ಬ್ಯಾಂಕ್‍ಗಳಲ್ಲಿ ಕನ್ನಡ ಭಾಷೆ ನಿರ್ಲಕ್ಷ್ಯದ ವಿರುದ್ಧ ಹೋರಾಟ: ರವಿಕೃಷ್ಣಾ ರೆಡ್ಡಿ
ಬೆಂಗಳೂರು, ಸೆ.2: ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಖಾಸಗಿ ಬ್ಯಾಂಕ್‍ಗಳಲ್ಲಿ ಕನ್ನಡ ಬಗ್ಗೆ ನಿರ್ಲಕ್ಷ್ಯ ವಹಿಸಲಾಗಿದ್ದು, ಹಿಂದಿ ಮತ್ತು ಇಂಗ್ಲಿಷ್‍ನ್ನು ಹೇರಿಕೆ ಮಾಡಲಾಗುತ್ತಿದೆ. ಇದರ ವಿರುದ್ಧ ಹೋರಾಟ ಅನಿವಾರ್ಯವೆಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬ್ಯಾಂಕ್‍ಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ರಾಷ್ಟ್ರೀಕೃತ ಬ್ಯಾಂಕ್‍ಗಳ ರಾಜ್ಯ ವಲಯದ ಪ್ರಧಾನ ವ್ಯವಸ್ಥಾಪಕರಿಗೆ ಮನವಿ ಮಾಡಲಾಗಿದೆ. ಇದೇ ವೇಳೆ ಬೆಂಗಳೂರಿನಲ್ಲಿನರುವ ಎಸ್‍ಬಿಐ, ಯೂನಿಯನ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ, ಕೆನರಾ ಬ್ಯಾಂಕ್ ಸೇರಿದಂತೆ ಹಲವು ಬ್ಯಾಂಕ್‍ಗಳಿಗೆ ಭೇಟಿ ನೀಡಿ ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸಲು ಆಗ್ರಹಿಸಿ ಮನವಿ ಪತ್ರ ನೀಡಲಾಗಿದೆ ಎಂದರು.
ಬ್ಯಾಂಕ್ ಸಿಬ್ಬಂದಿ ನೇಮಕಾತಿಗಳಲ್ಲಿ ಕನ್ನಡಿಗರಿಗೆ ಅನ್ಯಾಯ ಮಾಡಲಾಗುತ್ತಿದ್ದು, ಕನ್ನಡ ಬಾರದ ಭಾಷಿಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಇದು ಹಿಂದಿ ಮತ್ತು ಇಂಗ್ಲಿಷ್ ಹೇರಿಕೆಯ ಮತ್ತು ಕನ್ನಡಿಗರ ಉದ್ಯೋಗವನ್ನು ಕಿತ್ತುಕೊಳ್ಳುವ ಹುನ್ನಾರವಾಗಿದೆ. ಕನ್ನಡದಲ್ಲಿ ವ್ಯವಹರಿಸುವ ಜನರ ಹಕ್ಕನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಬ್ಯಾಂಕ್‍ಗಳ ಧೋರಣೆಯಲ್ಲಿ ಬದಲಾಗದೆ ಕನ್ನಡ ವಿರೋಧಿ ನೀತಿಯನ್ನು ಮುಂದುವರೆಸಿದರೆ ಮುಂದಿನ ದಿನಗಳಲ್ಲಿ ಕರ್ನಾಟಕ ರಾಷ್ಟ್ರೀಯ ಪಕ್ಷದ ವತಿಯಿಂದ ರಾಜ್ಯದ ಎಲ್ಲ ಬ್ಯಾಂಕ್ ಶಾಖೆಗಳ ಮುಂದೆ ಹೋರಾಟ ಹಮ್ಮಿಕೊಳ್ಳಲಾಗುವುದೆಂದು ಅವರು ಎಚ್ಚರಿಕೆ ನೀಡಿದ್ದಾರೆ.