ಲಾಕ್‍ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಕಲಾವಿದರಿಗೆ ವಿಶೇಷ ಪ್ಯಾಕೇಜ್ ಘೋಷಿಸಿಲು ಸಿಎಂಗೆ ಮನವಿ

Update: 2020-09-09 16:00 GMT

ಬೆಂಗಳೂರು, ಸೆ. 9: ಮಾರಕ ಕೊರೋನ ಸೋಂಕು ತಡೆಗಟ್ಟಲು ಹೇರಿದ್ದ ಸುದೀರ್ಘ ಲಾಕ್‍ಡೌನ್ ಪರಿಣಾಮ ಕನ್ನಡ ಚಿತ್ರರಂಗ ಮತ್ತು ಕಲಾವಿದರು ಆರ್ಥಿಕ ಸಂಕಷ್ಟದ ಸುಳಿಗೆ ಸಿಲುಕಿದ್ದು, ರಾಜ್ಯ ಸರಕಾರ ಚಿತ್ರರಂಗ ಹಾಗೂ ಕಲಾವಿದರ ನೆರವಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಕೋರಿ ನಟ ಶಿವರಾಜ್‍ ಕುಮಾರ್ ನೇತೃತ್ವದ ನಿಯೋಗ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದೆ.

ಬುಧವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಚಿತ್ರ ಕಲಾವಿದರ ನಿಯೋಗ, ಕೊರೋನ ಸೋಂಕು ತಡೆಗಟ್ಟಲು ಹೇರಿದ್ದ ಲಾಕ್‍ಡೌನ್‍ನಿಂದಾಗಿ ಚಿತ್ರರಂಗದ ಎಲ್ಲ ಚಟುವಟಿಕೆ ಸ್ಥಗಿತಗೊಂಡಿದ್ದವು. ಹೀಗಾಗಿ, ಈ ಉದ್ಯಮ ನಂಬಿಕೊಂಡಿರುವ ಕಲಾವಿದರು, ತಂತ್ರಜ್ಞರು, ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರಕಾರ ಅವರ ನೆರವಿಗೆ ಧಾವಿಸಬೇಕು ಎಂದು ಮನವಿ ಮಾಡಿದರು.

ಆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ನಟ ಶಿವರಾಜ್‍ ಕುಮಾರ್, ಕೊರೋನ ಲಾಕ್‍ಡೌನ್ ಪರಿಣಾಮ ಚಿತ್ರರಂಗ ನಷ್ಟ ಅನುಭವಿಸಿದೆ. ಆದುದರಿಂದ ಚಿತ್ರಮಂದಿರಗಳ ಪುನರಾರಂಭಕ್ಕೆ ಕ್ರಮ ವಹಿಸಬೇಕು. ಅಲ್ಲದೆ, ಸಂಕಷ್ಟಕ್ಕೆ ಸಿಲುಕಿರುವ ಕಲಾವಿದರಿಗೆ ಸರಕಾರ ವಿಶೇಷ ಪ್ಯಾಕೇಜ್ ಪ್ರಕಟಿಸಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದೇವೆ. ಆದರೆ, ಸಿಎಂ ಅವರು ಕೇಂದ್ರ ಸರಕಾರದ ಮಾರ್ಗಸೂಚಿ ಅನ್ವಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದರು.

ಇದೇ ವೇಳೆ ಮಾತನಾಡಿದ ನಟ ಯಶ್, ಕನ್ನಡ ಚಿತ್ರರಂಗ ಸಮೃದ್ಧವಾಗಿದೆ. ನಾಡಿನ ವಿವಿಧ ಮೂಲೆಗಳಿಂದ ದುಡಿಯಲು ಕನಸುಗಳನ್ನು ಹೊತ್ತುಕೊಂಡು ಸಾವಿರಾರು ಯುವಕರು ಬರುತ್ತಿದ್ದಾರೆ. ಆದರೆ, ಅವರಿಗೆ ಸಿನಿಮಾ ಬಗ್ಗೆ ತರಬೇತಿ ನೀಡುವ ಸಂಸ್ಥೆಯಿಲ್ಲ. ಕೂಡಲೇ, ಗುಣಮಟ್ಟದ ತರಬೇತಿ ಸಂಸ್ಥೆ ಪ್ರಾರಂಭಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೋರಿದ್ದೇವೆ ಎಂದು ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News