×
Ad

ಗಣೇಶೋತ್ಸವ ಆಚರಣೆ ವೇಳೆ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ: ಉಡುಪಿ ಅಪರ ಜಿಲ್ಲಾಧಿಕಾರಿ

Update: 2020-08-20 21:06 IST

ಉಡುಪಿ, ಆ.20: ಗಣೇಶೋತ್ಸವ ಆಚರಣೆ ಕುರಿತು ರಾಜ್ಯ ಸರಕಾರ ನೀಡಿರುವ ಪರಿಷ್ಕೃತ ಮಾರ್ಗಸೂಚಿಗಳನ್ನು ಪಾಲಿಸುವುದರೊಂದಿಗೆ ಸರಳವಾಗಿ ಗಣೇಶೋತ್ಸವ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ.

ಗುರುವಾರ ಮಣಿಪಾಲದ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಗಣೇಶ ಹಬ್ಬ ಆಚರಣೆ ಪ್ರಯುಕ್ತ ನಾಗರಿಕ ಸಂವರ್ಧಿತ ಸಭೆಯ ಆದ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ವಿಶ್ವದ ಎಲ್ಲೆಡೆ ಈ ಬಾರಿ ಕೋವಿಡ್ ಸೋಂಕು ಹರಡಿ ಜನರನ್ನು ಭಯಭೀತರನ್ನಾಗಿಸಿದೆ. ಸೊಂಕು ಹರಡುವುದನ್ನು ನಿಯಂತ್ರಿಸುವ ಉದ್ದೇಶದಿಂದ ಸರಕಾರ ಗಣೇಶೋತ್ಸವ ಆಚರಣೆ ಕುರಿತು ಮಾರ್ಗಸೂಚಿಯನ್ನು ಹೊರಡಿಸಿದೆ. ಸಾರ್ವಜನಿಕರು ಈ ಮಾರ್ಗಸೂಚಿಯನ್ನು ಅನುಸರಿಸುವುದರೊಂದಿಗೆ ಸರಳವಾಗಿ ಶೃದ್ದ ಭಕ್ತಿಯಿಂದ ಹಬ್ಬವನ್ನು ಆಚರಿಸಬೇಕು ಎಂದರು.

ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನದ ಸಾರ್ವಜನಿಕ ಸ್ಥಳದಲ್ಲಿ ದಿನನಿತ್ಯದ ಸ್ಯಾನಟೈಷ್ ಮಾಡಬೇಕು. ದರ್ಶನಕ್ಕಾಗಿ ಆಗಮಿಸುವ ಭಕ್ತಾಧಿಗಳ ನಡುವೆ 6 ಅಡಿ ಸುರಕ್ಷತಾ ಅಂತರ ಕಾಯ್ದುಕೊಳ್ಳಬೇಕು. ಅಲ್ಲದೆ ಥರ್ಮಲ್ ಸ್ಕ್ರೀನಿಂಗ್ ಮಾಡಬೇಕು. ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದರು.

ಗಣೇಶಮೂರ್ತಿ ಪ್ರತಿಷ್ಠಾಪನಾ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ ಹಾಗೂ ಇತರ ಯಾವುದೆ ಮನೋರಂಜನ ಕಾರ್ಯಕ್ರಮಗಳನ್ನು ಆಯೋಜಿಸುವುದಕ್ಕೆ ಅವಕಾಶ ಇರುವುದಿಲ್ಲ. ಗಣೇಶಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯ ಮೆರವಣಿಗೆ ಮಾಡುವುದನ್ನು ನಿರ್ಬಂಧಿಸಿದೆ ಎಂದರು.

ಪಾರಂಪರಿಕ ಗಣೇಶೋತ್ಸವಕ್ಕಾಗಿ ಗಣೇಶೋತ್ಸವ ಮಂಡಳಿಗಳು ಗಣೇಶ ಮೂರ್ತಿ ಪ್ರತಿಷ್ಠಾನ ಮಾಡುವ ಮುನ್ನ ಸ್ಥಳೀಯ ಸಂಸ್ಥೆಗಳ ಪೂರ್ವನುಮತಿ ಪಡೆದಿರಬೇಕು ಎಂದ ಸದಾಶಿವ ಪ್ರಭು, ಗಣೇಶ ಮೂರ್ತಿ ಪ್ರತಿಷ್ಟಾನದ ಸ್ಥಳ ದಲ್ಲಿ 20ಕ್ಕಿಂತ ಹೆಚ್ಚು ಜನರು ಸೇರದಂತೆ ಎಚ್ಚರ ವಹಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಟುವರ್ಧನ್ ಮಾತನಾಡಿ, ಗಣೇಶೋತ್ಸವ ಆಚರಣೆ ಸಂದರ್ಭದಲ್ಲಿ ಶಾಂತಿ ಸೌಹಾರ್ದತೆ ನೆಲೆಯಲ್ಲಿ ಸರಕಾರದ ನಿಯಮಗಳನ್ನು ಪಾಲಿಸುವ ಮೂಲಕ ಕಾನೂನಿನ ಪರಿಮಿತಿಯಲ್ಲಿ ಆಚರಣೆ ಮಾಡಬೇಕು ಎಂದರು.

ಸಭೆಯಲ್ಲಿ ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಪಂ ಉಪ ಕಾರ್ಯದರ್ಶಿ ಕಿರಣ್ ಪಡ್ನೇಕರ್, ಸ್ಥಳೀಯ ಸಂಸ್ಥೆಗಳ ಮುಖ್ಯ ಅಧಿಕಾರಿಗಳು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News