ಭಾರೀ ಮಳೆ, ಪ್ರವಾಹ: ಆ.24ರಿಂದ ಸಚಿವ ಜಾರಕಿಹೊಳಿ ಕ್ಷೇತ್ರದಲ್ಲಿ ಡಿ.ಕೆ.ಶಿವಕುಮಾರ್ ಪ್ರವಾಸ

Update: 2020-08-23 18:00 GMT

ಬೆಳಗಾವಿ, ಆ.23: ಮಹಾರಾಷ್ಟದಲ್ಲಿ ಭಾರೀ ಮಳೆ ಸುರಿದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಸದ್ಯ ಮಳೆಯ ಅಬ್ಬರ ಕಡಿಮೆಯಾಗಿದ್ದು, ಪ್ರವಾಹದಿಂದ ಆಗಿರುವ ಹಾನಿ ಬಗ್ಗೆ ಪರಿಶೀಲನೆಗೆ ಸಿಎಂ ಬಿಎಸ್‍ವೈ ಹಾಗೂ ಕೆಪಿಸಿಸಿ ಅಧ್ಯಕ್ಷ ಬೆಳಗಾವಿ ಜಿಲ್ಲೆಯ ಭೇಟಿಗೆ ಸಮಯ ನಿಗದಿಯಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಚಿವ ರಮೇಶ ಜಾರಕಿಹೊಳಿ ಕ್ಷೇತ್ರದಲ್ಲಿ ಪ್ರವಾಹ ಪರಿಸ್ಥಿತಿ ಅವಲೋಕನ ಮಾಡಲು ನಿರ್ಧರಿಸಿದ್ದಾರೆ. ಘಟಪ್ರಭಾ, ಮಾರ್ಕಂಡಯ್ಯ ಹಾಗೂ ಹಿರಣ್ಯಕೇಶಿ ನದಿಯಿಂದ ಗೋಕಾಕ್ ಭಾಗದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿತ್ತು. ಗೋಕಾಕ್ ನಗರದ ಅನೇಕ ಬಡವಾವಣೆಗಳು ಹಾಗೂ ತಾಲೂಕಿನ 6ಕ್ಕೂ ಹೆಚ್ಚು ಗ್ರಾಮಗಳಿಗೆ ಜಲ ದಿಗ್ಬಂದನ ಊಂಟಾಗಿತ್ತು. ಕ್ಷೇತ್ರದಲ್ಲಿ ಮಳೆಯಿಂದ ಹಾನಿಯಾಗಿದ್ದರೂ ಸಚಿವ ರಮೇಶ ಜಾರಕಿಹೊಳಿ ಮಾತ್ರ ಹೊಸದಿಲ್ಲಿ, ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದರು.

ಆ.24ರಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಂಗಳೂರಿನಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿ ನಂತರ ಗೋಕಾಕ್ ತಾಲೂಕಿಗೆ ಭೇಟಿ ನೀಡಲಿದ್ದಾರೆ. ಗೋಕಾಕ್ ನಗರ ಹಾಗೂ ಗೋಕಾಕ್ ತಾಲೂಕಿನ ಮೆಳವಂಕಿ ಗ್ರಾಮಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ. ನಂತರ ಘಟಪ್ರಭಾದಲ್ಲಿ ಸೇವಾದಳದ ಕಚೇರಿಯಲ್ಲಿ ಬೆಳಗಾವಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭೆ ನಡೆಸಿ ನಂತರ ಬೆಳಗಾವಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಆ.25ರಂದು ಬಾಗಲಕೋಟೆ ಜಿಲ್ಲೆಯಲ್ಲಿಯೂ ಪ್ರವಾಹದಿಂದ ಆಗಿರುವ ಹಾನಿಯ ಬಗ್ಗೆ ಮಾಹಿತಿಯನ್ನು ಪಡೆಯಲಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಅತಿವೃಷ್ಠಿಯಿಂದ ಹಾನಿಯ ಬಗ್ಗೆ ಕಂದಾಯ ಸಚಿವರು ಗಮನ ಹರಿಸಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಈ ಬೆನ್ನಲ್ಲೆ ಇದೇ ಆ.25ಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ನಂತರ ವೈಮಾನಿಕ ಸಮೀಕ್ಷೆ ನಡೆಸಲು ಈಗಾಗಲೇ ತೀರ್ಮಾನಿಸಲಾಗಿದೆ.

ವಿಮಾನ ನಿಲ್ದಾಣದಲ್ಲಿ ಬೆಳಗಾವಿ, ಧಾರವಾಡ ಅಧಿಕಾರಿಗಳು, ಜನಪ್ರತಿನಿಧಿನಿಗಳ ಸಭೆ ನಡೆಯಲಿದೆ. ನಂತರ ಆಲಮಟ್ಟಿಯಲ್ಲಿ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯ ಅಧಿಕಾರಿಗಳ ಸಭೆ ನಡೆಸಲು ತೀರ್ಮಾನಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News