ಮ್ಯಾಜಿಸ್ಟ್ರೇಟ್ ತನಿಖೆಯಿಂದ ಸತ್ಯಾಂಶ ಹೊರಬರಲು ಸಾಧ್ಯವಿಲ್ಲ: ಮಾಜಿ ಪ್ರಧಾನಿ ದೇವೇಗೌಡ

Update: 2020-08-17 12:51 GMT

ಬೆಂಗಳೂರು, ಆ. 17: ದೇವರ ಜೀವನಹಳ್ಳಿ(ಡಿ.ಜೆ.ಹಳ್ಳಿ) ಮತ್ತು ಕಾಡುಗೊಂಡನಹಳ್ಳಿ(ಕೆ.ಜಿ.ಹಳ್ಳಿ) ಗಲಭೆ ಪ್ರಕರಣ ಸಂಬಂಧ ಹೈಕೋರ್ಟಿನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಜೆಡಿಎಸ್ ವರಿಷ್ಟ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಇಂದಿಲ್ಲಿ ಆಗ್ರಹಿಸಿದ್ದಾರೆ.

ಸೋಮವಾರ ಇಲ್ಲಿನ ಜೆಡಿಎಸ್ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಪಕ್ಷದ ಶಾಸಕರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು ಮತ್ತು ಜಿಲ್ಲಾ ಮುಖಂಡರೊಂದಿಗೆ ವಿಡಿಯೋ ಸಂವಾದದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಘಟನೆಗೆ ಏನು ಕಾರಣ ಎಂಬುದು ಗೊತ್ತಿಲ್ಲ. ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ವಿಚಾರದಿಂದ ಘಟನೆ ನಡೆದಿದೆಯೇ ನನಗೆ ಗೊತ್ತಿಲ್ಲ. ಹೀಗಾಗಿ ಆ ಕುರಿತು ನಾನು ಹೆಚ್ಚಿಗೆ ಮಾತನಾಡುವುದಿಲ್ಲ ಎಂದು ನಿರಾಕರಿಸಿದರು.

ರಾಜ್ಯ ಸರಕಾರ ಈಗಾಗಲೇ ಡಿ.ಜೆ.ಹಳ್ಳಿ-ಕೆ.ಜಿ.ಹಳ್ಳಿ ಗಲಭೆ ಪ್ರಕರಣದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ವಹಿಸಿದೆ. ಇದರಿಂದ ಯಾವುದೇ ಕಾರಣಕ್ಕೂ ಸತ್ಯಾಂಶ ಹೊರಬರಲು ಸಾಧ್ಯವಿಲ್ಲ. ಈ ಹಿಂದೆ ನಡೆದ ಹಲವು ಘಟನೆಗಳ ತನಿಖೆ ಏನಾಗಿದೆ ಎಂದು ನನಗೆ ಗೊತ್ತಿದೆ. ಆದುದರಿಂದ ಗಲಭೆ ಪ್ರಕರಣ ಸಂಬಂಧ ಹೈಕೋರ್ಟಿನ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ದೇವೇಗೌಡ ಒತ್ತಾಯಿಸಿದರು.

ಅಮಾಯಕರ ಬಂಧನ ಬೇಡ: ಬೆಂಗಳೂರು ಗಲಭೆ ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು 300ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ. ಕೃತ್ಯದಲ್ಲಿ ಪಾಲ್ಗೊಂಡವರ ಬಂಧನಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ, ಯಾವುದೇ ಕಾರಣಕ್ಕೂ ನಿರಪರಾಧಿಗಳಿಗೆ ತೊಂದರೆ ನೀಡುವುದು ಸರಿಯಲ್ಲ. ಈ ಕುರಿತು ರಾಜ್ಯ ಸರಕಾರ ಗಂಭೀರವಾಗಿ ಆಲೋಚಿಸಬೇಕು ಎಂದು ದೇವೇಗೌಡ ಇದೇ ವೇಳೆ ಸಲಹೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News