ಕಾರ್ಕಳದಲ್ಲಿ ಜವಳಿ ಪಾರ್ಕ್ ನಿರ್ಮಾಣಕ್ಕೆ ಸರಕಾರದ ಅನುಮೋದನೆ: ಡಿಸಿ ಜಗದೀಶ್

Update: 2020-08-15 07:01 GMT

ಉಡುಪಿ, ಆ.15: ಯುವ ಸಮುದಾಯಕ್ಕೆ ಉದ್ಯೋಗ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಕಾರ್ಕಳದಲ್ಲಿ ಜವಳಿ ಪಾರ್ಕ್ ನಿರ್ಮಿಸುವ ಯೋಜನೆಯನ್ನು ಕಾರ್ಯಗತಗೊಳಿಸಲು ಸರಕಾರ ಅನುಮೋದನೆ ನೀಡಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ 74ನೇ ಸ್ವಾತಂತ್ರೋತ್ಸವ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಅವರು ಸಂದೇಶ ನೀಡಿದರು.

ಪಡುಬಿದ್ರೆ ಹೆಜಮಾಡಿ ಮೀನುಗಾರಿಕಾ ಬಂದರು ನಿರ್ಮಾಣಕ್ಕೆ ಸಂಬಂಧಿಸಿದಂತೆ 180.84 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಾಮಗಾರಿ ನಡೆಸಲು ಸರಕಾರದಿಂದ ಅನುಮೋದನೆ ದೊರೆತಿದ್ದು, ಶೀಘ್ರವೇ ನಿರ್ಮಾಣ ಕಾರ್ಯ ಪ್ರಾರಂಭಿಸಲಾಗುವುದು ಎಂದರು.

ಕಳೆದ ವರ್ಷ ನೆರೆಯಿಂದ ಮನೆಗಳನ್ನು ಕಳೆದುಕೊಂಡ 557 ಫಲಾನುಭವಿಗಳಿಗೆ ರಾಜೀವ್ ಗಾಂಧಿ ವಸತಿ ನಿಗಮದ ನೆರೆ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮದ ಮೂಲಕ 160.81 ಲಕ್ಷ ರೂ. ಪಾವತಿಸಲಾಗಿದೆ. ಪ್ರವಾಹ ಪರಿಹಾರ ಕಾಮಗಾರಿಗಳಿಗೆ 20 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ 814 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದವರು ಮಾಹಿತಿ ನೀಡಿದರು.

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮದಲ್ಲಿ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ ಫಲಾನುಭವಿಗಳನ್ನು ಗುರುತಿಸಿ 3,147 ಅರ್ಹ ಫಲಾನುಭವಿಗಳಿಗೆ ಪಿಂಚಣಿ ಮಂಜೂರು ಮಾಡಲಾಗಿದೆ ಎಂದ ಅವರು, ಕಾರ್ಕಳ ಕೋಟಿ-ಚೆನ್ನಯ ಥೀಮ್ ಪಾರ್ಕ್‌ನಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಯನ್ನು ನಡೆಸಲಾಗುತ್ತಿದೆ ಎಂದರು.

ಜಿಲ್ಲೆಯ ಎಲ್ಲ ಬೀಚ್‌ಗಳಿಗೂ ಬ್ಲೂ ಫ್ಲಾಗ್ ಮಾನ್ಯತೆ ದೊರೆಯುವ ರೀತಿಯಲ್ಲಿ ಬೀಚ್‌ಗಳನ್ನು ಅಭಿವೃದ್ಧಿಪಡಿಸಲಾಗುವುದು. ಈಗಾಗಲೇ ರಾಷ್ಟ್ರೀಯ ಮಾನ್ಯತೆ ಪಡೆದಿರುವ ಪಡುಬಿದ್ರೆ ಬೀಚ್ ಹೆಸರನ್ನು ಅಂತರ್‌ರಾಷ್ಟ್ರೀಯ ಮಟ್ಟದ ಮಾನ್ಯತೆಗಾಗಿ ಅಂತರ್‌ರಾಷ್ಟ್ರೀಯ ಜ್ಯೂರಿಗೆ ಕಳುಹಿಸಲಾಗಿದೆ. ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ 4.2 ಕೋಟಿ ರೂ. ವೆಚ್ಚದಲ್ಲಿ ಜೆಟ್ಟಿ ನಿರ್ಮಾಣಕ್ಕೆ ಸರಕಾರದ ಅನುಮೋದನೆ ದೊರೆತಿದೆ. ಮಲ್ಪೆ ಸೀವಾಕ್ ಮತ್ತು ಬೀಚ್ ಅಭಿವೃದ್ಧಿಗಾಗಿ 2.50 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಕೋವಿಡ್ -19 ಸಂಬಂಧ ಉಡುಪಿ ಜಿಲ್ಲಾಸ್ಪತ್ರೆಯ ಎಲ್ಲ 124 ಮತ್ತು ಕಾರ್ಕಳ ತಾಲೂಕು ಆಸ್ಪತ್ರೆಯಲ್ಲಿ 50 ಹಾಗೂ ಕುಂದಾಪುರ ತಾಲೂಕು ಆಸ್ಪತ್ರೆಯಲ್ಲಿ 60 ಬೆಡ್‌ಗಳಿಗೆ ಆಕ್ಸಿಜನ್ ಲಭ್ಯವಾಗಿಸುವ ಕಾರ್ಯ ಪೂರ್ಣಗೊಳ್ಳುವ ಹಂತದಲ್ಲಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ವೈದ್ಯರು, ಲ್ಯಾಬ್ ಟೆಕ್ನಿಶಿಯನ್, ಕಿರಿಯ ಆರೋಗ್ಯ ಸಹಾಯಕರು, ಶಿಕ್ಷಕರು, ವಾಹನ ಚಾಲಕರು, ಆಶಾ ಕಾರ್ಯಕರ್ತೆಯರು ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು.

ಉಡುಪಿ ಶಾಸಕ ಕೆ.ರಘುಪತಿ ಭಟ್, ಜಿಪಂ ಅಧ್ಯಕ್ಷ ದಿನಕರ ಬಾಬು, ತಾಪಂ ಅಧ್ಯಕ್ಷೆ ಸಂಧ್ಯಾ ಕಾಮತ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಎಸ್ಪಿ ವಿಷ್ಣುವರ್ಧನ್, ಜಿಪಂ ಸಿಇಒ ಪ್ರೀತಿ ಗೆಹ್ಲೋಟ್, ಕರಾವಳಿ ಕಾವಲು ಪಡೆಯ ಎಸ್ಪಿ ಆರ್.ಚೇತನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News