ಶಿಕ್ಷಕರ ದಿನಾಚರಣೆ ಕರಾಳ ದಿನವನ್ನಾಗಿ ಆಚರಣೆ: ಶಶಿಕುಮಾರ್

Update: 2020-09-03 08:36 GMT

ಬೆಂಗಳೂರು, ಸೆ.3: ಕೋವಿಡ್ ಸಮಯದಲ್ಲಿ ರಾಜ್ಯ ಸರಕಾರ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿರುವುದನ್ನು ಖಂಡಿಸಿ ಸೆ.5ರಂದು ನಡೆಯುವ ಶಿಕ್ಷಕರ ದಿನಾಚರಣೆಯನ್ನು ಕಪ್ಪು ಬಟ್ಟೆ ಧರಿಸಿ ಕರಾಳ ದಿನವನ್ನಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಖಾಸಗಿ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಹಾಗೆ ನೋಡಿದರೆ ರಾಜ್ಯದ ಬಹುತೇಕ ಶಿಕ್ಷಣ ವ್ಯವಸ್ಥೆ ನಿಂತಿರುವುದೇ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ. ಈ ಕ್ಷೇತ್ರವನ್ನು ನಂಬಿಕೊಂಡು ಲಕ್ಷಾಂತರ ಶಿಕ್ಷಕರು, ಬೋಧಕೇತರ ಸಿಬ್ಬಂದಿ ಬದುಕನ್ನು ಕಟ್ಟಿಕೊಂಡಿದ್ದಾರೆ. ಆದರೆ, ಸರಕಾರದ ನೀತಿಗಳು ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿವೆ ಎಂದು ಆರೋಪಿಸಿದ್ದಾರೆ.

ಶಿಕ್ಷಣ ಇಲಾಖೆ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಯಾವುದೇ ತೀರ್ಮಾನವನ್ನು ಕೈಗೊಳ್ಳುವ ಮುನ್ನ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಜೊತೆ ಚರ್ಚೆಸುವುದಿಲ್ಲ. ಅಧಿಕಾರಿಗಳ ಏಕಪಕ್ಷೀಯ ನಿರ್ಧಾರಗಳಿಂದಾಗಿ ಸಣ್ಣ ಪ್ರಮಾಣದ ಖಾಸಗಿ ಶಿಕ್ಷಣ ಸಂಸ್ಥೆಗಳು ಮುಚ್ಚಿ ಹೋಗುವಂತಹ ಪರಿಸ್ಥಿತಿಗೆ ಮುಟ್ಟಿವೆ. ನಮ್ಮ ಸಮಸ್ಯೆಗಳನ್ನು ಯಾರ ಬಳಿ ಪರಿಹರಿಸಿಕೊಳ್ಳುವುದೆಂಬುದು ಯಕ್ಷ ಪ್ರಶ್ನೆಯಾಗಿ ಉಳಿದಿದೆ ಎಂದವರು ಹೇಳಿದ್ದಾರೆ.

ಆರ್‌ಟಿಇ ಮೊದಲನೇ ಕಂತಿನ ಬಾಕಿ ಹಣ ಬಹುತೇಕ ಸಂಸ್ಥೆಗಳಿಗೆ ತಲುಪಿಯೇ ಇಲ್ಲ. ಇದರಿಂದಾಗಿ ಕಳೆದ ಆರು ತಿಂಗಳಿಂದ ಶಾಲೆಯ ಶಿಕ್ಷಕರಿಗೆ ಸಂಬಳ ಕೊಡಲು ಸಾಧ್ಯವಾಗುತ್ತಿಲ್ಲವೆಂಬ ಕೊರಗು ಖಾಸಗಿ ಶಾಲಾ ಆಡಳಿತ ಮಂಡಳಿಗಳದ್ದಾಗಿದೆ. ಆರ್‌ಟಿಇ ಬಾಕಿ ಹಣ ಪಾವತಿಸಲು ಸರಕಾರದಿಂದ ಆದೇಶವಿದ್ದರೂ ಶಿಕ್ಷಣ ಇಲಾಖೆ ಈ ಬಗ್ಗೆ ಸಂಪೂರ್ಣ ನಿರ್ಲಕ್ಷ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.

ಶಿಕ್ಷಣ ಇಲಾಖೆ ವಿದ್ಯಾಗಮ ಕಾರ್ಯಕ್ರಮವನ್ನು ಮುಂದಿಟ್ಟುಕೊಂಡು ಖಾಸಗಿ ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಿರ್ಲಕ್ಷ ಮಾಡುತ್ತಿದೆ. ಖಾಸಗಿ ಶಿಕ್ಷಣ ವ್ಯವಸ್ಥೆಯ ಸುತ್ತ ಲಕ್ಷಾಂತರ ಮಂದಿ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆಂಬುದನ್ನು ಶಿಕ್ಷಣ ಸಚಿವ ಸುರೇಶ್‌ಕುಮಾರ್ ಮರೆಯಬಾರದು. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಸರಕಾರದ ಧೋರಣೆಯನ್ನು ಖಂಡಿಸಿ ಶಿಕ್ಷಕರ ದಿನಾಚರಣೆಯನ್ನು ಕಪ್ಪುಬಟ್ಟೆ ಧರಿಸಿ ಕರಾಳ ದಿನವನ್ನಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News