ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಿದ 100ಕ್ಕೂ ಅಧಿಕ ಆಶಾ ಕಾರ್ಯಕರ್ತೆಯರ ವಿರುದ್ಧ ಪ್ರಕರಣ

Update: 2020-08-12 15:01 GMT
ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಅನ್‍ ಲಾಕ್ 3 ಮಾರ್ಗಸೂಚಿಗಳಿಗೆ ವಿರುದ್ಧವಾಗಿ ರವಿವಾರ ಜಂತರ್ ಮಂತರ್ ‍ನಲ್ಲಿ ಪ್ರತಿಭಟನೆ ನಡೆಸಿದ 100ಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ಹಾಗೂ ಕಾರ್ಮಿಕ ಸಂಘಟನೆಗಳ ಸದಸ್ಯರ ವಿರುದ್ಧ ದಿಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ್ದಕ್ಕಾಗಿ ಹಾಗೂ ಸಾಮಾಜಿಕ ಅಂತರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 188 ಹಾಗೂ ವಿಪತ್ತು ನಿರ್ವಹಣಾ ಕಾಯಿದೆಯ ಸೆಕ್ಷನ್ 3ರ ಅಡಿಯಲ್ಲಿ  ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ ಈಶ್ ಸಿಂಘಾಲ್ ಹೇಳಿದ್ದಾರೆ.

ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ತೆರಳಿ ಅಂತಹ ಪ್ರತಿಭಟನೆಗೆ ಅವಕಾಶವಿಲ್ಲವೆಂದು ತಿಳಿಸಿದರೂ ತಾವು ಅನುಮತಿಯನ್ನು ಪಡೆದಿರುವುದಾಗಿ ಪ್ರತಿಭನಕಾರರು ತಿಳಿಸಿದ್ದರು.  ಆದರೆ ಅನುಮತಿ ಪತ್ರ ತೋರಿಸಲು ವಿಫಲರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನೆಯನ್ನು ಆಲ್ ಇಂಡಿಯಾ  ಯುನೈಟೆಡ್ ಟ್ರೇಡರ್ಸ್ ಯೂನಿಯನ್ ಸೆಂಟರ್ ಆಯೋಜಿಸಿತ್ತು. ಸಾರ್ವಜನಿಕ ರಂಗದ ಉದ್ದಿಮೆಗಳ ಖಾಸಗೀಕರಣ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸೂಕ್ತ ವೇತನ ನೀಡದೇ ಇರುವುದನ್ನು ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ದಿಲ್ಲಿ ಆಶಾ ಕಾರ್ಯಕರ್ತೆಯರ ಸಂಘಟನೆ ಕೂಡ ಭಾಗವಹಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News