ಈ ಬಾರಿಯ ಸಾರ್ವಜನಿಕ ಗಣೇಶೋತ್ಸವ ಆಚರಣೆ ಸಂಪೂರ್ಣ ನಿಷೇಧಿಸಿ ರಾಜ್ಯ ಸರಕಾರ ಆದೇಶ

Update: 2020-08-14 15:14 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಆ. 14: ಕೊರೋನ ಸೋಂಕು ನಿಯಂತ್ರಣ ದೃಷ್ಟಿಯಿಂದ `ಸಾರ್ವಜನಿಕ ಸ್ಥಳಗಳಲ್ಲಿ ರಸ್ತೆ, ಓಣಿ, ಗಲ್ಲಿ, ಮೈದಾನಗಳಲ್ಲಿ ಗಣೇಶ ಪ್ರತಿಷ್ಠಾಪನೆ, ಸಾರ್ವಜನಿಕ ಗಣೇಶೋತ್ಸವ ಆಚರಣೆ'ಯನ್ನು ಸಂಪೂರ್ಣ ನಿಷೇಧಿಸಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಆದೇಶ ಹೊರಡಿಸಿದ್ದಾರೆ.

ಶುಕ್ರವಾರ ಗಣೇಶ ಪ್ರತಿಷ್ಠಾಪನೆ ಸಂಬಂಧ ಮಾರ್ಗಸೂಚಿ ಹೊರಡಿಸಿರುವ ವಿಜಯ ಭಾಸ್ಕರ್ ಅವರು, ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಅಥವಾ ತಮ್ಮ ಮನೆಗಳಲ್ಲಿಯೇ ಸರಳ ರೀತಿಯಲ್ಲಿ ಆಚರಿಸಬೇಕು. ರಸ್ತೆ, ಗಲ್ಲಿ, ಓಣಿ, ಮೈದಾನಗಳಲ್ಲಿ ಸಾರ್ವಜನಿಕವಾಗಿ ಗಣೇಶ ಮೂರ್ತಿಯನ್ನು ಕೂರಿಸುವಂತಿಲ್ಲ. ಯಾವುದೇ ಕಾರಣಕ್ಕೂ ಸಾರ್ವಜನಿಕ ನದಿ, ಕೆರೆ, ಕುಂಟೆ, ಕೊಳ್ಳ, ಬಾವಿ ಮತ್ತು ಕಲ್ಯಾಣಿಗಳಲ್ಲಿ ಗಣೇಶನ ವಿಸರ್ಜನೆ ಮಾಡುವಂತಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಗಣೇಶ ಮೂರ್ತಿ ತರುವಾಗ ಹಾಗೂ ವಿಸರ್ಜಿಸುವ ವೇಳೆ ಯಾವುದೇ ಕಾರಣಕ್ಕೂ, ಯಾವುದೇ ಸಂದರ್ಭದಲ್ಲಿಯೂ ಯಾವುದೇ ರೀತಿಯ ಮೆರವಣಿಗೆ ಮಾಡುವಂತಿಲ್ಲ. ಮನೆಯಲ್ಲಿ ಪ್ರತಿಷ್ಠಾಪಿಸಿದ ಗಣೇಶನ ವಿಗ್ರಹಗಳನ್ನು ಮನೆ ಆವರಣದಲ್ಲಿಯೇ ವಿಸರ್ಜನೆ ಮಾಡತಕ್ಕದ್ದು. ಈ ತಿಂಗಳ ಅಂತ್ಯದವರೆಗೆ ಸಾರ್ವಜನಿಕವಾಗಿ ಧಾರ್ಮಿಕ ಉತ್ಸವಗಳ ಆಚರಣೆಯನ್ನು ಕೇಂದ್ರ ಸರಕಾರವೇ ನಿಷೇಧಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮಾರ್ಗಸೂಚಿ ಹೊರಡಿಸಿದೆ.

ಗಣೇಶ ಹಬ್ಬ ಆಚರಿಸುವ ದೇವಸ್ಥಾನಗಳಲ್ಲಿ ಪ್ರತಿನಿತ್ಯ ಸ್ಯಾನಿಟೈಸೇಷನ್ ಮಾಡುವುದು ಹಾಗೂ ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾಧಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸತಕ್ಕದ್ದು. ಭಕ್ತಾಧಿಗಳು ಕಡ್ಡಾಯವಾಗಿ ಅಂತರ ಕಾಯ್ದುಕೊಳ್ಳಬೇಕು. ಸೋಂಕು ನಿಯಂತ್ರಣ ದೃಷ್ಟಿಯಿಂದ ಎಲ್ಲರೂ ಮಾಸ್ಕ್ ಧರಿಸಿರಬೇಕು. ಇದನ್ನು ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಾನೂನಿನ ಅನ್ವಯ ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News