×
Ad

ಸದಾಶಿವ ಆಯೋಗದ ವರದಿ ಜಾರಿ: ದಲಿತ ಸಮುದಾಯದ ಒಗ್ಗಟ್ಟು ಪ್ರದರ್ಶನಕ್ಕೆ ತೀರ್ಮಾನ- ಎಚ್.ಆಂಜನೇಯ

Update: 2020-09-10 22:41 IST

ಬೆಂಗಳೂರು, ಸೆ.10: ಮುಂದಿನ ವಿಧಾನಸಭೆಯ ಅಧಿವೇಶನದಲ್ಲಿ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಮಂಡಿಸಿ ಕೂಡಲೇ ಕೇಂದ್ರ ಸರಕಾರಕ್ಕೆ ಕಳಿಸಿಕೊಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ದಲಿತ ಸಮುದಾಯದ ಎಲ್ಲ ಸಂಘಟನೆಯ ನಾಯಕರು, ಜನಪ್ರತಿನಿಧಿಗಳು, ಮಠಾಧೀಶರು ಸಂಘಟಿತವಾಗಿ ಒತ್ತಾಯಿಸಲು ನಿರ್ಧರಿಸಲಾಗಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.

ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಒತ್ತಾಯಿಸಲು ಶಾಸಕರ ಭವನದಲ್ಲಿ ಆಯೋಜಿಸಿದ್ದ ಮಾದಿಗ ಸಮುದಾಯದ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಅನ್ಯಾಯಕ್ಕೆ ಒಳಗಾಗಿರುವ ಪರಿಶಿಷ್ಟ ಜಾತಿಯ ಸಮುದಾಯಕ್ಕೆ ಒಳಮೀಸಲು ಕೊಡುವ ಅಧಿಕಾರ ರಾಜ್ಯ ಸರಿಕಾರಗಳಿಗೆ ಇದೆಯೆಂದು ಸುಪ್ರೀಂ ಕೋರ್ಟ್ ಅಭಿಪ್ರಾಯಿಸಿದೆ. ಹೀಗಾಗಿ ರಾಜ್ಯ ಸರಕಾರ ಕೂಡಲೇ ಎ.ಜೆ.ಸದಾಶಿವ ಆಯೋಗದ ವರದಿಯ ಅನುಷ್ಟಾನಕ್ಕೆ ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಿ ಅನುಷ್ಟಾನ ಆಗುವಂತೆ ನೋಡಿಕೊಳ್ಳಬೇಕೆಂದು ಒತ್ತಾಯಿಸಿದರು.

ಸಭೆಯ ತೀರ್ಮಾನುಗಳು: ಸೆ.21ರಂದು ಪ್ರಾರಂಭವಾಗುವ ವಿಧಾನ ಸಭೆಯ ಅಧಿವೇಶದಲ್ಲಿ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಮಂಡಿಸಿ ಕೂಡಲೇ ಕೇಂದ್ರ ಸರಕಾರಕ್ಕೆ ಕಳಿಸಿಕೊಡಲು ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಒಳ ಮೀಸಲಾತಿ ಜಾರಿ ಹೋರಾಟಕ್ಕೆ ಬಲಗೈ ಸಮುದಾಯದ ಪ್ರಮುಖ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್, ಶ್ರೀನಿವಾಸ ಪ್ರಸಾದ್, ಎಚ್.ಸಿ.ಮಹಾದೇವಪ್ಪರನ್ನು ಭೇಟಿಯಾಗಿ ನಮ್ಮ ಹೋರಾಟಕ್ಕೆ ಬೆಂಬಲಿಸುವಂತೆ ಹಾಗೂ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸುವಂತೆ ಸರಕಾರವನ್ನು ಒತ್ತಾಯಿಸುವಂತೆ ಮನವಿ ಮಾಡಿಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಸಭೆಯಲ್ಲಿ ವಿಧಾನಸಭೆಯ ಸಂಸದ ಎ.ನಾರಾಯಣಸ್ವಾಮಿ, ವಿಧಾನಸಭೆಯ ಸದಸ್ಯರಾದ ದುರ್ಯೋಧನ ಐಹೊಳೆ, ಬಸವರಾಜ ಮತ್ತಿಮಡ್, ಪ್ರೊ.ಲಿಂಗಣ್ಣ, ವಿಧಾನ ಪರಿಷತ್‍ನ ಸದಸ್ಯ ಧರ್ಮಸೇನಾ, ಮಾಜಿ ಸಚಿವ ಎ.ಶಿವಣ್ಣ, ಅನುಸೂಯಮ್ಮ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News