ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ರಾಜ್ಯ ಸರಕಾರ ಅನುಮತಿ: ಹೊಸ ಮಾರ್ಗಸೂಚಿ ಪ್ರಕಟ

Update: 2020-08-18 12:09 GMT

ಬೆಂಗಳೂರು, ಆ.18: ರಾಜ್ಯದಲ್ಲಿ ಕೊರೋನ ಸೋಂಕು ಹರಡುವುದನ್ನು ತಡೆಯುವ ಸಲುವಾಗಿ ಹಾಗೂ ಹಬ್ಬದ ಸಂಭ್ರಮದ ನಡುವೆ ಆಚರಣೆಗೂ ಅಡ್ಡಿಯಾಗದಂತೆ ರಾಜ್ಯ ಸರಕಾರ ಗಣೇಶೋತ್ಸವ ಆಚರಣೆಗೆ ಅವಕಾಶ ಕಲ್ಪಿಸಿದ್ದು, ಮಂಗಳವಾರ ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ.

ಎಲ್ಲ ಕಡೆಗಳಲ್ಲಿ ಸೋಂಕು ಅಧಿಕಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಗಣೇಶೋತ್ಸವವನ್ನು ನಿರ್ಬಂಧಿಸಲು ಸರಕಾರ ಮುಂದಾಗಿತ್ತು. ಆದರೆ, ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಮಾರ್ಗಸೂಚಿಗಳನ್ನು ರೂಪಿಸಿದೆ.

ಕೊರೋನ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರ ಸ್ನೇಹಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ವಿನಯಪೂರ್ವಕ ವಿನಂತಿ ಎಂದು ಮುಖ್ಯಮಂತ್ರಿ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾರ್ಗಸೂಚಿ ಹಂಚಿಕೊಳ್ಳಲಾಗಿದೆ.

ಹಬ್ಬವನ್ನು ಅತ್ಯಂತ ಸರಳವಾಗಿ ಹಾಗೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸೋಂಕು ಹರಡದಂತೆ ಜಾಗೃತಿ ವಹಿಸಿ ಆಚರಣೆ ಮಾಡುವಂತೆ, ಕನಿಷ್ಠ ಸಂಖ್ಯೆಯೊಂದಿಗೆ ಸಾರ್ವಜನಿಕ ಪ್ರದೇಶದಲ್ಲಿ ಆಚರಿಸುವಂತೆ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಹೊಸಮಾರ್ಗಸೂಚಿಯಲ್ಲಿ ಏನಿದೆ?

► ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ದೇವಸ್ಥಾನದೊಳಗೆ, ಮನೆಗಳಲ್ಲಿ ಅಥವಾ ಸರ್ಕಾರಿ/ಖಾಸಗಿ/ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು.

► ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತಹ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದು.

► ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಭಗಳಲ್ಲಿ ಯಾವುದೇ ರೀತಿಯ ಮೆರವಣಿಗೆ ಮಾಡುವಂತಿಲ್ಲ. ಅದನ್ನು ಸಂಪೂರ್ಣವಾಗಿ ನಿಬರ್ಂಧಿಸಿದೆ.

► ಗಣೇಶೋತ್ಸವ ಸಮಿತಿಗಳು/ಮಂಡಳಿಗಳು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಮುನಿಸಿಪಲ್ ಕಾರ್ಪೋರೇಷನ್ ಅಥವಾ ಸ್ಥಳೀಯ ಆಡಳಿತದಿಂದ ಮುಂಚಿತವಾಗಿ ಅನುಮತಿ ಪಡೆದುಕೊಳ್ಳಬೇಕು. ಒಂದು ವಾರ್ಡ್ ಗೆ ಅಥವಾ ಒಂದು ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವ ಆಚರಿಸಲು ಪ್ರೋತ್ಸಾಹಿಸುವುದು.

► ಸಾರ್ವಜನಿಕ ಸ್ಥಳಗಳಲ್ಲಿ ಮೂರ್ತಿ ಪ್ರತಿಷ್ಠಾಪಿಸುವವರು ಒಮ್ಮೆಲೆ 20ಕ್ಕಿಂತ ಹೆಚ್ಚಿನ ಜನ ಸೇರದಂತೆ ಗಮನಿಸುವುದು.

► ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ/ ಸಂಗೀತ/ ನೃತ್ಯ ಇನ್ನಿತರ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ.

► ಗಣೇಶಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಭಗಳಲ್ಲಿ ಮೆರವಣಿಗೆ ಹೊರಡಿಸಲು, ಮಾಡಲು ಅವಕಾಶವಿರುವುದಿಲ್ಲ. ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

► ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು.

► ಸರಕಾರಿ ಅಥವಾ ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಮೂರ್ತಿಗಳನ್ನು ಸಮೀಪದ ಮಾರ್ಗಗಳ ಮೂಲಕ ಮಹಾನಗರ ಪಾಲಿಕೆ ಅಥವಾ ಜಿಲ್ಲಾಡಳಿತ ಅಥವಾ ಹತ್ತಿರದ ಸ್ಥಳೀಯ ಸಂಸ್ಥೆಗಳ ಇಲ್ಲವೇ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಟ್ಯಾಂಕ್‍ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕ್‍ಗಳಲ್ಲಿ ವಿಸರ್ಜಿಸುವುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News