ನೀಟ್, ಜೆಇಇ ಪರೀಕ್ಷೆ ಮುಂದೂಡಿಕೆಗೆ ಒತ್ತಾಯ : ಸಿಎಂಗಳ ಸಭೆ ಕರೆದ ಸೋನಿಯಾ, ಮಮತಾ

Update: 2020-08-26 05:32 GMT

ಕೊಲ್ಕತ್ತಾ : ಸೆಪ್ಟೆಂಬರ್‌ನಲ್ಲಿ ನಡೆಸಲು ಉದ್ದೇಶಿಸಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಹಾಗೂ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಂದೂಡುವಂತೆ ಒತ್ತಾಯಿಸುವ ಸಲುವಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಸಂಜೆ ಬಿಜೆಪಿಯೇತರ ಪಕ್ಷಗಳ ಆಳ್ವಿಕೆ ಇರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ.

ಈ ವರ್ಚುವಲ್ ಸಭೆ ಬುಧವಾರ ಮಧ್ಯಾಹ್ನ 2.30ಕ್ಕೆ ನಡೆಯಲಿದೆ ಎಂದು ಮಮತಾ ಅವರಿಗೆ ಆಪ್ತರಾದ ಟಿಎಂಸಿ ನಾಯಕರೊಬ್ಬರು ಹೇಳಿದ್ದಾರೆ.

"ಬಿಜೆಪಿಯೇತರ ಪಕ್ಷಗಳ ಆಳ್ವಿಕೆ ಇರುವ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳನ್ನು ಸಭೆಗೆ ಆಹ್ವಾನಿಸಲಾಗಿದೆ. ಕೆಲ ತುರ್ತು ಕಾರ್ಯಗಳ ಹಿನ್ನೆಲೆಯಲ್ಲಿ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಈಗಾಗಲೇ ಮಾಹಿತಿ ನೀಡಿದ್ದಾರೆ" ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಪುದುಚೇರಿ ಸಿಎಂ ವಿ.ನಾರಾಯಣಸ್ವಾಮಿ ಮತ್ತಿತರರು ಭಾಗವಹಿಸುವಿಕೆಯನ್ನು ಖಚಿತಪಡಿಸಿದ್ದಾರೆ.

ಪರೀಕ್ಷೆಗೆ ಪ್ರಯಾಣಿಸುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕೋವಿಡ್-19 ಸೋಂಕಿಗೆ ತುತ್ತಾಗುವ ಸಂಭವ ಇರುವುದರಿಂದ ಪರೀಕ್ಷೆ ಮುಂದೂಡು ವಂತೆ ಮಮತಾ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಿಸಿದ್ದರು. ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿರುವ ಅಧೀರ್ ರಂಜನ್ ಚೌಧರಿ ಕೂಡಾ ಪರೀಕ್ಷೆ ಮುಂದೂಡಿಕೆಗೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News