ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾದಲ್ಲಿ ಕಠಿಣ ಕ್ರಮ : ಮಂಗಳೂರು ಕಮಿಷನರ್ ವಿಕಾಸ್ ‌ಕುಮಾರ್

Update: 2020-08-13 13:42 GMT

ಮಂಗಳೂರು, ಆ.13: ನಗರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ವಿಚಾರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬರೆಯುವುದು, ಹಂಚಿಕೊಳ್ಳುವುದು ಮಾಡಿದ್ದಲ್ಲಿ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ‌ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು ನಗರ ವ್ಯಾಪ್ತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವುದು ಗಮನಕ್ಕೆ ಬಂದಿದ್ದು, ಅಂಥವರ ವಿರುದ್ಧ ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವಿಚಾರಗಳಿಗೆ ಸಂಬಂಧಪಟ್ಟಂತೆ ಯಾವುದೇ ವ್ಯಕ್ತಿ ಅವಹೇಳನ ಮಾಡುವ ವಿಚಾರಗಳನ್ನು ಸೃಷ್ಟಿಸುವುದು, ಹಂಚಿಕೊಳ್ಳುವುದು, ಅಭಿಪ್ರಾಯ ವ್ಯಕ್ತಪಡಿಸುವುದು, ಟೀಕೆ ನಡೆಸುವುದು ಕಂಡುಬಂದಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್‌ ಕುಮಾರ್ ತಿಳಿಸಿದ್ದಾರೆ.

ಆರ್‌ಎಎಫ್-ಪೊಲೀಸರ ಪಥಸಂಚಲನ: ಮಂಗಳೂರು ನಗರದಲ್ಲಿ ಮುಂಜಾಗ್ರತಾ ಕ್ರಮವಾಗಿ ಆರ್‌ಎಎಫ್ (ಕ್ಷಿಪ್ರ ಕ್ರಿಯಾ ಪಡೆ) ಹಾಗೂ ಮಂಗಳೂರು ನಗರ ಪೊಲೀಸರು ಗುರುವಾರ ಪಥಸಂಚಲನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News