ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಪೀರನವಾಡಿಯಲ್ಲಿ ರಾಯಣ್ಣ ಪುತ್ಥಳಿ ಸ್ಥಾಪನೆ: ಸಚಿವ ರಮೇಶ್ ಜಾರಕಿಹೊಳಿ

Update: 2020-08-27 11:47 GMT

ಬೆಳಗಾವಿ, ಆ. 27: ಜಿಲ್ಲೆಯ ಪೀರನವಾಡಿ ಕ್ರಾಸ್‍ನಲ್ಲಿ ಸ್ವಾತಂತ್ರ್ಯ ಹೋರಾಟಗಾರ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಸಂಬಂಧ ಈಗಾಗಲೇ ಮುಖ್ಯಮಂತ್ರಿ, ಗೃಹ ಸಚಿವರು, ಕಾಗಿನೆಲೆ ಶ್ರೀಗಳೊಂದಿಗೆ ಸಮಾಲೋಚನೆ ನಡೆದಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಸ್ಥಳೀಯರೊಂದಿಗೆ ಜೊತೆ ಚರ್ಚಿಸಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಾಜಕ್ಕೆ ಹಿತವಾಗುವ ದೃಷ್ಟಿಯಿಂದ ಒಳ್ಳೆಯ ನಿರ್ಣಯ ಕೈಗೊಳ್ಳುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.

ಗುರುವಾರ ಇಲ್ಲಿನ ಸಕ್ಯೂರ್ಟ್ ಹೌಸ್‍ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ತೆರವು ವಿಚಾರ ಇಡೀ ರಾಜ್ಯಾದ್ಯಂತ ಸಾಕಷ್ಟು ವಿವಾದಕ್ಕೆ ಗ್ರಾಸವಾಗಿದೆ. ಅಲ್ಲದೆ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್, ಕರ್ನಾಟಕ ರಣಧೀರ ಪಡೆ, ಹಾಲುಮತ ಸೇರಿ ಸಾವಿರಾರು ರಾಯಣ್ಣ ಅಭಿಮಾನಿಗಳು ರಾಯಣ್ಣ ಪ್ರತಿಮೆ ಸ್ಥಾಪನೆಗೆ ಆಗ್ರಹಿಸಿ ಬೆಳಗಾವಿ ಚಲೋ ಹಮ್ಮಿಕೊಂಡಿದ್ದಾರೆ ಎಂಬುದು ಸರಕಾರದ ಗಮನಕ್ಕೆ ಬಂದಿದೆ.

ಈ ಮಧ್ಯೆ ಕುರುಬ ಸಮುದಾಯದ ಹಾಲುಮತ ಸಮಾಜ, ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ರಾಯಣ್ಣ ಅಭಿಮಾನಿಗಳ ಜೊತೆ ಸಭೆ ನಿಗದಿ ಪಡಿಸಲಾಗಿತ್ತು. ಆದರೆ, ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ರಾಯಣ್ಣ ಅಭಿಮಾನಿಗಳು ಬೆಳಗಾವಿ ಚಲೋ ಹಮ್ಮಿಕೊಂಡಿರುವ ಹಿನ್ನೆಲೆ ಜಿಲ್ಲಾಧಿಕಾರಿಗಳು ಮನವಿ ಸ್ವೀಕರಿಸಲು ತೆರಳಿದ್ದಾರೆ. ಅದೇ ಸ್ಥಳದಲ್ಲಿ ರಾಯಣ್ಣನ ಪುತ್ಥಳಿ ಸ್ಥಾಪಿಸಲಾಗುವುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News