ಖಾಸಗಿ, ಅನುದಾನಿತ, ಅತಿಥಿ ಉಪನ್ಯಾಸಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ: ಸಿಎಂಗೆ ಸಿದ್ದರಾಮಯ್ಯ ಪತ್ರ
ಬೆಂಗಳೂರು, ಆ.27: ಕೋವಿಡ್‍ನಿಂದಾಗಿ ಕೆಲಸವಿಲ್ಲದೆ ಸಂಕಷ್ಟ ಅನುಭವಿಸುತ್ತಿರುವ ಖಾಸಗಿ ಹಾಗೂ ಅನುದಾನಿತ ಶಾಲಾ ಶಿಕ್ಷಕರಿಗೆ ರಾಜ್ಯ ಸರಕಾರ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿರುವ ಅವರು, ಕೋವಿಡ್ ಲಾಕ್‍ಡೌನ್ ಪರಿಣಾಮವಾಗಿ ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕರು ಕಳೆದ ಆರು ತಿಂಗಳಿಂದ ಕೆಲಸ ಹಾಗೂ ಸಂಬಳವಿಲ್ಲದೆ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಇವರಿಗೆ ನೆರವಾಗಬೇಕಾಗಿರುವುದು ರಾಜ್ಯ ಸರಕಾರದ ಕರ್ತವ್ಯವೆಂದು ತಿಳಿಸಿದ್ದಾರೆ.
ಹಾಗೆಯೇ ರಾಜ್ಯ ಸರಕಾರಿ ಶಾಲಾ-ಕಾಲೇಜುಗಳಲ್ಲಿ ಅತಿಥಿ ಶಿಕ್ಷಕರಾಗಿ ಮತ್ತು ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಕೋವಿಡ್-19ರ ಕಾರಣಕ್ಕಾಗಿ ರಜಾ ಅವಧಿಯನ್ನು ಸೇವಾ ಅವಧಿಯೆಂದು ಪರಿಗಣಿಸಿ ಗೌರವಧನ ನೀಡಬೇಕು. ಹಾಗೂ ರಾಜ್ಯ ಪ್ರೌಢಶಾಲೆಗಳಲ್ಲಿ ಭಡ್ತಿಯಿಲ್ಲದೆ ಕರ್ತವ್ಯ ನಿರ್ವಹಿಸುತ್ತಿರುವ ಸಹ ಶಿಕ್ಷಕರಿಗೆ ನಿಯಮಾನುಸಾರ ಮುಖ್ಯ ಶಿಕ್ಷಕರ ಹುದ್ದೆಗೆ ಕೂಡಲೇ ಭಡ್ತಿ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.
ರಾಜ್ಯದ ಅನುದಾನಿತ ಶಾಲೆ-ಕಾಲೇಜುಗಳಲ್ಲಿ ಮಾ.30ರವರೆಗೆ ಖಾಲಿಯಿರುವ ಹುದ್ದೆಗಳನ್ನು ತುಂಬಿಕೊಳ್ಳಲು ಅನುಮತಿ ನೀಡಬೇಕು. ಹಾಗೂ ರಾಜ್ಯದ ವಸತಿ ಶಾಲೆಗಳಲ್ಲಿ 6ರಿಂದ 12ನೇ ತರಗತಿವರೆಗೆ ಮಕ್ಕಳ ಪ್ರವೇಶಕ್ಕೆ ನಿಗದಿಪಡಿಸಿರುವ ಪೋಷಕರ ಈಗಿನ ಆದಾಯದ ಮಿತಿಯನ್ನು ಎಸ್ಸಿ, ಎಸ್ಟಿ ಸಮುದಾಯಕ್ಕೆ 4 ಲಕ್ಷ ರೂ., ಹಿಂದುಳಿದ 2ಎ ವರ್ಗಕ್ಕೆ 4ಲಕ್ಷ ರೂ. ಹಾಗೂ ಇತರೆ ಹಿಂದುಳಿದ ವರ್ಗಕ್ಕೆ 3ಲಕ್ಷ ರೂ.ಗೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಅಂತಿಮವಾಗಿ ರಾಜ್ಯ ಸರಕಾರವು ಆರ್‍ಟಿಇ ಅಡಿಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಬಾಕಿಯಿರುವ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಪತ್ರದ ಮುಖೇನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಒತ್ತಾಯಿಸಿದ್ದಾರೆ.