಬಿಂಬಿಸಿ ಪ್ರಧಾನಿ ಮೋದಿಯವರು ರೈತರ ದಾರಿ ತಪ್ಪಿಸಿದ್ದಾರೆ' ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

`ಪ್ರಧಾನಿ ಮೋದಿ ನಡೆಸುವ ಸಭೆಯಲ್ಲಿ ಭಾಗವಹಿಸುತ್ತಿರುವ ಸಚಿವರಾದ ಬಸವರಾಜ ಬೊಮ್ಮಾಯಿ ಮತ್ತು ಆರ್.ಅಶೋಕ್ ಅವರು ರಾಜ್ಯದ ಜನರ ಹಿತದೃಷ್ಟಿಯಿಂದಾದರೂ ಅತಿವೃಷ್ಟಿ ಪರಿಸ್ಥಿತಿಯನ್ನು ಸ್ವಲ್ಪ ಧೈರ್ಯ ಮಾಡಿ ವಿವರಿಸಿ ಹೆಚ್ಚು ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು. ಅತಿವೃಷ್ಟಿ ಬಗ್ಗೆ ಪ್ರಧಾನಿ ಮೋದಿ ರಾಜ್ಯ ಸಚಿವರ ಸಭೆ ನಡೆಸುತ್ತಿರುವುದು ಸ್ವಾಗತಾರ್ಹ.

ಕಳೆದ ಬಾರಿ ರಾಜ್ಯ ಅತಿವೃಷ್ಟಿಯಿಂದ ತತ್ತರಿಸುತ್ತಿರುವಾಗ ಕರ್ನಾಟಕದ ಕಡೆ ತಿರುಗಿ ನೋಡದೆ ನಿರ್ಲಕ್ಷಿಸಿದ್ದ ಪ್ರಧಾನಿ ಈ ಬಾರಿಯಾದರೂ ಎಚ್ಚೆತ್ತುಕೊಂಡಿದ್ದಾರೆ. ಈ ಅವಕಾಶವನ್ನು ರಾಜ್ಯ ಬಳಸಿಕೊಳ್ಳಬೇಕು' ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಕಳೆದ ವರ್ಷ ಸಿಎಂ ಯಡಿಯೂರಪ್ಪ ಅತಿವೃಷ್ಟಿಯ ವರದಿ ಕಳಿಸಿರುವುದು ಆಗಸ್ಟ್ ವರೆಗಿನ ಹಾನಿ ಬಗ್ಗೆ ಮಾತ್ರ. ಸೆಪ್ಟೆಂಬರ್-ಅಕ್ಟೋಬರ್ ತಿಂಗಳ ಅತಿವೃಷ್ಟಿ ವರದಿ ಕಳಿಸದೆ ಸರಕಾರ ನೊಂದ ಜನತೆಗೆ ಮೋಸ ಮಾಡಿದೆ. ಈ ಬಾರಿ ಪರಿಹಾರವನ್ನು ಕೇಳುವಾಗ ಇದನ್ನು ಪ್ರಧಾನಿ ಮೋದಿ ಅವರ ಗಮನಕ್ಕೆ ತರಬೇಕು. ಕಳೆದ ವರ್ಷದ ಅತಿವೃಷ್ಟಿಯ ಅಂದಾಜು ನಷ್ಟ 1ಲಕ್ಷ ಕೋಟಿ ರೂ., ರಾಜ್ಯ ಸರ್ಕಾರದ ವರದಿ ಪ್ರಕಾರ ನಷ್ಟ 50 ಸಾವಿರ ಕೋಟಿ ರೂ., ಪರಿಹಾರ ಕೇಳಿದ್ದು 35 ಸಾವಿರ ಕೋಟಿ ರೂ. ಕೇಂದ್ರ ಸರಕಾರ ಕೊಟ್ಟಿದ್ದು ಕೇವಲ 1,860 ಕೋಟಿ ರೂ.ಮಾತ್ರ. ರಾಜ್ಯದ ಸಚಿವರು ಹಳೆಯ ಬಾಕಿಯನ್ನೂ ಕೇಳುವ ಧೈರ್ಯ ಮಾಡಲಿ'

-ಸಿದ್ದರಾಮಯ್ಯ, ವಿಪಕ್ಷ ನಾಯಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News