ಬೆಂಗಳೂರಿನಲ್ಲಿ ಘರ್ಷಣೆ ಪ್ರಕರಣ: ನೂರಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ ಪೊಲೀಸರು

Update: 2020-08-12 01:20 GMT

ಬೆಂಗಳೂರು, ಆ.12: ಕೋಮು ಪ್ರಚೋದಕ ಪೋಸ್ಟ್ ಸಂಬಂಧ ಬೆಂಗಳೂರಿನಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ನೂರಕ್ಕೂ ಅಧಿಕ ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ 110 ಆರೋಪಿಗಳನ್ನು ಬಂಧಿಸಲಾಗಿದೆ. ಅಲ್ಲದೇ, ಕೋಮು ಪ್ರಚೋದಕ ಪೋಸ್ಟ್ ಹಾಕಿದ್ದ ಆರೋಪಿ ನವೀನ್ ನನ್ನು ಕೂಡಾ ಪೊಲೀಸರು ಬಂಧಿಸಿದ್ದಾರೆ

ಈ ಸಂಬಂಧ ಟ್ವೀಟ್ ಮಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಡಿ.ಜೆ ಹಳ್ಳಿ ಘಟನೆಗೆ ಸಂಬಂಧಿಸಿದಂತೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿ ನವೀನ್ ನನ್ನು ದಸ್ತಗಿರಿ ಮಾಡಲಾಗಿದೆ. ಜೊತೆಗೆ ಬೆಂಕಿ ಹಚ್ಚಿದ, ಕಲ್ಲು ತೂರಾಟ ನಡೆಸಿದ, ಪೊಲೀಸರ ಮೇಲೆ ಹಲ್ಲೆ ನಡೆಸಿದ ಇತರೆ 110 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದು, ನಗರದಲ್ಲಿ ಶಾಂತಿ ಕಾಪಾಡಲು ಎಲ್ಲರೂ ಪೊಲೀಸರೊಂದಿಗೆ ಸಹಕರಿಸಬೇಕಾಗಿ ವಿನಂತಿ ಎಂದು ಮನವಿ ಮಾಡಿದ್ದಾರೆ.

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸಂಬಂಧಿ ಫೇಸ್‌ಬುಕ್‌ನಲ್ಲಿ ಕೋಮು ಪ್ರಚೋದಿತ ಪೋಸ್ಟ್‌ ಹಾಕಿದ್ದು, ಆತನನ್ನುಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಹಲವರು ಕಾವಲ್ ಭೈರಸಂದ್ರದ ಅಖಂಡ ಶ್ರೀನಿವಾಸಮೂರ್ತಿ ಅವರ ನಿವಾಸದ ಬಳಿ ಜಮಾಯಿಸಿದ್ದರು. ಈ ಸಂದರ್ಭ ಕೆಲವರು ಶಾಸಕರ ಮನೆಗೆ ಕಲ್ಲು ತೂರಾಟ ನಡೆಸಿದ್ದಲ್ಲದೇ, ವಾಹನಗಳಿಗೆ ಬೆಂಕಿ ಹಚ್ಚಿದ್ದರು ಎನ್ನಲಾಗಿದೆ. ಬಳಿಕ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಪೊಲೀಸರ ಮೇಲೆ ಕಲ್ಲು ತೂರಾಟ, ಠಾಣೆಗೆ ದಾಳಿ ನಡೆಸಲಾಗಿತ್ತು. ಬಳಿಕ ಪೊಲೀಸರ ಗುಂಡೇಟಿಗೆ ಇಬ್ಬರು ಮೃತಪಟ್ಟು, ಹಲವರಿಗೆ ಗಾಯಗಳಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News