ಉಡುಪಿ : ಒಂದೇ ದಿನದಲ್ಲಿ 400ರ ಗಡಿ ದಾಟಿದ ಕೊರೋನ ಪಾಸಿಟಿವ್ ಸಂಖ್ಯೆ

Update: 2020-08-13 15:44 GMT

ಉಡುಪಿ, ಆ.13: ಜಿಲ್ಲೆಯಲ್ಲಿ ಗುರುವಾರ ಒಂದೇ ದಿನದಲ್ಲಿ ಕೋವಿಡ್-19ಕ್ಕೆ ಪಾಸಿಟಿವ್ ಬಂದವರ ಸಂಖ್ಯೆ 400ರ ಗಡಿಯನ್ನು ದಾಟಿದೆ. ಒಟ್ಟು 402 ಮಂದಿಯಲ್ಲಿ ಇಂದು ಸೋಂಕು ಕಾಣಿಸಿಕೊಂಡಿದ್ದು, ಇದು ಕೊರೋನ ಪ್ರಾರಂಭಗೊಂಡ ನಂತರ ಜಿಲ್ಲೆಯಲ್ಲಿ ಒಂದು ದಿನದಲ್ಲಿ ಪತ್ತೆಯಾ ಈವರೆಗಿನ ಅತ್ಯಧಿಕ ಸಂಖ್ಯೆಯಾಗಿದೆ.

ಈ ಮೂಲಕ ಜಿಲ್ಲೆಯಲ್ಲಿ ಇದುವರೆಗೆ ಪಾಸಿಟಿವ್ ಕಂಡು ಬಂದವರ ಒಟ್ಟು ಸಂಖ್ಯೆ ಏಳು ಸಾವಿರದ ಗಡಿದಾಟಿ 7175ಕ್ಕೇರಿದೆ. ಇಂದು ದಿನದಲ್ಲಿ 1185 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಾ ವರದಿಗಳು ನೆಗೆಟಿವ್ ಫಲಿತಾಂಶ ನೀಡಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಕೊರೋನ ಸೋಂಕು ಪತ್ತೆಯಾದ 402 ಮಂದಿಯಲ್ಲಿ ಉಡುಪಿ ತಾಲೂಕಿನ 1232 ಮಂದಿ, ಕುಂದಾಪುರ ತಾಲೂಕಿನ 117 ಹಾಗೂ ಕಾರ್ಕಳ ತಾಲೂಕಿನ 49 ಮಂದಿ ಸೇರಿದ್ದಾರೆ. ಉಳಿದ ನಾವರು ಹೊರಜಿಲ್ಲೆಯವರಾ ಗಿದ್ದು, ಜಿಲ್ಲೆಯಲ್ಲಿ ಚಿಕಿತ್ಸೆಗೆ ಬಂದು ಪಾಸಿಟಿವ್ ಆಗಿದ್ದಾರೆ. ಮಕ್ಕಳು ಸೇರಿದಂತೆ 210 ಮಂದಿ ಪುರುಷರು ಹಾಗೂ 192 ಮಂದಿ ಮಹಿಳೆಯರಲ್ಲಿ ಸೋಂಕು ಕಂಡು ಬಂದಿದೆ. ಇವರಲ್ಲಿ 148 ಪುರುಷರು ಹಾಗೂ 155 ಮಹಿಳೆಯರಲ್ಲಿ ರೋಗದ ಲಕ್ಷಣಗಳು ಕಂಡುಬಂದಿಲ್ಲ. ಇಂದಿನ 402 ಪಾಸಿಟಿವ್ ಪ್ರಕರಣ ಗಳೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಸೋಂಕು ಪತ್ತೆಯಾದವರ ಸಂಖ್ಯೆ 7175ಕ್ಕೇರಿದೆ ಎಂದು ಡಾ.ಸೂಡ ತಿಳಿಸಿದರು.

ಗುರುವಾರ ಕೊರೋನ ಪಾಸಿಟಿವ್ ದೃಢಗೊಂಡ 402 ಮಂದಿಯಲ್ಲಿ 176 ಮಂದಿ ಪಾಸಿಟಿವ್ ಬಂದವರ ಸಂಪರ್ಕದಿಂದ, 81 ಮಂದಿ ಶೀತಜ್ವರ ದಿಂದ ಹಾಗೂ ಮೂವರು ಉಸಿರಾಟ ತೊಂದರೆಯಿಂದ ಬಳಲುತಿದ್ದು ಅವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇನ್ನು ಇಬ್ಬರು ದೇಶೀಯ ಪ್ರವಾಸ ದಿಂದ ಮರಳಿದ್ದು, ಪಾಸಿಟಿವ್ ಕಾಣಿಸಿಕೊಂಡಿದೆ. 140 ಮಂದಿಯ ಸೋಂಕಿನ ಸಂರ್ಕ ಇನ್ನೂ ತನಿಖೆಯಲ್ಲಿದೆ ಎಂದರು.

292 ಮಂದಿ ಬಿಡುಗಡೆ: ಜಿಲ್ಲೆಯಲ್ಲಿ ಗುರುವಾರ ಒಟ್ಟು 292 ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡು ಬಿಡುಗಡೆಗೊಂಡಿದ್ದಾರೆ. ಇವರಲ್ಲಿ 188 ಮಂದಿ ಕೋವಿಡ್ ಆಸ್ಪತ್ರೆಗಳಿಂದ, 104 ಮಂದಿ ಹೋಮ್ ಐಸೋಲೇಷನ್ ನಲ್ಲಿದ್ದು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ 4258ಕ್ಕೇರಿದೆ. ಈಗಾಗಲೇ ಪಾಸಿಟಿವ್ ಬಂದ 2847 ಮಂದಿ ಚಿಕಿತ್ಸೆಯಲ್ಲಿದ್ದು, ಇವರಲ್ಲಿ 1449 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಹಾಗೂ 1398 ಮಂದಿ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆುುತಿದ್ದಾರೆ ಎಂದು ಡಿಎಚ್‌ಓ ಹೇಳಿದರು.

