ದಲಿತರ ಮೇಲೆ ದೌರ್ಜನ್ಯ: ತಪ್ಪಿತಸ್ಥರ ಗಡಿಪಾರಿಗೆ ಆಗ್ರಹಿಸಿ ದಸಂಸ ಧರಣಿ ಸತ್ಯಾಗ್ರಹ

Update: 2020-09-10 16:47 GMT

ಬೆಂಗಳೂರು, ಸೆ. 10: ವಿಜಯಪುರ ಜಿಲ್ಲೆ ಸಿಂಧಗಿ ಮತ್ತು ಬಾಗಲಕೋಟೆ ಜಿಲ್ಲೆ ಮುಧೋಳ್‍ದಲ್ಲಿ ದಲಿತರನ್ನು ಕೊಲೆಗೈದ ಆರೋಪಿಗಳನ್ನು ಕೂಡಲೇ ಬಂಧಿಸಿ ರಾಜ್ಯದಿಂದ ಗಡಿಪಾರು ಮಾಡಬೇಕು. ಅಲ್ಲದೆ, ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮವಾದ) ಹಾಗೂ ಆರ್‍ಪಿಐನಿಂದ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಗುರುವಾರ ಇಲ್ಲಿನ ಮೌರ್ಯ ವೃತ್ತದಲ್ಲಿ ದಸಂಸ ರಾಜ್ಯಾಧ್ಯಕ್ಷ ಆರ್.ಮೋಹನ್ ರಾಜ್ ನೇತೃತ್ವದಲ್ಲಿ ಸತ್ಯಾಗ್ರಹ ನಡೆಸಿದ ಕಾರ್ಯಕರ್ತರು, ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟುವಲ್ಲಿ ಸಂಪೂರ್ಣ ವಿಫಲವಾಗಿರುವ ರಾಜ್ಯ ಸರಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಮುಖಂಡರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜೀವನಾಧಾರಿತ `ಮಹಾನಾಯಕ' ಧಾರಾವಾಹಿ ಬಿತ್ತರಿಸುತ್ತಿರುವ ಖಾಸಗಿ ವಾಹಿನಿಯ ಮುಖ್ಯಸ್ಥರಿಗೆ ಬೆದರಿಕೆ ಹಾಕಿದವರನ್ನು ಕೂಡಲೇ ಗೂಂಡಾ ಕಾಯ್ದೆಯಡಿ ಬಂಧಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದಲಿತ ಮತ್ತು ಶೋಷಿತ ಸಮುದಾಯದ ಮೇಲೆ ನಿರಂತರ ಹಲ್ಲೆ, ದೌರ್ಜನ್ಯಗಳು ಮಿತಿಮೀರಿವೆ. ಹೀಗಾಗಿ ಸರಕಾರ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಆ ಬಳಿಕ ಮುಖಂಡರ ನಿಯೋಗ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮನವಿಯನ್ನು ಸಲ್ಲಿಸಿತು. ಧರಣಿಯಲ್ಲಿ ಮುಖಂಡರಾದ ವೀರಸಂಗಯ್ಯ, ಚನ್ನಕೃಷ್ಣಪ್ಪ,  ಮೈತ್ರಿ, ಹನುಮಂತಪ್ಪ, ರಾಜಣ್ಣ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News