ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ: ಸಿಎಂ ಯಡಿಯೂರಪ್ಪ

Update: 2020-08-12 11:54 GMT

ಬೆಂಗಳೂರು, ಆ.12: ಕೋಮು ಪ್ರಚೋದಕ ಪೋಸ್ಟ್ ಸಂಬಂಧ ನಡೆದ ಹಿಂಸಾಚಾರದ ಬಗ್ಗೆ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ. ಜನರು ಈ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೆ ಸಂಯಮದಿಂದ ವರ್ತಿಸಬೇಕೆಂದು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಡಿ.ಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಹಾಗೂ ಪೋಲೀಸ್ ಠಾಣೆ ಮೇಲೆ ದಾಳಿ‌, ಗಲಭೆ ನಡೆಸಿರುವುದು ಖಂಡನೀಯ. ಈಗಾಗಲೇ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ‌ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದ್ದು ಸರ್ಕಾರ ದಾಂಧಲೆ ಹತ್ತಿಕ್ಕಲು ಎಲ್ಲ ರೀತಿಯ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ನಿನ್ನೆ ರಾತ್ರಿ ನಡೆದ ಗಲಭೆಯಲ್ಲಿ ಪತ್ರಕರ್ತರು, ಪೋಲೀಸರು, ಸಾರ್ವಜನಿಕರ ‌ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ. ಇಂತಹ ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸುವುದಿಲ್ಲ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ. ಜನರು ಈ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೆ ಸಂಯಮದಿಂದ ವರ್ತಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಟ್ವೀಟ್ ಮೂಲಕ ವಿನಂತಿಸಿದ್ದಾರೆ.

ಶಾಂತಿಯಿಂದ ಬದುಕೋಣ ಎಂಬುದು ನಮ್ಮ ಆಶಯ. ಅಶಾಂತಿಯೇ ಕೆಲವರ ರಾಜಮಾರ್ಗ ಎಂದಾದರೆ, ಆ ಮಾರ್ಗವನ್ನೆ ಬದಲಿಸಲು ನಮ್ಮ ಸರಕಾರ ಬದ್ಧವಾಗಿದೆ. ನಮ್ಮ ಪೊಲೀಸ್ ವ್ಯವಸ್ಥೆ ಸದೃಢವಾಗಿದೆ. ನಿನ್ನೆ ರಾತ್ರಿ ಗಲಭೆ ನಡೆದ ಜಾಗದಲ್ಲಿ ಅಲ್ಲಿನ ಸ್ಥಳೀಯರು ಎಸ್‍ಡಿಪಿಐ ಕಾರ್ಯವಿರಬಹುದೆಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ದಿಶೆಯಲ್ಲೂ ಸರಕಾರ ತನಿಖೆ ಮಾಡಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News