ಎಪಿಎಂಸಿ, ಭೂ ಸುಧಾರಣಾ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ: ದೇವೇಗೌಡ

Update: 2020-08-17 14:22 GMT

ಬೆಂಗಳೂರು, ಆ. 17: ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಮತ್ತು ಕೈಗಾರಿಕಾ ಕಾಯ್ದೆಗಳಿಗೆ `ಅಧ್ಯಾದೇಶ'ದ ಮೂಲಕ ಸರಕಾರ ತಂದಿರುವ ತಿದ್ದುಪಡಿಗಳು ರಾಜ್ಯದ ಜನತೆಗೆ ಮಾರಕವಾಗಿದ್ದು, ಈ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಪಕ್ಷದಿಂದ ರಾಜ್ಯಾದ್ಯಂತ ಹೋರಾಟ ರೂಪಿಸಲಾಗುವುದು ಎಂದು ಜೆಡಿಎಸ್ ವರಿಷ್ಟ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಸೋಮವಾರ ಜೆಡಿಎಸ್ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ಪಕ್ಷದ ಶಾಸಕರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರುಗಳು ಮತ್ತು ಜಿಲ್ಲಾ ಮುಖಂಡರೊಂದಿಗೆ ನಡೆಸಿದ ವಿಡಿಯೋ ಸಂವಾದದ ಬಳಿಕ ಮಾತನಾಡಿದ ಅವರು, ಕಾಯ್ದೆಗಳ ತಿದ್ದುಪಡಿ ವಿರೋಧಿಸಿ  ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚಿಸಿದ್ದು ಎಲ್ಲ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಅಲ್ಲದೆ, ಆಯಾ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಗುವುದು. ಅನಂತರ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಕೆ ಮಾಡಲಾಗುವುದು ಎಂದರು.

ರಾಜ್ಯದಲ್ಲಿ ಎಲ್ಲೆಡೆ ಕೊರೋನ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ವ್ಯಕ್ತಿಗತ ಅಂತರ ಕಾಪಾಡಿಕೊಂಡು ಹೋರಾಟ ಮಾಡಲಿದ್ದು, ಪ್ರತಿ ಜಿಲ್ಲೆಗಳಲ್ಲಿ ಮುಖಂಡರ ಜೊತೆ ಕಾರ್ಯಕರ್ತರು ಹಾಗೂ ರೈತರು ಪಾಲ್ಗೊಳ್ಳಲಿದ್ದಾರೆ ಎಂದ ಅವರು, ಕೊರೋನ ಒಂದು ವೈರಸ್ ಅಷ್ಟೇ. ಇದರಿಂದ ಜನತೆ ಭಯ ಪಡುವ ಅವಶ್ಯಕತೆ ಇಲ್ಲ, ಮುನ್ನೆಚ್ಚರಿಕೆ ವಹಿಸಿದರೆ ಸಾಕು ಎಂದರು.

ಕೊರೋನ ವೈರಸ್ ಸೋಂಕಿತರನ್ನು ಎಲ್ಲರೂ ಪ್ರೀತಿಯಿಂದ ನೋಡಬೇಕು. ಅವರನ್ನು ಅವಮಾನಿಸಬಾರದು ಎಂದು ಪಕ್ಷದ ಮುಖಂಡರಿಗೆ ಮನವಿ ಮಾಡಿದ ದೇವೇಗೌಡ, ಪಕ್ಷದ ವತಿಯಿಂದ ಸಾಧ್ಯವಾದಷ್ಟು ಜನರಿಗೆ ಮಾಸ್ಕ್, ಸ್ಯಾನಿಟೈಸರ್ ಮತ್ತು ವಿಟಮಿನ್ ಮಾತ್ರೆಗಳನ್ನು ತಲುಪಿಸುವ ಕಾರ್ಯ ಮಾಡಬೇಕು. ಅಲ್ಲದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ಇದೇವೇಳೆ ಸಲಹೆ ಮಾಡಿದರು.

ಜೆಪಿ ನಗರದ ನಿವಾಸದಿಂದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ, ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಸೇರಿದಂತೆ ರಾಜ್ಯದ ಮೂವತ್ತು ಜಿಲ್ಲೆಗಳ ಜೆಡಿಎಸ್ ಜಿಲ್ಲಾ ಮುಖಂಡರು ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News