ಗ್ರಾ.ಪಂ ಚುನಾವಣೆಗೆ 250 ಕೋಟಿ ರೂ. ಬಿಡುಗಡೆಗೆ ಪ್ರಸ್ತಾವನೆ: ತೀರ್ಮಾನ ಕೈಗೊಳ್ಳಲು ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

Update: 2020-08-28 17:34 GMT

ಬೆಂಗಳೂರು, ಆ.28: ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸಲು 250 ಕೋಟಿ ರೂ.ಹಣ ಬಿಡುಗಡೆ ಮಾಡಲು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ ಪ್ರಸ್ತಾವನೆಯ ಕುರಿತು ತೀರ್ಮಾನ ಕೈಗೊಳ್ಳಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. 250 ಕೋಟಿ ರೂ.ನಲ್ಲಿ 65 ಕೋಟಿ ರೂ.ಕೊರೋನ ಹಿನ್ನೆಲೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಮೀಸಲಿರಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ. 

ಈ ಕುರಿತು ವಿಧಾನ ಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ರಾಜ್ಯ ಚುನಾವಣಾ ಆಯೋಗದ ಪರ ವಕೀಲರು ವಾದಿಸಿ, ಕೊರೋನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ 226 ತಾಲೂಕುಗಳು ಒಳಗೊಂಡಂತೆ 5,800 ಜಿಪಂಗೆ ಎರಡ್ಮೂರು ಹಂತಗಳಲ್ಲಿ ಚುನಾವಣೆ ನಡೆಸಲಾಗುವುದು. ಈ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಯುತ್ತಿದೆ ಎಂದು ಪೀಠಕ್ಕೆ ತಿಳಿಸಿದರು.

ಮತದಾರರ ಪಟ್ಟಿಯನ್ನು 2020ರ ಎ.20ರೊಳಗೆ ಅಂತಿಮಗೊಳಿಸುವಂತೆ ಎಲ್ಲ ಡಿಸಿಗಳಿಗೆ 2020ರ ಫೆ.3, ಮಾ.7ರಂದು ನಿರ್ದೇಶನ ನೀಡಲಾಗಿತ್ತು. ಮಾ.25ರಂದು ಲಾಕ್‍ಡೌನ್ ಘೋಷಣೆ ಹಿನ್ನೆಲೆ ಈ ಕೆಲಸ ಸ್ಥಗಿತಗೊಂಡಿತ್ತು. ಈಗ ಹೊಸದಾಗಿ ಡಿಸಿಗಳಿಗೆ ಸೂಚಿಸಲಾಗಿದೆ. 2020ರ ಸೆ.10ರೊಳಗೆ ಮತದಾರರ ಪಟ್ಟಿ ಅಂತಿಮಗೊಳ್ಳಲಿದೆ. ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಚುನಾವಣೆ ಮೊದಲ ವಾರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಆಯೋಗ ಹೇಳಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News