ಬೆಂಗಳೂರು ಹಿಂಸಾಚಾರ: 200ಕ್ಕೂ ಅಧಿಕ ಮಂದಿ ಬಂಧನ, ಮೂರು ವಿಶೇಷ ತಂಡ ರಚನೆ

Update: 2020-08-13 15:15 GMT

ಬೆಂಗಳೂರು, ಆ. 13: ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸಂಬಂಧಿ ನವೀನ್ ಎಂಬಾತ ಪ್ರವಾದಿ ಅವರ ಕುರಿತು ಫೇಸ್‍ಬುಕ್‍ನಲ್ಲಿ ಹಾಕಿದ್ದ ಅವಹೇಳನಕಾರಿ ಪೋಸ್ಟ್ ಹಿನ್ನೆಲೆಯಲ್ಲಿ ಪ್ರಕ್ಷುಬ್ಧಗೊಂಡಿದ್ದ ಇಲ್ಲಿನ ದೇವರ ಜೀವನಹಳ್ಳಿ(ಡಿ.ಜೆ.ಹಳ್ಳಿ), ಕಾಡುಗೊಂಡನಹಳ್ಳಿ(ಕೆ.ಜಿ.ಹಳ್ಳಿ) ಮತ್ತು ಕಾವಲ್ ಭೈರಸಂದ್ರ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಸದ್ಯ ಪರಿಸ್ಥಿತಿ ಶಾಂತವಾಗಿದೆ.

ದೊಂಬಿ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈವರೆಗೂ 200ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿರುವ ಪೊಲೀಸರು, ಪ್ರಕರಣದ ತನಿಖೆ ಮತ್ತು ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಮೂರು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಸಂಶಯಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ 9 ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ.

ಈ ಮಧ್ಯೆ ಫೇಸ್‍ಬುಕ್‍ನಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ ಆರೋಪಿ ನವೀನ್‍ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ಆತನನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಗೋಲಿಬಾರ್ ಗೆ ಬಲಿಯಾಗಿ ಮೃತಪಟ್ಟಿದ್ದ ವಾಜೀದ್ ಖಾನ್, ಯಾಸೀರ್ ಖಾನ್, ಶೇಖ್ ಸಿದ್ದಿಕಿ ಸೇರಿ ಮೂವರ ಮೃತಹೇಹಗಳನ್ನು ನಿನ್ನೆ ತಡರಾತ್ರಿಯೇ ಮರಣೋತ್ತರ ಪರೀಕ್ಷೆ ಬಳಿಕ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ.

ಪ್ರಕರಣ ತನಿಖೆ ಹಂತದಲ್ಲಿರುವ ಸಂದರ್ಭದಲ್ಲೇ `ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಹಿಂಸಾಚಾರ ಘಟನೆಯಲ್ಲಿ ಎಸ್‍ಡಿಪಿಐ ಪಾತ್ರ ಇರುವುದು ಗೊತ್ತಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ಪ್ರಗತಿಯಲ್ಲಿದ್ದು, ಆ ಬಳಿಕ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಸದ್ಯಕ್ಕೆ ಈ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲು ಸಾಧ್ಯವಿಲ್ಲ' ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ನಿರಾಕರಿಸಿದ್ದಾರೆ.

`ದೊಂಬಿ, ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಹಲವು ಮಂದಿಯನ್ನು ಬಂಧಿಸಿದ್ದು, ಬಂಧಿತರೆಲ್ಲರೂ ನಿಜವಾದ ಅಪರಾಧಿಗಳಾಗಿರಲು ಸಾಧ್ಯವಿಲ್ಲ. ಹೀಗಾಗಿ ನಿರಾಪರಾಧಿಗಳಿಗೆ ಶಿಕ್ಷೆ ಸಲ್ಲ. ತಪ್ಪಿತಸ್ಥರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ನಮ್ಮ ಯಾವುದೇ ಅಭ್ಯಂತರವಿಲ್ಲ' ಎಂದು ಮಾಜಿ ಪ್ರಧಾನಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ಈ ನಡುವೆ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರ ಮಧ್ಯೆ ರಾಜಕೀಯ ಕೆಸರೆರಚಾಟ ಮುಂದುವರಿದ್ದು, ಪರಸ್ಪರ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ.

ಡಿ.ಜಿ.ಹಳ್ಳಿ, ಕೆ.ಜಿ.ಹಳ್ಳಿ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಆ.15ರವರೆಗೆ ಕಲಂ 144ರ ಅನ್ವಯ ನಿಷೇದಾಜ್ಞೆ ಮುಂದುವರಿಸಲಾಗಿದ್ದು, ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಗೆ ಆರ್ಎಎಫ್‍ನ 5 ತುಕಡಿ, ರಾಜ್ಯ ಮೀಸಲು ಪಡೆಯ 50 ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ವಿಶೇಷ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

`ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಿಸ್ಥಿತಿ ಶಾಂತವಾಗಿದೆ. ಘಟನಾ ಸ್ಥಳದಲ್ಲಿ ಮೊಕ್ಕಂ ಹೂಡಿರುವ ಹಿರಿಯ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯ ಬಗ್ಗೆ ನಿಗಾ ವಹಿಸಿದ್ದಾರೆ. ಗಲಾಭೆ ಬಳಿಕ ಮೊನ್ನೆ ರಾತ್ರಿಯಿಂದ ಈವರೆಗೆ ಯಾವುದೇ ರೀತಿಯ ಸಣ್ಣ-ಪುಟ್ಟ ಅಹಿತಕರ ಘಟನೆಗೆ ಅವಕಾಶ ನೀಡಿಲ್ಲ' ಎಂದು ಸ್ಥಳದಲ್ಲಿರುವ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News