ಕೋವಿಡ್ ಉಪಕರಣಗಳ ಖರೀದಿಯಲ್ಲಿ ಒಂದು ಪೈಸೆಯಷ್ಟೂ ಅವ್ಯವಹಾರವಾಗಿಲ್ಲ: ಸಿಎಂ ಬಿಎಸ್‌ವೈ

Update: 2020-08-25 16:06 GMT

ವಿಜಯಪುರ, ಆ.25: ಕೋವಿಡ್ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಮ್ಮ ಸರಕಾರ ಒಂದು ಪೈಸೆಯಷ್ಟು ಅವ್ಯವಹಾರಕ್ಕೂ ಅವಕಾಶ ಕೊಟ್ಟಿಲ್ಲ. ಎಲ್ಲವೂ ಪಾರದರ್ಶಕವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುನರುಚ್ಚರಿಸಿದ್ದಾರೆ.

ಮಂಗಳವಾರ ಆಲಮಟ್ಟಿ ಜಲಾಶಯದ ಸುತ್ತಮುತ್ತಲು ಅತಿವೃಷ್ಟಿಯಿಂದ ಆಗಿರುವ ಹಾನಿಯ ಕುರಿತು ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರತಿಪಕ್ಷಗಳು ಸರಕಾರದ ವಿರುದ್ಧ ಮಾಡುತ್ತಿರುವ ಎಲ್ಲ ಆರೋಪಗಳಿಗೂ ಮುಂದಿನ ವಿಧಾನಮಂಡಲದ ಅಧಿವೇಶನದಲ್ಲಿ ಉತ್ತರ ನೀಡುತ್ತೇನೆ ಎಂದರು.

ಕೋವಿಡ್ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಯಾವುದೆ ಅವ್ಯವಹಾರವಾಗಿಲ್ಲ. ಕೋವಿಡ್ ಮಹಾಮಾರಿಯ ವಿರುದ್ಧದ ಹೋರಾಟಕ್ಕೆ ಸರಕಾರದ ವತಿಯಿಂದ ಖರ್ಚು ಮಾಡಲಾಗಿರುವ ಹಣ ಸೇರಿದಂತೆ ಎಲ್ಲ ಮಾಹಿತಿಯನ್ನು ಸದನದ ಮುಂದಿಡುತ್ತೇನೆ ಎಂದು ಅವರು ಹೇಳಿದರು.

ಯುಕೆಪಿ ಹಂತ-3ರಡಿಯಲ್ಲಿ ರಾಜ್ಯಕ್ಕೆ ಹಂಚಿಕೆಯಾಗಿರುವ 130 ಟಿಎಂಸಿ ನೀರನ್ನು ಸದ್ಭಳಕೆ ಮಾಡಿಕೊಳ್ಳಲು ಆಲಮಟ್ಟಿ ಜಲಾಶಯವನ್ನು 519 ಮೀಟರ್ ಗಳಿಂದ 524 ಮೀಟರ್ ಗಳಿಗೆ ಎತ್ತರಿಸಲು ಸರಕಾರ ಬದ್ಧವಾಗಿದೆ. ಇದಕ್ಕಾಗಿ ಅಗತ್ಯವಿರುವ ಅನುದಾನವನ್ನು ಹೊಂದಿಸಿಕೊಳ್ಳಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

ರಾಜ್ಯದಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಅಗತ್ಯವಿರುವ ಅನುದಾನವನ್ನು ಕೊಡುವಲ್ಲಿ ಕೇಂದ್ರ ಸರಕಾರ ವಿಫಲವಾಗಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಕೋವಿಡ್ ಸಾಂಕ್ರಮಿಕದಿಂದಾಗಿ ರಾಜ್ಯಗಳಿಗೆ ಅನುದಾನವನ್ನು ಹಂಚಿಕೆ ಮಾಡಲು ಕೇಂದ್ರ ಸರಕಾರಕ್ಕೆ ಕಷ್ಟವಾಗುತ್ತಿದೆ. ನಮ್ಮ ರಾಜ್ಯದ ಆರ್ಥಿಕ ಪರಿಸ್ಥಿತಿಯ ಮೇಲೂ ಕೋವಿಡ್‍ನಿಂದಾಗಿ ಗಂಭೀರ ಪರಿಣಾಮ ಬೀರಿದೆ. ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಳ್ಳದಂತೆ ನೋಡಿಕೊಳ್ಳಲು ಸಾಲವನ್ನು ತೆಗೆಯಲು ಪ್ರಯತ್ನಿಸಲಾಗುತ್ತಿದೆ ಎಂದರು.

ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಬರಬೇಕಿರುವ ಜಿಎಸ್‍ಟಿ ಪಾಲು ವಿಳಂಬ ಆಗುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ಈ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಮಾತನಾಡಿದ್ದೇನೆ. ಅಲ್ಲದೆ, ಮುಂದಿನ ಜಿಎಸ್‍ಟಿ ಕೌನ್ಸಿಲ್ ಸಭೆಯಲ್ಲೂ ಈ ವಿಚಾರವನ್ನು ಪ್ರಸ್ತಾಪಿಸಲಾಗುವುದು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವೈಯಕ್ತಿಕವಾಗಿ ಹಣಕಾಸು ಸಚಿವೆಯನ್ನು ಭೇಟಿ ಮಾಡಿ ರಾಜ್ಯದ ಜಿಎಸ್‍ಟಿ ಪಾಲು ಶೀಘ್ರದಲ್ಲಿ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಆಲಮಟ್ಟಿ ಜಲಾಶಯಕ್ಕೆ ಮುಖ್ಯಮಂತ್ರಿ ಬಾಗಿನ ಅರ್ಪಿಸಿದರು. ಸಚಿವರಾದ ಬಸವರಾಜ ಬೊಮ್ಮಾಯಿ, ಆರ್.ಅಶೋಕ್, ರಮೇಶ್ ಜಾರಕಿಹೊಳಿ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News