ಆಳುವ ಸರಕಾರಗಳ ನೀತಿ ಬಡಜನರಿಗೆ ಮಾರಕವಾಗಿವೆ: ಶಿವಸುಂದರ್

Update: 2020-09-11 16:37 GMT

ಬಂಟ್ವಾಳ : ಲಾಕ್ ಡೌನ್ ಘೋಷಣೆಯಾದ ಬಳಿಕ ಕೇಂದ್ರ ಮತ್ತು ರಾಜ್ಯ ಸರಕಾರಗಳು ದಿಢೀರನೆ ಸುಗ್ರೀವಾಜ್ಞೆ ಹೊರಡಿಸಿ ಜಾರಿಗೆ ತಂದ ಭೂ ಸುಧಾರಣಾ ಕಾಯಿದೆ, ಎಪಿಎಂಸಿ ಕಾಯಿದೆ, ಕಾರ್ಮಿಕ ಕಾನೂನು ಅಗತ್ಯ ಸರಕುಗಳ ಕಾಯಿದೆಗಳ ತಿದ್ದುಪಡಿ ಹಾಗೂ ವಿದ್ಯುತ್ ಖಾಸಗೀಕರಣ ಹಾಗೂ ಮೇಲ್ಜಾತಿಯವರಿಗೆ ಶೇ.10 ಮೀಸಲಾತಿ ಸಹಿತ ಕೆಲವು ಕಾಯ್ದೆಗಳಿಂದ ಇಡೀ ದೇಶದ ಜನರು ತೊಂದರೆಗೆ ಒಳಗಾಗಲಿದ್ದಾರೆ ಎಂದು ಚಿಂತಕ ಶಿವಸುಂದರ್ ಹೇಳಿದ್ದಾರೆ.

ರೈತ ದಲಿತ ಕಾರ್ಮಿಕ ಜನಪರ ಚಳವಳಿಗಳ ಒಕ್ಕೂಟ ವತಿಯಿಂದ ಭೂ ಸುಧಾರಣಾ ಕಾಯಿದೆ, ಎಪಿಎಂಸಿ ಕಾಯಿದೆ, ಕಾರ್ಮಿಕ ಕಾನೂನು ಅಗತ್ಯ ಸರಕುಗಳ ಕಾಯಿದೆಗಳ ತಿದ್ದುಪಡಿ ವಿದ್ಯುತ್ ಖಾಸಗೀಕರಣ ಹಾಗೂ ಮೇಲ್ಜಾತಿಯವರಿಗೆ ಶೇ.10 ಮೀಸಲಾತಿ ವಿಷಯಗಳ ಕುರಿತು ಬಿ.ಸಿ.ರೋಡ್ ರಂಗೋಲಿ ಸಭಾಭವನದಲ್ಲಿ ಜಿಲ್ಲಾ ಮಟ್ಟದ ಮಟ್ಟದ ವಿಚಾರಗೋಷ್ಟಿ ಮತ್ತು ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಳುವ ಸರ್ಕಾರಗಳ ನೀತಿ ಬಡಜನರಿಗೆ ಮಾರಕವಾಗಿವೆ ಎಂದ ಅವರು, ನಮ್ಮ ತೆರಿಗೆ ಹಣವನ್ನು ಶ್ರೀಮಂತರ ಜೇಬಿಗೆ ಭರ್ತಿ ಮಾಡಲಾಗು ತ್ತಿದೆ ಎಂದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೀತಿಗಳನ್ನು ಕಟುವಾಗಿ ಟೀಕಿಸಿದ ಅವರು, ಸರ್ಕಾರಗಳು ಜನರ ಹಿತ ಕಾಯುತ್ತಿಲ್ಲ ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಆಶಯಗಳನ್ನು ವಿವರಿಸಿದರು. ಅಗತ್ಯ ಸರಕುಗಳ ಕಾಯ್ದೆ, ಬೀಜಕಾಯ್ದೆ ತಿದ್ದುಪಡಿ, ವಿದ್ಯುತ್ ಖಾಸಗೀಕರಣ ಮತ್ತು ಮೇಲ್ಜಾತಿಯವರಿಗೆ ಶೇ.10 ಮೀಸಲಾತಿ ಕುರಿತು ಶಿವಸುಂದರ್ ಮಾತನಾಡಿದರೆ, ಭೂಸುಧಾರಣೆ ಕಾಯ್ದೆ ತಿದ್ದುಪಡಿ ಕುರಿತು ಕರ್ನಾಟಕ ರಾಜ್ಯ ರೈತ ಸಂಘದ ಹಾಗೂ ಹಸಿರು ಸೇನೆಯ ರಾಜ್ಯ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ವಿಷಯ ಮಂಡಿಸಿದರು. ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ಮಾರುತಿ ಮಾನ್ಪಡೆ ಎಪಿಎಂಸಿ ಕಾಯ್ದೆ ಮತ್ತು ಕಾರ್ಮಿಕ ಕಾಯ್ದೆ ತಿದ್ದುಪಡಿಯ ಸಾಧಕ ಬಾಧಕಗಳನ್ನು ವಿವರಿಸಿದರು.

ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಫೆರ್ನಾಂಡೀಸ್ ವಹಿಸಿದ್ದರು. ಮಾಜಿ ಸಚಿವ ಬಿ.ರಮಾನಾಥ ರೈ ಆಗಮಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ಕೆ.ಯಾದವ ಶೆಟ್ಟಿ, ರಾಮ ಚನ್ನಪಟ್ಟಣ, ಸಿ.ಐ.ಟಿ.ಯು ಜಿಲ್ಲಾಧ್ಯಕ್ಷರಾದ ಜೆ.ಬಾಲಕೃಷ್ಣ ಶೆಟ್ಟಿ, ದಲಿತ ಸಂಘರ್ಷ ಸಮಿತಿ ಪ್ರೊ .ಬಿ.ಕೃಷ್ಣಪ್ಪ ಸ್ಥಾಪಿತ ರಾಜ್ಯ ಸಂಘಟನಾ ಸಂಚಾಲಕರಾದ ಎಂ.ದೇವದಾಸ್, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಕೃಷ್ಣಪ್ಪ ಸಾಲ್ಯಾನ್, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಮುಖಂಡರಾದ ರಾಮಣ್ಣ ವಿಟ್ಲ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಪ್ರಸಾದ್ ಶೆಟ್ಟಿ ಪೆರಾಬೆ, ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಂಚಾಲಕರಾದ ಜಗದೀಶ್ ಪಾಂಡೇಶ್ವರ, ಡಿ.ವೈ.ಎಫ್.ಐ ಬಂಟ್ವಾಳ ತಾಲೂಕು ಕಾರ್ಯದರ್ಶಿ ನ್ಯಾಯವಾದಿ ತುಳಸೀದಾಸ್ ವಿಟ್ಲ, ಮಾನವ ಬಂಧುತ್ವ ವೇದಿಕೆ ತಾಲೂಕು ಸಂಚಾಲಕರಾದ ರಾಜಾ ಚೆಂಡ್ತಿಮಾರ್, ಕರಾವಳಿ ಜನಾಭಿವೃದ್ಧಿ ವೇದಿಕೆಯ ಶಬ್ಬೀರ್ ಅಹಮ್ಮದ್ ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕರ್ನಾಟಕ ಪ್ರಾಂತ ರೈತಸಂಘ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ), ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ), ದಲಿತ ಸೇವಾ ಸಮಿತಿ, ಸಿಐಟಿಯು, ಕರಾವಳಿ ಕರ್ನಾಟಕ ಜನಾಭಿವೃದ್ಧಿ ವೇದಿಕೆ, ಕೃಷಿ ಭೂಮಿ ಸಂರಕ್ಷಣಾ ಸಮಿತಿ, ಮಾನವ ಬಂಧುತ್ವ ವೇದಿಕೆ, ಡಿವೈಎಫ್ ಐ ಸಹಯೋಗ ನೀಡಿದ್ದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News