ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಧಿವೇಶನದಲ್ಲಿ ಚರ್ಚೆಗೆ ಒಳಪಡಿಸಿ: ಎಸ್‌ಐಓ ಆಗ್ರಹ

Update: 2020-09-10 10:25 GMT

ಉಡುಪಿ, ಸೆ.10: ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020 ಇದರ ಸಾಧಕ -ಬಾಧಕಗಳ ಬಗ್ಗೆ ಚರ್ಚಿಸಿ, ಅದರಲ್ಲಿ ನಮ್ಮ ರಾಜ್ಯಕ್ಕೆ ಅನುವಾಗುವ ಕರ್ನಾಟಕ ಶಿಕ್ಷಣ ನೀತಿ ರೂಪಿಸಬೇಕು. ಈ ನೀತಿಯನ್ನು ವಿಧಾನ ಸಭೆ ಮತ್ತು ವಿಧಾನ ಪರಿಷತ್ತು ಮಂಡಿಸಿ, ಚರ್ಚಿಸಿ ಅಂಗೀಕರಿಸಿದ ನಂತರವೇ ಜಾರಿಗೊಳಿಸಬೇಕು ಎಂದು ಉಡುಪಿ ಜಿಲ್ಲಾ ಎಸ್‌ಐಓ ಕ್ಯಾಂಪಸ್ ಕಾರ್ಯದರ್ಶಿ ಡಾ.ಫಹೀಮ್ ಹೂಡೆ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಲೋಕಸಭೆ ಮತ್ತು ರಾಜ್ಯಸಭೆ ಯಲ್ಲಿ ಯಾವುದೇ ರೀತಿ ಚರ್ಚೆ ನಡೆಸದೆ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡು ಜಾರಿ ಮಾಡಲು ಹೊರಟಿರುವ ಕೇಂದ್ರ ಸರಕಾರದ ನಡೆ ಹಲವು ಅನುಮಾನ ಗಳಿಗೆ ಕಾರಣವಾಗಿದೆ. ನೀತಿಯಲ್ಲಿನ ಗೊಂದಲಕಾರಿಯಾದ ಕೆಲವು ಅಂಶ ಗಳನ್ನು ಮರೆಮಾಚುವ ಮತ್ತು ಶಿಕ್ಷಣ ಖಾಸಗೀಕರಣಗೊಳಿಸುವ ಷಡ್ಯಂತ್ರ ಇದರ ಹಿಂದೆ ಅಡಗಿದೆ ಎಂದು ಆರೋಪಿಸಿದರು.

ಶಿಕ್ಷಣ ಸಮವರ್ತಿ ಪಟ್ಟಿಯಲ್ಲಿರುವುದರಿಂದ ರಾಷ್ಟ್ರೀಯ ಶಿಕ್ಷಣ ನೀತಿಯ ಜನ ಸ್ನೇಹಿ ಕೈಪಿಡಿಯನ್ನು ಕೂಡಲೇ ಸಾರ್ವಜನಿಕರಿಗೆ ಲಭ್ಯವಾಗಿಸಿ ಶಾಲೆ, ಪಂಚಾಯತ್, ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯ ಹಂತದಲ್ಲಿ ಅದರ ಸಾಧಕ- ಬಾಧಕಗಳ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಬೇಕು. ಸಾರ್ವಜನಿಕರಿಗೆ ಶಿಕ್ಷಣ ನೀತಿಯ ಬಗ್ಗೆ ತಿಳಿಸದೆ ಜಾರಿಗೊಳಿಸುವುದು ಪ್ರಜಾಸತ್ತಾತ್ಮಕವಾಗಿ ಸರಿಯಾದ ಪ್ರಕ್ರಿಯೆಯಲ್ಲ. ಆದುದರಿಂದ ಅದನ್ನು ತರಾತುರಿಯಾಗಿ ಜಾರಿಗೊಳಿಸ ಬಾರದು ಅವರು ಸರಕಾರವನ್ನು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಎಸ್‌ಐಓ ಜಿಲ್ಲಾಧ್ಯಕ್ಷ ನಾಸೀರ್ ಹೂಡೆ, ಕಾರ್ಯದರ್ಶಿ ಮಹಮ್ಮದ್ ಶಾರೂಕ್, ಸದಸ್ಯರಾದ ವಸೀಮ್ ಅಬ್ದುಲ್ಲಾ, ಅಯಾನ್ ಮಲ್ಪೆ, ಯಾಸಿನ್ ಮನ್ನ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News