ಸಂಬಂಧಿಯಿಂದ ಕೋಮು ಪ್ರಚೋದಕ ಪೋಸ್ಟ್ ಆರೋಪ: ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ

Update: 2020-08-11 18:18 GMT

ಬೆಂಗಳೂರು, ಆ.11: ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸಂಬಂಧಿಕರೊಬ್ಬರು ಫೇಸ್‌ಬುಕ್‌ನಲ್ಲಿ ಕೋಮು ಪ್ರಚೋದಕ, ಅವಹೇಳನಕಾರಿ ಪೋಸ್ಟ್‌ ಹಾಕಿದ್ದಾರೆ ಎಂದು ಆರೋಪಿಸಿ ಶಾಸಕರ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ, ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಫೇಸ್‌ಬುಕ್‌ನಲ್ಲಿ ಕೋಮು ಪ್ರಚೋದಿತ ಪೋಸ್ಟ್‌ ಹಾಕಿದ ಶಾಸಕರ ಆಪ್ತನನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕಿಡಿಗೇಡಿಗಳು ಕಾವಲ್ ಭೈರಸಂದ್ರದ ಅಖಂಡ ಶ್ರೀನಿವಾಸಮೂರ್ತಿ ಅವರ ನಿವಾಸದ ಬಳಿ ಜಮಾಯಿಸಿದ್ದು, ಶಾಸಕರ ಮನೆಗೆ ಕಲ್ಲು ತೂರಾಟ ನಡೆಸಿದ್ದಲ್ಲದೇ, ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಭಾಯಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಚಾಮರಾಜಪೇಟೆ ಶಾಸಕ ಝಮೀರ್ ಅಹಮದ್ ಖಾನ್ ಅವರು ಸ್ಥಳಕ್ಕೆ ಆಗಮಿಸಿದ್ದಾರೆ.

ಘಟನೆ ಬಗ್ಗೆ ಅಖಂಡ ಶ್ರೀನಿವಾಸಮೂರ್ತಿ ಅವರು ಪ್ರತಿಕ್ರಿಯೆ ನೀಡಿದ್ದು, ಕಿಡಿಗೇಡಿಗಳ ತಪ್ಪಿಗೆ ಯಾರೂ ಗಲಾಟೆ ಮಾಡಬಾರದು. ತಪ್ಪು ಮಾಡಿದವರಿಗೆ ಕಾನೂನಿನ ಮೂಲಕ ಶಿಕ್ಷೆಯಾಗಲಿ. ಆದರೆ ಯಾವುದೇ ಕಾರಣಕ್ಕೂ ಗಲಾಟೆ ಮಾಡಬೇಡಿ ಎಂದು ವಿನಂತಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News