ದಲಿತರ ಮೇಲೆ ನಿರಂತರ ದೌರ್ಜನ್ಯದ ವಿರುದ್ಧ ಆಕ್ರೋಶ; ದಾವಣಗೆರೆಯಲ್ಲಿ ಆದಿತ್ಯನಾಥ್ ಪ್ರತಿಕೃತಿಯ ಅಣಕು ಶವಯಾತ್ರೆ

Update: 2020-08-24 13:36 GMT

ದಾವಣಗೆರೆ, ಆ.24: ಉತ್ತರ ಪ್ರದೇಶದಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ, ಕೊಲೆಗಳು ನಡೆಯುತ್ತಿದ್ದು, ಇದನ್ನು ತಡೆಯುವಲ್ಲಿ ವಿಫಲವಾಗಿರುವ ಸಿಎಂ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಎಸ್ಸಿ ಘಟಕದ ಕಾರ್ಯಕರ್ತರು ನಗರದಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಇಲ್ಲಿನ ಅಂಬೇಡ್ಕರ್ ವೃತ್ತದಿಂದ ತಾಲೂಕು ಕಚೇರಿಯವರೆಗೆ ಯೋಗಿ ಆದಿತ್ಯನಾಥ್ ಪ್ರತಿಕೃತಿಯ ಅಣಕು ಶವಯಾತ್ರೆಯ ಮೆರವಣೆಗೆ ನಡೆಸಿದರು.

ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಬಿ.ಎಚ್.ವೀರಭದ್ರಪ್ಪ ಮಾತನಾಡಿ, ಉತ್ತರ ಪ್ರದೇಶದಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ, ಕೊಲೆ ಮತ್ತು ಅತ್ಯಾಚಾರಗಳು ನಡೆಯುತ್ತಿವೆ. ಆದರೆ, ಅಲ್ಲಿನ ಮುಖ್ಯಮಂತ್ರಿ ಆದಿತ್ಯನಾಥ್ ನಿರ್ಲಕ್ಷ್ಯ ವಹಿಸಿದ್ದು, ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ. ದಲಿತ ಸಮುದಾಯದ ಹಿತ ಕಾಯುವಲ್ಲಿ ವಿಫಲವಾಗಿರುವ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ದಲಿತ ಸಂಘಟನೆಗಳಿಂದ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ದಾವಣಗೆರೆ ತಾಲೂಕಿನ ಕುಕ್ಕುವಾಡ ಗ್ರಾಮದಲ್ಲಿರುವ ರುದ್ರಭೂಮಿ ತಗ್ಗು ಪ್ರದೇಶದಲ್ಲಿದೆ. ಮಳೆ ಬಂದಾಗ ನೀರು ನಿಲ್ಲುತ್ತದೆ. ಇದರಿಂದಾಗಿ ಶವ ಹೂಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಈ ಜಾಗಕ್ಕೆ ಒಂದು ಮೀಟರ್ ಮಣ್ಣು ಹಾಕಿಸಬೇಕು. ಕಲ್ಪನಹಳ್ಳಿ ಗ್ರಾಮದಲ್ಲಿರುವ ಗೋಮಾಳದ ಜಾಗವನ್ನು ರುದ್ರಭೂಮಿಗೆ ನೀಡಿ, ಸುತ್ತ ತಂತಿಬೇಲಿ ಹಾಕಿಸಬೇಕು ಎಂದು ಅವರು ಆಗ್ರಹಿಸಿದರು.

ಈ ಸಂದರ್ಭ ಪಾಲಿಕೆ ಸದಸ್ಯ ದೇವರಮನೆ ಶಿವಕುಮಾರ್, ಜಿಪಂ ಓಬಳೇಶಪ್ಪ, ನಗರಸಭಾ ಮಾಜಿ ಸದಸ್ಯ ಎಸ್.ಮಲ್ಲಿಕಾರ್ಜುನ್, ರಾಕೇಶ್, ರಂಗನಾಥ, ಹರೀಶ್.ಸಿ, ಎಚ್.ಜಯಪ್ಪ, ಎಸ್.ಶೇಖರಪ್ಪ, ಈಶ್ವರಪ್ಪ ಸೇರಿದಂತೆ ಹಲವರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News