ಕೆಎಸ್‍ಪಿಸಿಬಿ ಅಧ್ಯಕ್ಷರ ನೇಮಕ ಪ್ರಕ್ರಿಯೆ ಅಂತಿಮಗೊಳಿಸಬೇಡಿ: ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

Update: 2020-09-11 15:53 GMT

ಬೆಂಗಳೂರು, ಸೆ.11: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಗೆ(ಕೆಎಸ್‍ಪಿಸಿಬಿ) ಅಧ್ಯಕ್ಷ ಮತ್ತು ಕಾರ್ಯದರ್ಶಿ ನೇಮಕ ಮಾರ್ಗಸೂಚಿ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಬಾಕಿ ಇರುವ ಹಿನ್ನೆಲೆ ಈ ಎರಡೂ ಹುದ್ದೆಗಳಿಗೆ ನೇಮಕ ಪ್ರಕ್ರಿಯೆಯನ್ನು ಅಂತಿಮಗೊಳಿಸಬಾರದು ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ.

ಈ ಕುರಿತು ಚಿಕ್ಕಬಳ್ಳಾಪುರದ ಆರ್.ಆಂಜನೇಯರೆಡ್ಡಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ, 2020ರ ಜೂ.19ರಂದು ಹೊರಡಿಸಿರುವ ಮಾರ್ಗಸೂಚಿಗಳಲ್ಲಿನ ಕೆಲವು ಷರತ್ತುಗಳನ್ನು ಮಾರ್ಪಡಿಸಲು ರಾಜ್ಯ ಸರಕಾರಕ್ಕೆ ತಿಳಿಸಿತು.

ನೇಮಕ ಪ್ರಕ್ರಿಯೆ ಶುಕ್ರವಾರ ಪ್ರಾರಂಭವಾಗಲಿದೆ ಎಂದು ಅಡ್ವಕೇಟ್ ಜನರಲ್ ಪ್ರಭುಲಿಂಗ ಕೆ. ನಾವಡಗಿ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ವಿಚಾರಣೆಯನ್ನು ಸೆ.15ಕ್ಕೆ ಮುಂದೂಡಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News