×
Ad

ಆಸ್ತಿ ತೆರಿಗೆ ಪಾವತಿಯಿಂದ ವಿನಾಯಿತಿ ಕೋರಿ ಅರ್ಜಿ: ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ಸೂಚನೆ

Update: 2020-08-27 18:43 IST

ಬೆಂಗಳೂರು, ಆ.27: ಕೊರೋನ ಸೋಂಕು ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷದ ಆಸ್ತಿ ತೆರಿಗೆ ಪಾವತಿಯಿಂದ ವಿನಾಯಿತಿ ನೀಡುವಂತೆ ನಿರ್ದೇಶಿಸಲು ಕೋರಿ ಸಲ್ಲಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚಿಸಿದೆ.

ಈ ಕುರಿತು ವಕೀಲ ಗುರುದತ್ತ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ವಕೀಲ ಎನ್.ಪಿ. ಅಮೃತೇಶ್ ಪೀಠಕ್ಕೆ ಮಾಹಿತಿ ನೀಡಿ, ಆಸ್ತಿ ತೆರಿಗೆ ವಿನಾಯಿತಿ ನೀಡುವಂತೆ ಸಲ್ಲಿಸಿರುವ ಅರ್ಜಿಯನ್ನು ಕಾನೂನು ರೀತಿ ಪರಿಗಣಿಸುವಂತೆ ಹಿಂದಿನ ವಿಚಾರಣೆ ವೇಳೆ ನ್ಯಾಯಾಲಯ ಸೂಚಿಸಿತ್ತು. ಆದರೆ, ಸರಕಾರ ಮನವಿಯನ್ನು ತಿರಸ್ಕರಿಸಿದೆ ಎಂದು ಆರೋಪಿಸಿದರು.

ಅಲ್ಲದೇ, ರಾಜ್ಯ ಮತ್ತು ಕೇಂದ್ರ ಸರಕಾರಗಳು ಶ್ರಮಿಕ ವರ್ಗಕ್ಕೆ ಮತ್ತು ಉದ್ದಿಮೆಗಳಿಗೆ ಹಲವು ವಿಶೇಷ ಪ್ಯಾಕೇಜ್‍ಗಳನ್ನು ನೀಡಿವೆ. ಆದರೆ ಮಧ್ಯಮ ವರ್ಗದ ಕಟ್ಟಡಗಳ ಮಾಲಕರಿಗೆ ಯಾವುದೇ ಸೌಲಭ್ಯ ನೀಡಿಲ್ಲ. ಪ್ರಸಕ್ತ ನಗರದಾದ್ಯಂತ ಮನೆ, ಅಂಗಡಿಗಳು ಖಾಲಿ ಇರುವ ಟು-ಲೆಟ್ ನಾಮಫಲಕಗಳು ಕಾಣಿಸುತ್ತಿವೆ. ಪ್ರಸ್ತುತ ವಾಣಿಜ್ಯ ಮತ್ತು ವಸತಿ ಕಟ್ಟಡಗಳ ಮಾಲಕರು ಸಂಕಷ್ಟದಲ್ಲಿದ್ದಾರೆ ಎಂದು ವಿವರಿಸಿ, ಮನೆ ಮುಂಭಾಗಗಳಲ್ಲಿ ಟು-ಲೆಟ್ ಬೋರ್ಡ್ ಅಳವಡಿಸಿರುವ ಫೋಟೋಗಳನ್ನು ಪೀಠಕ್ಕೆ ಸಲ್ಲಿಸಿದರು.

ವಾದ ಆಲಿಸಿದ ಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸರಕಾರದ ಪರ ವಕೀಲರಿಗೆ ಸೂಚಿಸಿ, ವಿಚಾರಣೆಯನ್ನು ಸೆ.15ಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News