ಆಯುಷ್ಮಾನ್ ಭಾರತ್ ಯೋಜನೆ : ಬಿಪಿಎಲ್ ಕಾರ್ಡ್‌ದಾರರಿಗೆ ಐದು ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ

Update: 2020-08-12 17:11 GMT

ಮಂಗಳೂರು, ಆ.12: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯು ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ಸಂಯೋಜಿತ ಯೋಜನೆಯಾಗಿದ್ದು, ಈ ಯೋಜನೆಯಲ್ಲಿ ಕೋವಿಡ್-19 ಚಿಕಿತ್ಸೆಯೂ ಸೇರ್ಪಡೆಯಾಗಿದೆ.

ಬಿಪಿಎಲ್ ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ವರ್ಷಕ್ಕೆ ಐದು ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಎಪಿಎಲ್ ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ಪಾವತಿ ಆಧಾರದ ಮೇಲೆ ಸರಕಾರಿ ಪ್ಯಾಕೇಜ್ ದರದ ಶೇ.30ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ 1.50 ಲಕ್ಷ ರೂ. ಇರುತ್ತದೆ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಿ ಸಹ ಚಿಕಿತ್ಸೆ ಪಡೆದುಕೊಳ್ಳಬಹುದು.

ಜಿಲ್ಲೆಯಲ್ಲಿ ಒಟ್ಟು 240 ಸಾಮಾನ್ಯ ಸೇವಾ ಕೇಂದ್ರಗಳಿದ್ದು, ಸಾರ್ವಜನಿಕರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ತೆರಳಿ ಆಯುಷ್ಮಾನ್ ಭಾರತ್ ಕಾರ್ಡ್‌ನ್ನು ಮಾಡಿಸಿಕೊಳ್ಳಬಹುದು. ಸಾರ್ವಜನಿಕರು ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಕಾರ್ಡ್‌ನ್ನು ಮಾಡಿಸುವ ಸಂದರ್ಭ ಮಾಸ್ಕ್ ಮತ್ತು ಸುರಕ್ಷಿತ ಅಂತರ ಕಾಪಾಡುವುದು ಅತ್ಯಗತ್ಯ.

ಆಯುಷ್ಮಾನ್ ಕಾರ್ಡ್‌ನ ಕಾಗದದ ಪ್ರತಿಗೆ 10 ರೂ. ಹಾಗೂ ಪಿವಿಸಿ ಕಾರ್ಡ್‌ಗೆ 35 ರೂ. ಮೊತ್ತವನ್ನು ಸರಕಾರದಿಂದ ನಿಗದಿಪಡಿಸಿದ್ದು, ನಿಗದಿಪಡಿಸಿದ ಮೊತ್ತಕ್ಕಿಂತ ಹೆಚ್ಚಿನ ಮೊತ್ತವನ್ನು ಸಾರ್ವಜನಿಕರು ಪಾವತಿಸಬಾರದು. ಆಯುಷ್ಮಾನ್ ಕ್ಯಾಂಪ್ ಮಾಡಿದ್ದಲ್ಲಿ, ಸಾರ್ವಜನಿಕರಿಂದ ನಿಗದಿಪಡಿಸಿದ ಮೊತ್ತಕ್ಕಿಂತ ಹೆಚ್ಚಿನ ಮೊತ್ತವನ್ನು ಪಡೆದುಕೊಂಡಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ದ.ಕ. ಹಾಗೂ ಸಿ.ಎಸ್.ಸಿ ಜಿಲ್ಲಾ ವ್ಯವಸ್ಥಾಪಕರು, ದ.ಕ. ಅಥವಾ ಜಿಲ್ಲಾ ಯೋಜನಾ ವ್ಯವಸ್ಥಾಪಕರು, ಸೇವಾ ಸಿಂಧು, ದ.ಕ. ಇವರಿಗೆ ದೂರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಸೌಲಭ್ಯ ಮತ್ತು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸರಕಾರಿ ಆಸ್ಪತ್ರೆ, ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆ, ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿನ ಆರೋಗ್ಯ ಮಿತ್ರರು ಅಥವಾ ಆರೋಗ್ಯ ಸಹಾಯವಾಣಿ ಸಂಖ್ಯೆ 104 ಸಂಪರ್ಕಿಸುವಂತೆ ದ.ಕ. ಜಿಲ್ಲಾಧಿಕಾರಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News