ಪ್ರವಾಹ: 4 ಸಾವಿರ ಕೋಟಿ ರೂ. ವಿಶೇಷ ಆರ್ಥಿಕ ನೆರವಿಗೆ ಕೇಂದ್ರಕ್ಕೆ ರಾಜ್ಯ ಸರಕಾರದಿಂದ ಮನವಿ

Update: 2020-08-10 17:45 GMT

ಬೆಂಗಳೂರು, ಆ. 10: ಕರ್ನಾಟಕ ರಾಜ್ಯದಲ್ಲಿ ಭಾರೀ ಮಳೆ ಮತ್ತು ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸಲು ಕೇಂದ್ರ ಸರಕಾರ 4 ಸಾವಿರ ಕೋಟಿ ರೂ.ಗಳ ವಿಶೇಷ ಆರ್ಥಿಕ ನೆರವನ್ನು ಒದಗಿಸಲು ಕೋರಲಾಗಿದ್ದು, ತಕ್ಷಣದ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳಿಗೆ ಎಸ್‍ಡಿಆರ್‍ಎಫ್‍ನಡಿಯಲ್ಲಿ 395 ಕೋಟಿ ರೂ.ಗಳನ್ನು ತುರ್ತಾಗಿ ಬಿಡುಗಡೆ ಮಾಡಬೇಕು ಎಂದು ರಾಜ್ಯ ಸರಕಾರ, ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದೆ.

ಸೋಮವಾರ ಪ್ರವಾಹ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ನಡೆಸಿದ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿಗಳ ಪರವಾಗಿ ಸಂವಾದದಲ್ಲಿ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಮಳೆ, ಪ್ರವಾಹ ಪರಿಸ್ಥಿತಿಯ ಕುರಿತು ಮಾಹಿತಿ ಒದಗಿಸಿದರು. ಪ್ರವಾಹದಲ್ಲಿ ಮೃತಪಟ್ಟವರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿ, ಜನ-ಜಾನುವಾರುಗಳ ರಕ್ಷಣೆ ನಮ್ಮ ಆದ್ಯತೆ. ರಾಜ್ಯದ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳುವುದು ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಯನ್ನು ನಿರ್ವಹಿಸಲು ಈಗಾಗಲೇ ತರಬೇತಿ ಪಡೆದ 200 ಎಸ್‍ಡಿಆರ್‍ಎಫ್ ಸಿಬ್ಬಂದಿ, ನಾಲ್ಕು ಎನ್‍ಡಿಆರ್‍ಎಫ್ ತಂಡಗಳು ಹಾಗೂ ನಾಲ್ಕು ರಕ್ಷಣಾ ಹೆಲಿಕಾಪ್ಟರ್ ಗಳನ್ನು ಒದಗಿಸಲಾಗಿದ್ದು, ಹೆಚ್ಚುವರಿಯಾಗಿ 4 ಎನ್‍ಡಿಆರ್‍ಎಫ್ ತಂಡಗಳನ್ನು ಕಳುಹಿಸಲು ಕೋರಲಾಯಿತು ಎಂದು ಬಸವರಾಜ ಬೊಮ್ಮಾಯಿ ಇದೇ ವೇಳೆ ತಿಳಿಸಿದರು.

ರಾಜ್ಯದಲ್ಲಿ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಾದ ಬೆಳಗಾವಿ, ರಾಯಚೂರು ಸೇರಿದಂತೆ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಸತತ ಮಳೆಯಿಂದಾಗಿ 56 ತಾಲೂಕುಗಳ 885 ಗ್ರಾಮಗಳು ಹಾನಿಗೊಳಗಾಗಿದೆ. ಪ್ರಾಥಮಿಕ ವರದಿಯ ಪ್ರಕಾರ 3 ಸಾವಿರ ಮನೆಗಳು, ಎಂಭತ್ತು ಸಾವಿರ ಹೆಕ್ಟೇರ್ ಪ್ರದೇಶದ ಕೃಷಿ, ತೋಟಗಾರಿಕೆ ಬೆಳೆಗಳು, 3,500 ಕಿ.ಮಿ ರಸ್ತೆ, 104 ಸಣ್ಣ ನೀರಾವರಿ ಕೆರೆಗಳು, ವಿದ್ಯುತ್ ಪರಿವರ್ತಕಗಳು, 394 ಕಟ್ಟಡಗಳಿಗೆ ಹಾಗೂ ಇನ್ನಿತರೆ ಮೂಲಭೂತ ಸೌಕರ್ಯಗಳಿಗೆ ಹಾನಿ ಉಂಟಾಗಿದೆ ಎಂದು ಅವರು ವಿವರ ನೀಡಿದರು.

ದೀರ್ಘಾವಧಿ ಪರಿಹಾರವಾಗಿ ಕಾವೇರಿ ಹಾಗೂ ಕೃಷ್ಣಾ ನದಿ ಪಾತ್ರಗಳಲ್ಲಿ ಹಾಗೂ ಪಶ್ಚಿಮ ಘಟ್ಟಗಳು ವ್ಯಾಪಿಸಿರುವ ನೆರೆ ರಾಜ್ಯಗಳಲ್ಲಿ ಭೂ-ಕುಸಿತಕ್ಕೆ ಸಂಬಂಧಿಸಿದಂತೆ ಮ್ಯಾಪಿಂಗ್ ಹಾಗೂ ಮುನ್ಸೂಚನಾ ವ್ಯವಸ್ಥೆಯನ್ನು ಸ್ಥಾಪಿಸುವ ಕುರಿತು ಕೇಂದ್ರ ಭೂ ವಿಜ್ಞಾನ ಸರ್ವೇಕ್ಷಣಾ ಇಲಾಖೆಯ ವತಿಯಿಂದ ಅಧ್ಯಯನ ಕೈಗೊಳ್ಳುವಂತೆ ಮನವಿ ಮಾಡಲಾಯಿತು ಎಂದು ಅವರು ವಿವರ ನೀಡಿದರು.

ಕೇಂದ್ರ ಜಲ ಆಯೋಗದ ವತಿಯಿಂದ ಕೃಷ್ಣಾ ನದಿ ಪಾತ್ರದಲ್ಲಿ ಸಮಗ್ರ ಪ್ರವಾಹ ಪರಿಸ್ಥಿತಿ ಮುನ್ಸೂಚನೆ ವ್ಯವಸ್ಥೆಯನ್ನು ಸ್ಥಾಪಿಸಲು ಕೋರಲಾಯಿತು. ಕಡಲು ಕೊರೆತ ನಿಯಂತ್ರಣಕ್ಕೆ ಎನ್‍ಸಿಎಂಆರ್‍ಪಿ ಯೋಜನೆಯಡಿ ಕಡಲು ಕೊರೆತವನ್ನು ಸೇರ್ಪಡೆಗೊಳಿಸಲು ಹಾಗೂ ಅದಕ್ಕೆ ಅಗತ್ಯವಿರುವ ಅನುದಾನ ಬಿಡುಗಡೆ ಮಾಡಬೇಕು ಎಂದು ಇದೇ ಸಂದರ್ಭದಲ್ಲಿ ಕೋರಲಾಗಿದೆ ಎಂದು ತಿಳಿಸಿದರು.

ಕಂದಾಯ ಸಚಿವ ಆರ್.ಅಶೋಕ್, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News