×
Ad

ಪಿಯುಸಿ ಪೂರಕ ಪರೀಕ್ಷೆಗೆ ಪೂರ್ವಸಿದ್ಧತೆ: ಜಿಲ್ಲಾಧಿಕಾರಿ ಜಿ.ಜಗದೀಶ್

Update: 2020-09-02 20:55 IST

ಉಡುಪಿ, ಸೆ.2: ಇದೇ ಸೆ.7ರಿಂದ 19ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ಪರೀಕ್ಷಾ ಪಾವಿತ್ರತೆಯನ್ನು ಕಾಪಾಡುವು ದರೊಂದಿಗೆ ಯಾವುದೇ ಲೋಪವಿಲ್ಲದಂತೆ ಪರೀಕ್ಷೆ ನಡೆಸಬೇಕೆಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬುಧವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಕೊರೋನ ಬಿಕ್ಕಟ್ಟಿನ ಮಧ್ಯೆ ನಡೆಯುತ್ತಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಂಡು ಇಲಾಖೆಯ ಮಾರ್ಗಸೂಚಿಯಂತೆ ಪರೀಕ್ಷೆಯನ್ನು ನಡೆಸಬೇಕೆಂದು ಅವರು ಸೂಚನೆ ನೀಡಿದರು.

ಜಿಲ್ಲೆಯ ಒಟ್ಟು 4 ಪರೀಕ್ಷಾ ಕೇಂದ್ರಗಳಲ್ಲಿ 1104 ವಿದ್ಯಾರ್ಥಿಗಳು, 614 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 1718 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದ ಅವರು, ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡಲಾಗುವುದು ಎಂದರು.
ಕೊರೋನಾ ದೃಢಪಟ್ಟ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಅನುಮತಿ ನೀಡಿದರೆ ಪ್ರತ್ಯೇಕ ಪರೀಕ್ಷಾ ಕೇಂದ್ರವನ್ನು ಸಿದ್ಧಪಡಿಸಬೇಕೆಂದು ಅವರು ಶಿಕ್ಷಣ ಇಲಾಖೆಗೆ ಸೂಚನೆ ನೀಡಿದರು.

ಈಗಾಗಲೇ ಎಸೆಸೆಲ್ಸಿ ಹಾಗೂ ಸಿಇಟಿ ಪರೀಕ್ಷೆಯನ್ನು ಜಿಲ್ಲೆಯಲ್ಲಿ ಸುವ್ಯವಸ್ಥಿತವಾಗಿ ನಡೆಸಿದ ಅನುಭವವಿದ್ದು ಅದೇ ರೀತಿಯಲ್ಲಿ ಪಿಯುಸಿ ಪೂರಕ ಪರೀಕ್ಷೆಯನ್ನು ಸಹ ವ್ಯವಸ್ಥಿತ ರೀತಿಯಲ್ಲಿ ನಡೆಸಬೇಕು ಎಂದರು. ಪರೀಕ್ಷಾ ಕೊಠಡಿಗಳನ್ನು ಸ್ಯಾನಟೈಸ್ ಮಾಡಬೇಕು. ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಿಳಿಸಬೇಕಲ್ಲದೇ ಪ್ರತಿಯೊಬ್ಬ ವಿದ್ಯಾರ್ಥಿಯ ಥರ್ಮಲ್ ಸ್ಕ್ಯಾನಿಂಗ್ ನಡೆಸಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡಬೇಕೆಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಮಾತನಾಡಿ ಪರೀಕ್ಷಾ ಕೇಂದ್ರದ ಹೊರ ಭಾಗದಲ್ಲಿ ಹಾಗೂ ಪರೀಕ್ಷಾ ಕೊಠಡಿಯಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಶಿಕ್ಷಕರು ಎಚ್ಚರವಹಿಸಬೇಕು ಎಂದರು.

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಭಗವಂತ ಕಟ್ಟಿಮನಿ, ತಹಶೀಲ್ದಾರರುಗಳಾದ ಪ್ರದೀಪ್ ಎಸ್. ಕುರ್ಡೇಕರ್, ಮಹೇಶ್ಚಂದ್ರ ಹಾಗೂ ಕಾರ್ಕಳ ಸರಕಾರಿ ಪದಪೂರ್ವ ಕಾಲೇಜಿನ ಪ್ರಾಂಶುಪಾಲ ಮಾಧವ್ ಭಟ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News