ಮುಖ್ಯಮಂತ್ರಿ ಯಡಿಯೂರಪ್ಪರನ್ನು ಭೇಟಿಯಾದ ಕುಮಾರಸ್ವಾಮಿ

Update: 2020-09-11 12:23 GMT

ಬೆಂಗಳೂರು, ಸೆ. 11: `ಬದ್ಧ ವೈರಿಗಳಂತೆ' ಗುರುತಿಸಿಕೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಜೆಡಿಎಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪರಸ್ಪರ ಭೇಟಿ ಮಾಡಿ ಸಮಾಲೋಚನೆ ನಡೆಸಿರುವುದು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಶುಕ್ರವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸುಮಾರು 15 ನಿಮಿಷಗಳಿಗೂ ಹೆಚ್ಚು ಕಾಲ ಸಮಾಲೋಚನೆ ನಡೆಸಿದ್ದು, ರಾಜ್ಯದಲ್ಲಿನ ಪ್ರಸಕ್ತ ಬೆಳವಣಿಗೆಗಳ ಹಾಗೂ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಇಬ್ಬರೂ ನಾಯಕರು ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಆದರೆ, ಉಭಯ ನಾಯಕರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಯಾವುದೇ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿಲ್ಲ. ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಹಾಗೂ ಮಳೆ ಮತ್ತು ನೆರೆ ಹಾವಳಿ ಹಿನ್ನೆಲೆಯಲ್ಲಿ ಸರಕಾರ ತ್ವರಿತ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಮಾಲೋಚನೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.

ಅನುದಾನಕ್ಕೆ ಮನವಿ: ರಾಜ್ಯದಲ್ಲಿ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಹೆಚ್ಚು ಹಾನಿ ಉಂಟಾಗುತ್ತಿದೆ. ಬೆಂಗಳೂರಿನ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಹಳ ಹಾನಿಯಾಗಿದ್ದು, ನಾನು ಸಿಎಂ ಆಗಿದ್ದಾಗ ಹೆಚ್ಚಿನ ಅನುದಾನ ನೀಡಿದ್ದೆ. ಆದರೆ, ಆ ಮೊತ್ತ ಸಮಪರ್ಕವಾಗಿ ಬಿಡುಗಡೆಯಾಗಿರಲಿಲ್ಲ. ಹೀಗಾಗಿ ಮುಖ್ಯಮಂತ್ರಿಗೆ ಈ ಸಂಬಂಧ ಮನವಿ ಮಾಡಿದ್ದೇನೆ ಎಂದರು.

ಇದೇ ವೇಳೆ ಮಾತನಾಡಿದ ದಾಸರಹಳ್ಳಿ ಕ್ಷೇತ್ರದ ಜೆಡಿಎಸ್ ಶಾಸಕ ಮಂಜುನಾಥ್, ಮಳೆಯಿಂದ ಕ್ಷೇತ್ರದಲ್ಲಿ ಹೆಚ್ಚು ಹಾನಿ ಆಗಿದೆ. ಹೀಗಾಗಿ ಕುಮಾರಸ್ವಾಮಿ ಸಿಎಂ ಆಗಿದ್ದ ವೇಳೆ ನೀಡಿದ್ದ ಅನುದಾನ ಬಿಡುಗಡೆ ಕೋರಿದ್ದೇವೆ. ಪೀಣ್ಯ ಕೈಗಾರಿಕಾ ಪ್ರದೇಶವೂ ನನ್ನ ಕ್ಷೇತ್ರದಲ್ಲಿ ಅಲ್ಲಿಂದ ಹೆಚ್ಚಿನ ಅದಾಯ ಬರುತ್ತದೆ. ಹೀಗಾಗಿ ಕ್ಷೇತ್ರದಲ್ಲಿನ ಮಳೆ ಹಾನಿಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಕೋರಿದ್ದೇವೆ ಎಂದು ಹೇಳಿದರು.

ದಾಸರಹಳ್ಳಿ ಕ್ಷೇತ್ರದಲ್ಲಿ ಮಳೆಯಿಂದ ಹಾನಿಯಾಗಿದ್ದು, ಅದರ ಪರಿಹಾರ ಕಾರ್ಯಗಳಿಗೆ ಹೆಚ್ಚು ಬಿಡುಗಡೆ ಮಾಡಬೇಕು ಎಂದು ಕೋರಲು ಶಾಸಕ ಮಂಜುನಾಥ್ ಅವರು ಮಾಜಿ ಸಿಎಂ ಕುಮಾರಸ್ವಾಮಿಯವರನ್ನು ಕರೆದುಕೊಂಡು ಬಂದಿದ್ದರು. ಅವರೊಂದಿಗೆ ನಾನು ಸಮಾಲೋಚನೆ ನಡೆಸಿದ್ದೇವೆ. ಆದರೆ, ಈ ವೇಳೆ ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ. ದಾಸರಹಳ್ಳಿ ಕ್ಷೇತ್ರದ ಬಗ್ಗೆ ಸಮಾಲೋಚನೆ ನಡೆಸಿದ್ದೇವೆ

-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ

ರಾಜ್ಯದಲ್ಲಿ ಮಾದಕ ವಸ್ತುಗಳ ಜಾಲದ ಬಗ್ಗೆ ಚರ್ಚೆ ನಡೆಯುತ್ತಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಸಿಎಂ ತಿಳಿಸಿದ್ದಾರೆ. ಈ ಕೃತ್ಯದಲ್ಲಿ ಯಾರೇ ಇದ್ದರೂ ಕಠಿಣ ಕ್ರಮ ಕೈಗೊಳ್ಳಬೇಕು. ಬಿಜೆಪಿ ನಾಯಕತ್ವ ಬದಲಾವಣೆ ಬಗ್ಗೆ ನಾನು ಮಾತನಾಡುವುದಿಲ್ಲ. ಅದು ಆ ಪಕ್ಷದೊಳಗಿನ ಆಂತರೀಕ ವಿಚಾರ. ಅದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ

-ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಿಎಂ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News