1697 ಸ್ಯಾಂಪಲ್ ಸಂಗ್ರಹ: ಸೋಂಕಿನ ಪರೀಕ್ಷೆಗಾಗಿ ಗುರುವಾರ 1697 ಮಂದಿಯ ಗಂಟಲುದ್ರವದ ಸ್ಯಾಂಪಲ್‌ಗಳನ್ನು ಪಡೆಯಲಾಗಿದೆ. ಇದರಲ್ಲಿ ಕೋವಿಡ್ ಶಂಕಿತರು 950 ಮಂದಿ, ಕೋವಿಡ್ ಸಂಪರ್ಕಿತರು 276 ಮಂದಿ ಇದ್ದರೆ, ಉಸಿರಾಟ ತೊಂದರೆಯ ಏಳು ಮಂದಿ, ಶೀತ ಜ್ವರದಿಂದ ಬಳಲುವ 38 ಮಂದಿ ಹಾಗೂ ವಿವಿಧ ಕೋವಿಡ್ ಹಾಟ್‌ಸ್ಪಾಟ್‌ಗಳಿಂದ ಆಗಮಿಸಿದ 426 ಮಂದಿಯ ಸ್ಯಾಂಪಲ್‌ಗಳು ಸೇರಿವೆ ಎಂದು ಡಾ.ಸೂಡ ತಿಳಿಸಿದರು.

ಇಂದು ಪಡೆದ 1697 ಸ್ಯಾಂಪಲ್‌ಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಮಾದರಿಗಳ ಒಟ್ಟು ಸಂಖ್ಯೆ 50,793ಕ್ಕೇರಿದೆ. ಇವುಗಳಲ್ಲಿ ಈವರೆಗೆ 41,763 ನೆಗೆಟಿವ್, 7175 ಪಾಸಿಟಿವ್ ಬಂದಿವೆ. ಜಿಲ್ಲೆಯಲ್ಲಿ ಈವರೆಗೆ 70 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಇನ್ನು ಒಟ್ಟು 1855 ಸ್ಯಾಂಪಲ್‌ಗಳ ಪರೀಕ್ಷಾ ವರದಿ ಬರಬೇಕಿದೆ ಎಂದು ಡಾ.ಸೂಡ ವಿವರಿಸಿದರು.

ಜಿಲ್ಲೆಯಲ್ಲಿ ಗುರುವಾರ 402 ಮಂದಿಯನ್ನು ಆಸ್ಪತ್ರೆಗಳ ಐಸೋಲೇಷನ್ ವಾರ್ಡ್‌ಗೆ ದಾಖಲಿಸಲಾಗಿದೆ.ಇವರಲ್ಲಿ ಒಟ್ಟು 190 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಹಾಗೂ 202 ಮಂದಿ ಹೋಮ್ ಐಸೋಲೇಷನ್‌ನಲ್ಲಿ ಇದ್ದಾರೆ. ಜಿಲ್ಲೆಯಲ್ಲಿ ಈಗ ಒಟ್ಟು 2166 ಮಂದಿ ಹೋಮ್ ಐಸೋಲೇಷನ್ ಚಿಕಿತ್ಸೆಯಲ್ಲಿ ದ್ದಾರೆ ಎಂದು ಅವರು ಹೇಳಿದರು.

ದಿನದಲ್ಲಿ ಕೋವಿಡ್‌ಗೆ ಇಬ್ಬರು ಬಲಿ

ದಿನದಲ್ಲಿ ಕೋವಿಡ್‌ಗೆ ಇಬ್ಬರು ಬಲಿ ಉಡುಪಿ ಜಿಲ್ಲೆಯಲ್ಲಿ ಗುರುವಾರ ಇಬ್ಬರು ಕೋವಿಡ್-19 ಸೋಂಕಿನೊಂದಿಗೆ ಮೃತಪಟ್ಟಿದ್ದಾರೆ. ಕಿಡ್ನಿ ಸಮಸ್ಯೆ, ಮಧುಮೇಹ ತೊಂದರೆಗಳಿಗಾಗಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಕುಂದಾಪುರ ತಾಲೂಕು ಮಾರಣಕಟ್ಟೆಯ 56 ವರ್ಷ ಪ್ರಾಯದ ಪುರುಷರೊಬ್ಬರು ಇಂದು ಮೃತಪಟ್ಟಿದ್ದಾರೆ.

ಕೋಟತಟ್ಟು ಗ್ರಾಮದ 61 ವರ್ಷ ಪ್ರಾಯದ ವೃದ್ಧರು ಕಿಡ್ನಿ ಹಾಗೂ ಇತರ ಸಮಸ್ಯೆಗಳಿಗಾಗಿ ಮಣಿಪಾಲ ಆಸ್ಪತ್ರೆಗೆ ಕರೆತರುವಾಗಲೇ ನಿನ್ನೆ ರಾತ್ರಿ ಮೃತಪಟ್ಟಿದ್ದು, ಬಳಿಕ ನಡೆಸಿದ ಪರೀಕ್ಷೆಯಲ್ಲಿ ಅವರಲ್ಲೂ ಸೋಂಕು ಪತ್ತೆಯಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News